*ತೋಟದಲ್ಲಿ ಯುವಕನ ಶವ ಪತ್ತೆ: ಬೆಳಗಾವಿ ಪೊಲೀಸರಿಂದ ತನಿಖೆ ಚುರುಕು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಅನುಮಾನಾಸ್ಪದ ರೀತಿಯಲ್ಲಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬಳ್ಳಿಗೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ತೋಟವೊಂದರಲ್ಲಿ ಯುವಕನ ಶವ ಪತ್ತೆಯಾಗಿದ್ದು, ಘಟನೆ ಹಲವು ಅನುಮಾನಗಳಿಗೆ ಕಾರಣವಾಗಿದೆ.
ಮೃತ ಯುವಕನನ್ನು ಮಹಾರಾಷ್ಟ್ರದ ಜಯಸಿಂಗಪುರ ನಿವಾಸಿ ರಣವೀರ ದತ್ತುಸಿಂಗ ರಜಪೂತ (32) ಎಂದು ಗುರುತಿಸಲಾಗಿದೆ. ರಣವೀರ ಹಲವು ವರ್ಷಗಳಿಂದ ಬಳ್ಳಿಗೇರಿ ಗ್ರಾಮದಲ್ಲಿ ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು ಎನ್ನಲಾಗಿದೆ.
ತೋಟದ ಪ್ರದೇಶದಲ್ಲಿ ಯುವಕನ ಶವ ಪತ್ತೆಯಾದ ಹಿನ್ನೆಲೆಯಲ್ಲಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ದೊರೆಯುತ್ತಿದ್ದಂತೆ ಅಥಣಿ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಘಟನೆಯ ಸ್ವರೂಪವನ್ನು ತಿಳಿದುಕೊಳ್ಳಲು ಶ್ವಾನದಳ ಹಾಗೂ ಬೆರಳಚ್ಚು ತಜ್ಞರ ತಂಡವನ್ನೂ ಸ್ಥಳಕ್ಕೆ ಕರೆಸಿ ಪರಿಶೀಲನೆ ನಡೆಸಲಾಗಿದೆ. ಪೊಲೀಸರು ಘಟನಾ ಸ್ಥಳದಲ್ಲಿನ ವಿವಿಧ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ, ಯುವಕನ ಸಾವಿಗೆ ಕಾರಣವೇನು ಎಂಬುದರ ಕುರಿತು ತನಿಖೆ ಆರಂಭಿಸಿದ್ದಾರೆ. ಸದ್ಯಕ್ಕೆ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಇದು ಸಹಜ ಸಾವೇ ಅಥವಾ ಬೇರೆ ಯಾವುದೇ ಕಾರಣದಿಂದ ಸಂಭವಿಸಿದೆಯೇ ಎಂಬುದನ್ನು ತನಿಖೆಯ ಬಳಿಕವಷ್ಟೇ ಖಚಿತಪಡಿಸಿಕೊಳ್ಳಬೇಕಿದೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಅಥಣಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಸಾವಿನ ನಿಖರ ಕಾರಣದ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗುವ ನಿರೀಕ್ಷೆಯಿದೆ.
ಈ ಸಂಬಂಧ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಘಟನೆಗೆ ಸಂಬಂಧಿಸಿದಂತೆ ತನಿಖೆ ಮುಂದುವರಿಸಿದ್ದಾರೆ. ಯುವಕನ ಸಾವಿನ ಹಿನ್ನೆಲೆ, ಆತ ಕೊನೆಯದಾಗಿ ಯಾರೊಂದಿಗೆ ಸಂಪರ್ಕದಲ್ಲಿದ್ದ ಹಾಗೂ ಘಟನೆಗೂ ಮುನ್ನ ನಡೆದಿರುವ ಬೆಳವಣಿಗೆಗಳ ಕುರಿತು ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.



