*ಉತ್ತರ ಕನ್ನಡದಲ್ಲಿ ಮಳೆ ಅಬ್ಬರ: ಯೆಲ್ಲೋ ಅಲರ್ಟ್ ಘೋಷಣೆ* *40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ

ಪ್ರಗತಿವಾಹಿನಿ ಸುದ್ದಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಹಿನ್ನೆಲೆಯಲ್ಲಿ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜಿಲ್ಲೆಯ ಹಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾರತೀಯ ಹವಾಮಾನ ಇಲಾಖೆ ಪ್ರಕಾರ ಇಂದು ಉತ್ತರ ಕನ್ನಡದಲ್ಲಿ ಭಾರಿ ಮಳೆಯೊಂದಿಗೆ ಗುಡುಗು, ಮಿಂಚು ಹಾಗೂ ಬಿರುಗಾಳಿಯ ಸಾಧ್ಯತೆ ಇದೆ. ನಾಳೆಯೂ ಕೂಡ ಗುಡುಗು-ಮಿಂಚು ಮತ್ತು ಬಿರುಗಾಳಿಯ ಸಾಧ್ಯತೆ ಮುಂದುವರಿಯಲಿದೆ. ಸೆ.26ರಿಂದ ಯಾವುದೇ ಮಳೆ ಎಚ್ಚರಿಕೆ ಇರುವುದಿಲ್ಲ ಎಂದು ಇಲಾಖೆ ತಿಳಿಸಿದೆ.
ಇಂದು ಬೆಳಗ್ಗೆ 8.30ರವರೆಗೆ ಉತ್ತರ ಕನ್ನಡ ಜಿಲ್ಲೆಯ ಪ್ರತ್ಯೇಕ ಸ್ಥಳಗಳಲ್ಲಿ ಅತಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಇದೇ ಅವಧಿಯಲ್ಲಿ ಉಡುಪಿ, ಕೊಪ್ಪಳ, ಗದಗ, ರಾಯಚೂರು, ಬೆಳಗಾವಿ, ಧಾರವಾಡ, ಬಳ್ಳಾರಿ, ವಿಜಯನಗರ, ತುಮಕೂರು, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲೂ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ.
ಕಾರವಾರ ಸೇರಿದಂತೆ ಉತ್ತರ ಕನ್ನಡದ ಕರಾವಳಿ ಭಾಗಗಳಲ್ಲಿ ಸೆ.24ರಂದು ಭಾರಿ ಮಳೆಯೊಂದಿಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಗುಡುಗು-ಮಿಂಚಿನ ಮುನ್ಸೂಚನೆಯೂ ಇದೆ. ಹೀಗಾಗಿ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮಳೆಯ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲಾಡಳಿತ ಸಾರ್ವಜನಿಕರಿಗೆ ಹಲವು ಮುನ್ನೆಚ್ಚರಿಕೆಗಳನ್ನು ನೀಡಿದೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿರುವ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರವನ್ನು 24 ಗಂಟೆಯೂ ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿದೆ. ಭಾರಿ ಮಳೆಯಾದ ಸಂದರ್ಭದಲ್ಲಿ ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ತಿಳಿಸಲಾಗಿದೆ.
ನದಿ, ಹಳ್ಳ, ಕೆರೆ ಸೇರಿದಂತೆ ಯಾವುದೇ ನೀರಿನ ಪ್ರದೇಶಗಳ ಬಳಿ ಅನಗತ್ಯವಾಗಿ ತೆರಳದಂತೆ ಹಾಗೂ ಪ್ರವಾಹದ ಸಂದರ್ಭದಲ್ಲಿ ನದಿ ಮತ್ತು ಇತರ ಜಲಮೂಲಗಳ ಜೊತೆಗೆ ಸಮುದ್ರಕ್ಕೂ ಇಳಿಯದಂತೆ ಸೂಚಿಸಲಾಗಿದೆ.
ಕೃಷಿಕರು ಮಳೆ ಹಾಗೂ ಗಾಳಿಯ ಮುನ್ಸೂಚನೆಯನ್ನು ಗಮನದಲ್ಲಿಟ್ಟುಕೊಂಡು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ತಿಳಿಸಿದೆ. ಮಳೆ, ಬಿರುಗಾಳಿ ಅಥವಾ ಮಿಂಚಿನ ಸಂದರ್ಭದಲ್ಲಿ ಮರಗಳು, ವಿದ್ಯುತ್ ಕಂಬಗಳು ಹಾಗೂ ಇತರ ಅಪಾಯಕಾರಿ ಸ್ಥಳಗಳ ಕೆಳಗೆ ನಿಲ್ಲದಂತೆ ಎಚ್ಚರಿಕೆ ನೀಡಲಾಗಿದೆ. ಮಿಂಚು ಕಾಣಿಸಿಕೊಂಡ ಸಂದರ್ಭದಲ್ಲಿ ಸುರಕ್ಷಿತ ಕಟ್ಟಡಗಳ ಒಳಗೆ ಆಶ್ರಯ ಪಡೆಯುವಂತೆ ಸೂಚಿಸಲಾಗಿದೆ.
ಉತ್ತರ ಕನ್ನಡದ ಕರಾವಳಿ ಪ್ರದೇಶದಲ್ಲಿ ಇಂದು ಮಳೆ ಮತ್ತು ಗಾಳಿಯ ಪರಿಣಾಮ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಮೀನುಗಾರರು ಹಾಗೂ ಸಾರ್ವಜನಿಕರು ಹವಾಮಾನ ಇಲಾಖೆಯ ಮುನ್ಸೂಚನೆ ಮತ್ತು ಜಿಲ್ಲಾಡಳಿತದ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಮನವಿ ಮಾಡಲಾಗಿದೆ.
*ರಾಜ್ಯ ಬಿಜೆಪಿ ಉಸ್ತುವಾರಿ ಬದಲಾವಣೆ ಬೆನ್ನಲ್ಲೇ ಸ್ಫೋಟಕ ಹೇಳಿಕೆ ನೀಡಿದ ಯತ್ನಾಳ್* – Pragati Vahini



