CrimeKannada NewsNationalTravel

*ಎಕ್ಸ್‌ಪ್ರೆಸ್‌ವೇಯಲ್ಲಿ ಹೊತ್ತಿ ಉರಿದ ಸ್ಲೀಪರ್ ಬಸ್: 9 ಸಾವು*

ಪ್ರಗತಿವಾಹಿನಿ ಸುದ್ದಿ: ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಸ್ಲೀಪರ್ ಬಸ್‌ನಲ್ಲಿ  ಏಕಾಏಕಿ ಬೆಂಕಿ ಕಾಣಿಸಿಕೊಂಡು ಕನಿಷ್ಠ 9 ಮಂದಿ ಮೃತಪಟ್ಟಿರುವ ಘಟನೆ ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಸಂಭವಿಸಿದೆ. 

ದೆಹಲಿಯಿಂದ ಉತ್ತರ ಪ್ರದೇಶದ ಮಹೋಬಾಗೆ ತೆರಳುತ್ತಿದ್ದ ಪ್ರವಾಸಿ ಬಸ್‌ನಲ್ಲಿ ಮುಂಜಾನೆ ಬೆಂಕಿ ಹೊತ್ತಿಕೊಂಡಿದೆ. ಘಟನೆ ನಡೆದ ವೇಳೆ ಬಹುತೇಕ ಪ್ರಯಾಣಿಕರು ನಿದ್ದೆಯಲ್ಲಿದ್ದರು ಎನ್ನಲಾಗಿದೆ. ಹೀಗಾಗಿ ಬೆಂಕಿ ಕಾಣಿಸಿಕೊಂಡ ಬಳಿಕ ಬಸ್‌ನೊಳಗೆ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಬೆಂಕಿ ವೇಗವಾಗಿ ಬಸ್‌ನಾದ್ಯಂತ ವ್ಯಾಪಿಸುತ್ತಿದ್ದಂತೆ ಪ್ರಾಣ ಉಳಿಸಿಕೊಳ್ಳಲು ಕೆಲ ಪ್ರಯಾಣಿಕರು ಕಿಟಕಿಗಳ ಮೂಲಕ ಹೊರಗೆ ಜಿಗಿದಿದ್ದಾರೆ. ಈ ವೇಳೆ ಹಲವರಿಗೆ ಗಾಯವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ಯಮುನಾ ಎಕ್ಸ್‌ಪ್ರೆಸ್‌ವೇ ಬದಿಯಲ್ಲಿ ಬಸ್ ಹೊತ್ತಿ ಉರಿಯುತ್ತಿರುವ ದೃಶ್ಯಗಳು ಆತಂಕ ಮೂಡಿಸಿವೆ. ಮಾಹಿತಿ ತಿಳಿದ ತಕ್ಷಣ ತುರ್ತು ಸೇವಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ. ಗಾಯಾಳುಗಳನ್ನು ರಕ್ಷಿಸಿ ಆಸ್ಪತ್ರೆಗೆ ಸಾಗಿಸುವುದರ ಜೊತೆಗೆ ಬಸ್‌ನೊಳಗೆ ಸಿಲುಕಿದ್ದವರನ್ನು ಹೊರತೆಗೆಯುವ ಕಾರ್ಯವೂ ನಡೆದಿದೆ.

ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆ ಕುರಿತು ಅಧಿಕಾರಿಗಳು ತನಿಖೆ ಆರಂಭಿಸಿದ್ದು ಬಸ್‌ನಲ್ಲಿ ಬೆಂಕಿ ಹೇಗೆ ಕಾಣಿಸಿಕೊಂಡಿತು ಎಂಬುದನ್ನು ಪತ್ತೆಹಚ್ಚಲಾಗುತ್ತಿದೆ.

Related Articles

Back to top button