*ಸೆ.28ರಂದು ಪ್ರದೋಶ್ ಮಾಫಿ ಸಾಕ್ಷಿ ಹೇಳಿಕೆ*: ರೇಣುಕಾಸ್ವಾಮಿ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಪ್ರಗತಿವಾಹಿನಿ ಸುದ್ದಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ 14ನೇ ಆರೋಪಿ ಪ್ರದೋಶ್ ರಾವ್ ಮಾಫಿ ಸಾಕ್ಷಿಯಾಗಲು 59ನೇ ಸಿಸಿಹೆಚ್ ನ್ಯಾಯಾಲಯ ಈಗಾಗಲೇ ಅನುಮತಿ ನೀಡಿದ್ದು, ಇದೀಗ ಸೆಪ್ಟೆಂಬರ್ 28ರಂದು ನ್ಯಾಯಾಲಯದ ಮುಂದೆ ಹಾಜರಾಗಿ ಹೇಳಿಕೆ ದಾಖಲಿಸುವಂತೆ ಸಮನ್ಸ್ ಜಾರಿ ಮಾಡಲಾಗಿದೆ. ನ್ಯಾಯಾಧೀಶೆ ಸುಜಾತಾ ಮಡಿವಾಳಪ್ಪ ಸಾಂಬ್ರಾಣಿ ಅವರು ಈ ಆದೇಶ ಹೊರಡಿಸಿದ್ದಾರೆ.
ಪ್ರದೋಶ್ ಅವರು ಪ್ರಕರಣಕ್ಕೆ ಸಂಬಂಧಿಸಿದಂತೆ ತನಗೆ ತಿಳಿದಿರುವ ಎಲ್ಲ ಸತ್ಯಾಂಶಗಳನ್ನು ನ್ಯಾಯಾಲಯದ ಮುಂದೆ ಬಹಿರಂಗಪಡಿಸುವುದಾಗಿ ತಿಳಿಸಿ ಮಾಫಿ ಸಾಕ್ಷಿಯಾಗಲು ಅರ್ಜಿ ಸಲ್ಲಿಸಿದ್ದರು. ಆಗಸ್ಟ್ 25ರಂದು 59ನೇ ಸಿಸಿಹೆಚ್ ನ್ಯಾಯಾಲಯವು ಅವರ ಅರ್ಜಿಯನ್ನು ಅಂಗೀಕರಿಸಿತ್ತು. ಪ್ರಕರಣದ ವಿಚಾರಣೆ ಸಂಪೂರ್ಣ ಮುಗಿಯುವವರೆಗೆ ಜೈಲಿನಲ್ಲಿ ಇರಬೇಕು ಹಾಗೂ ಪ್ರಕರಣಕ್ಕೆ ಸಂಬಂಧಿಸಿದ ಯಾವುದೇ ವಿಚಾರವನ್ನು ಮುಚ್ಚಿಡದೆ ಬಹಿರಂಗಪಡಿಸಬೇಕು ಎಂಬ ಷರತ್ತುಗಳನ್ನು ನ್ಯಾಯಾಲಯ ವಿಧಿಸಿತ್ತು.
ಪ್ರದೋಶ್ ಅವರು ರೇಣುಕಾಸ್ವಾಮಿ ಹತ್ಯೆ ನಡೆದ ಪಟ್ಟಣಗೆರೆ ಶೆಡ್‌ನಲ್ಲಿ ಉಪಸ್ಥಿತರಿದ್ದರು ಎಂದು ತನಿಖಾ ಆರೋಪಗಳಿವೆ. ಚಾರ್ಜ್‌ಶೀಟ್‌ನಲ್ಲಿ ಅವರ ವಿರುದ್ಧ ಕೊಲೆ, ಸಾಕ್ಷ್ಯ ನಾಶ ಹಾಗೂ ಇತರ ಆರೋಪಗಳನ್ನು ದಾಖಲಿಸಲಾಗಿದೆ. ಆದರೆ ಪ್ರಕರಣದ ಅಂತಿಮ ಸತ್ಯಾಸತ್ಯತೆ ನ್ಯಾಯಾಲಯದ ವಿಚಾರಣೆಯಲ್ಲಿ ನಿರ್ಧಾರವಾಗಬೇಕಿದೆ.
ಈ ನಡುವೆ ಪ್ರದೋಶ್ ಅವರನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸುವ ವಿಚಾರಕ್ಕೆ ದರ್ಶನ್ ಪರ ವಕೀಲರು ಸಲ್ಲಿಸಿದ್ದ ಅರ್ಜಿಗಳಿಗೆ ಹೈಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ. ಮಾಫಿ ಸಾಕ್ಷಿ ಅರ್ಜಿಯನ್ನು ಪರಿಗಣಿಸುವ ಹಂತದಲ್ಲಿ ಇತರ ಆರೋಪಿಗಳಿಗೆ ಆಕ್ಷೇಪಣೆ ಸಲ್ಲಿಸುವ ಹಕ್ಕಿಲ್ಲ, ಆದರೆ ಮುಂದೆ ಪ್ರದೋಶ್ ಅವರ ಸಾಕ್ಷ್ಯವನ್ನು ಪ್ರಶ್ನಿಸಲು ಅವಕಾಶವಿದೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.
ಇತ್ತೀಚೆಗೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ವಿಚಾರಣಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯನ್ನೂ ಸೆಪ್ಟೆಂಬರ್ 23ರಂದು ನ್ಯಾಯಾಲಯ ವಜಾಗೊಳಿಸಿದೆ. ಪ್ರದೋಶ್ ಅವರನ್ನು ಕ್ರಾಸ್ ಎಗ್ಸಾಮಿನೇಷನ್ ವೇಳೆ ಪ್ರಶ್ನಿಸುವ ಹಕ್ಕು ಆರೋಪಿಗಳಿಗೆ ಇರುವುದರಿಂದ ವಿಚಾರಣಾ ನ್ಯಾಯಾಲಯದ ಆದೇಶದಲ್ಲಿ ಹಸ್ತಕ್ಷೇಪ ಅಗತ್ಯವಿಲ್ಲ ಎಂದು ಹೈಕೋರ್ಟ್ ಹೇಳಿದೆ.
ಇದೀಗ ಸೆಪ್ಟೆಂಬರ್ 28ರಂದು ಪ್ರದೋಶ್ ನ್ಯಾಯಾಲಯದ ಮುಂದೆ ಹಾಜರಾಗಿ ಮಾಫಿ ಸಾಕ್ಷಿ ಹೇಳಿಕೆ ದಾಖಲಿಸುವ ನಿರೀಕ್ಷೆಯಿದೆ. ಅವರ ಹೇಳಿಕೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದ ಯಾವ ಅಂಶಗಳು ದಾಖಲಾಗುತ್ತವೆ ಎಂಬುದು ಮುಂದಿನ ವಿಚಾರಣೆಯಲ್ಲಿ ಮಹತ್ವ ಪಡೆಯಲಿದೆ.



