Kannada NewsKarnataka NewsLatest

*ಕಳಪೆ ಗುಣಮಟ್ಟದ ಪಾದರಕ್ಷೆ: ಶಾಲೆ ಎದುರು ಶೂ ಎಸೆದು ಆಕ್ರೋಶ*

ಪ್ರಗತಿವಾಹಿನಿ ಸುದ್ದಿ: ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಬೆಡಸಗಾಂವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಸರ್ಕಾರದ ವತಿಯಿಂದ ವಿತರಿಸಲಾಗಿದ್ದ ಪಾದರಕ್ಷೆಗಳು ಕಳಪೆ ಗುಣಮಟ್ಟದ್ದಾಗಿವೆ ಎಂದು ಆರೋಪಿಸಿ ವಿದ್ಯಾರ್ಥಿಗಳು, ಎಸ್‌ಡಿಎಂಸಿ ಅಧ್ಯಕ್ಷರು ಹಾಗೂ ಸದಸ್ಯರು ಮತ್ತು ಪಾಲಕರು ಪಾದರಕ್ಷೆಗಳನ್ನು ತಿರಸ್ಕರಿಸಿ ಶಾಲೆಯ ಎದುರು ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್ಕಾರದಿಂದ ಮಕ್ಕಳಿಗೆ ಉಚಿತವಾಗಿ ವಿತರಿಸಲಾದ ಪಾದರಕ್ಷೆಗಳು ನಿಗದಿತ ಗುಣಮಟ್ಟದ ಮಾನದಂಡಗಳಿಗೆ ಅನುಗುಣವಾಗಿಲ್ಲ. ಕಳಪೆ ಗುಣಮಟ್ಟದಿಂದ ಕೂಡಿರುವ ಈ ಪಾದರಕ್ಷೆಗಳು ಮಕ್ಕಳ ಬಳಕೆಗೆ ಯೋಗ್ಯವಾಗಿಲ್ಲ ಎಂದು ಪಾಲಕರು ಹಾಗೂ ಎಸ್‌ಡಿಎಂಸಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹಲವು ವಿದ್ಯಾರ್ಥಿಗಳು ಪಾದರಕ್ಷೆಗಳನ್ನು ಧರಿಸದೇ ತಿರಸ್ಕರಿಸಿದ್ದಾರೆ.

ಶಾಲಾ ಆವರಣದಲ್ಲಿ ನಡೆದ ಸಭೆಯಲ್ಲಿ ಎಸ್‌ಡಿಎಂಸಿ ಅಧ್ಯಕ್ಷರು, ಸದಸ್ಯರು ಹಾಗೂ ಪಾಲಕರು ಈ ಕುರಿತು ಚರ್ಚೆ ನಡೆಸಿದರು. ಮಕ್ಕಳಿಗೆ ಗುಣಮಟ್ಟದ ಪಾದರಕ್ಷೆಗಳನ್ನು ಒದಗಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳನ್ನು ಒತ್ತಾಯಿಸಿದರು. ಸರ್ಕಾರ ಮಕ್ಕಳಿಗಾಗಿ ಒದಗಿಸುವ ಸೌಲಭ್ಯಗಳು ನಿಗದಿತ ಗುಣಮಟ್ಟ ಹೊಂದಿರಬೇಕು. ಕಳಪೆ ಗುಣಮಟ್ಟದ ಸಾಮಗ್ರಿಗಳನ್ನು ವಿತರಿಸುವುದರಿಂದ ಮಕ್ಕಳಿಗೆ ತೊಂದರೆಯಾಗುವ ಸಾಧ್ಯತೆ ಇದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಈ ಕುರಿತು ಶಿಕ್ಷಣ ಇಲಾಖೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಪಾದರಕ್ಷೆಗಳ ಗುಣಮಟ್ಟ ಪರಿಶೀಲಿಸಬೇಕು. ಈಗಾಗಲೇ ವಿತರಿಸಿರುವ ಪಾದರಕ್ಷೆಗಳನ್ನು ಹಿಂಪಡೆದು, ಗುಣಮಟ್ಟದ ಪಾದರಕ್ಷೆಗಳನ್ನು ವಿದ್ಯಾರ್ಥಿಗಳಿಗೆ ಒದಗಿಸಬೇಕು ಎಂದು ಎಸ್‌ಡಿಎಂಸಿ ಹಾಗೂ ಪಾಲಕರು ಆಗ್ರಹಿಸಿದ್ದಾರೆ.

ಪಾದರಕ್ಷೆಗಳ ಗುಣಮಟ್ಟಕ್ಕೆ ಸಂಬಂಧಿಸಿದ ಅಗತ್ಯ ದಾಖಲೆಗಳು ಹಾಗೂ ಮಾಹಿತಿಯನ್ನು ಸಂಗ್ರಹಿಸಿ ಲೋಕಾಯುಕ್ತರಿಗೂ ದೂರು ಸಲ್ಲಿಸಲು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ಎಸ್‌ಡಿಎಂಸಿ ಸದಸ್ಯರು ಹಾಗೂ ಪಾಲಕರು ತಿಳಿಸಿದ್ದಾರೆ.

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪಾದರಕ್ಷೆಗಳ ಗುಣಮಟ್ಟ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬುದು ಪಾಲಕರು ಹಾಗೂ ಶಾಲಾಭಿವೃದ್ಧಿ ಸಮಿತಿಯ ಒತ್ತಾಯವಾಗಿದೆ.

Related Articles

Back to top button