CrimeKannada NewsKarnataka NewsLatest

*ಸಾರ್ವಜನಿಕರಿಗೆ ಕಿರುಕುಳ, ಬಲವಂತದ ಹಣ ವಸೂಲಿ ತಡೆಗೆ ಪೊಲೀಸರ ಕಟ್ಟುನಿಟ್ಟಿನ ಸೂಚನೆ*

ಪ್ರಗತಿವಾಹಿನಿ ಸುದ್ದಿ: ನಗರದ ಸಾರ್ವಜನಿಕ ಸ್ಥಳಗಳಲ್ಲಿ ಸಾರ್ವಜನಿಕರಿಗೆ ಕಿರುಕುಳ ನೀಡುವುದು, ವಾಹನ ಸಂಚಾರಕ್ಕೆ ಅಡ್ಡಿಪಡಿಸುವುದು ಹಾಗೂ ಬಲವಂತವಾಗಿ ಹಣ ವಸೂಲಿ ಮಾಡುವಂತಹ ಕಾನೂನುಬಾಹಿರ ಚಟುವಟಿಕೆಗಳನ್ನು ತಡೆಯಲು ಬೆಂಗಳೂರು ನಗರ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಹೊರಡಿಸಿದೆ. ಇಂತಹ ಘಟನೆಗಳ ಕುರಿತು ದೂರುಗಳು ಹೆಚ್ಚಾದ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತರು ಎಲ್ಲ ಪೊಲೀಸ್ ಠಾಣೆಗಳಿಗೆ ಸ್ಪಷ್ಟ ನಿರ್ದೇಶನ ನೀಡಿದ್ದಾರೆ.

ನಗರದ ಟ್ರಾಫಿಕ್ ಸಿಗ್ನಲ್‌, ಮಾರುಕಟ್ಟೆ, ಬಸ್ ಹಾಗೂ ರೈಲ್ವೆ ನಿಲ್ದಾಣ ಮತ್ತು ಸಾರ್ವಜನಿಕ ಸಮಾರಂಭ ನಡೆಯುವ ಸ್ಥಳಗಳಲ್ಲಿ ಕೆಲವರು ಸಾರ್ವಜನಿಕರಿಗೆ ತೊಂದರೆ ನೀಡುತ್ತಿರುವ ಬಗ್ಗೆ ದೂರುಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಿ, ಅಲ್ಲಿ ಗಸ್ತು ಹೆಚ್ಚಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಆಕ್ರಮಣಕಾರಿ ರೀತಿಯಲ್ಲಿ ಭಿಕ್ಷೆ ಬೇಡುವುದು, ಬೆದರಿಕೆ ಹಾಕುವುದು ಅಥವಾ ಸಾರ್ವಜನಿಕರಿಗೆ ಕಿರುಕುಳ ನೀಡುವುದು ಕಂಡುಬಂದರೆ ಸ್ಥಳೀಯ ಪೊಲೀಸರು ತಕ್ಷಣ ಪರಿಶೀಲನೆ ನಡೆಸಿ, ಕಾನೂನುಬದ್ಧ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಲಾಗಿದೆ.

ಪದೇ ಪದೇ ದೂರುಗಳು ಬರುತ್ತಿರುವ ಪ್ರದೇಶಗಳಲ್ಲಿ ಹೆಚ್ಚಿನ ನಿಗಾ ವಹಿಸುವಂತೆ ಹಾಗೂ ತೃತೀಯಲಿಂಗಿ ಸಮುದಾಯದ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಸಾರ್ವಜನಿಕ ಸ್ಥಳಗಳಲ್ಲಿ ಅನುಸರಿಸಬೇಕಾದ ನಿಯಮಗಳ ಕುರಿತು ಜಾಗೃತಿ ಮೂಡಿಸುವಂತೆಯೂ ಸೂಚಿಸಲಾಗಿದೆ.

ಇದೇ ವೇಳೆ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಜತೆಗೆ ತೃತೀಯಲಿಂಗಿ ವ್ಯಕ್ತಿಗಳ ಕಾನೂನುಬದ್ಧ ಹಕ್ಕುಗಳು ಹಾಗೂ ಘನತೆಗೆ ಯಾವುದೇ ಧಕ್ಕೆಯಾಗದಂತೆ ಪೊಲೀಸರು ಎಚ್ಚರಿಕೆ ವಹಿಸಬೇಕು ಎಂದು ತಿಳಿಸಲಾಗಿದೆ. ಅವರೊಂದಿಗೆ ಯಾವುದೇ ರೀತಿಯ ತಾರತಮ್ಯ ಮಾಡದೆ ಗೌರವಯುತವಾಗಿ ನಡೆದುಕೊಳ್ಳುವಂತೆ ಪೊಲೀಸ್ ಸಿಬ್ಬಂದಿಗೆ ಸೂಚನೆ ನೀಡಲಾಗಿದೆ.

ಸಾರ್ವಜನಿಕರಿಗೆ ಇಂತಹ ಘಟನೆಗಳು ಎದುರಾದರೆ ಆತಂಕಪಡದೆ ತಕ್ಷಣ 112 ತುರ್ತು ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಬಹುದು ಅಥವಾ ಸಮೀಪದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಬಹುದು ಎಂದು ಪೊಲೀಸ್ ಇಲಾಖೆ ಮನವಿ ಮಾಡಿದೆ.

Related Articles

Back to top button