*ಗ್ರಾಮೀಣ ಮಕ್ಕಳಿಗೆ ಸರ್ಕಾರಿ ಶಾಲೆಗಳ ಬಲವರ್ಧನೆ ಅಗತ್ಯ: ಸಚಿವ ಸತೀಶ್ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ: ಗ್ರಾಮೀಣ ಪ್ರದೇಶದ ಮಕ್ಕಳಿಗೆ ಖಾಸಗಿ ಶಾಲೆಗಳ ಭಾರೀ ಶುಲ್ಕ ಭರಿಸುವುದು ಕಷ್ಟವಾಗಿರುವುದರಿಂದ ಸರ್ಕಾರಿ ಶಾಲೆಗಳ ಬಲವರ್ಧನೆ ಅತ್ಯಾವಶ್ಯಕವಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ಯಮಕನಮರಡಿ ಕ್ಷೇತ್ರದ ವೀರಭಾವಿ ಗ್ರಾಮದಲ್ಲಿ ಕಿರಿಯ ಪ್ರಾಥಮಿಕ ಶಾಲೆಯ ನೂತನ ಎರಡು ಶಾಲಾ ಕೊಠಡಿಗಳನ್ನು ಶನಿವಾರ ಉದ್ಘಾಟಿಸಿ ಮಾತನಾಡಿದರು.
ಪಿಡಬ್ಲ್ಯೂಡಿ ಇಲಾಖೆಯ ಮೂಲಕ ನಿರ್ಮಿಸಲಾದ ಎರಡು ಕೊಠಡಿಗಳನ್ನು ವಿದ್ಯಾರ್ಥಿಗಳ ಬಳಕೆಗೆ ಮುಕ್ತಗೊಳಿಸಲಾಗಿದೆ. ಕಳೆದ ವರ್ಷ ಮಂಜೂರಾದ ಈ ಕಾಮಗಾರಿಯು ಇದೀಗ ಪೂರ್ಣಗೊಂಡಿದ್ದು, ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ವಾತಾವರಣ ಒದಗಿಸಲು ಸಹಕಾರಿಯಾಗಲಿದೆ ಎಂದು ಹೇಳಿದರು.
ಈಗಾಗಲೇ ಕ್ಷೇತ್ರದಲ್ಲಿ 255ಕ್ಕೂ ಹೆಚ್ಚು ಶಾಲಾ ಕೊಠಡಿಗಳನ್ನು ನಿರ್ಮಿಸಲಾಗಿದ್ದು, ಮುಂದಿನ ದಿನಗಳಲ್ಲಿ ಎಲ್ಲಾ ಸರ್ಕಾರಿ ಶಾಲೆಗಳನ್ನು ಉತ್ತಮ ಮಟ್ಟಕ್ಕೆ ತರುವ ಸಂಕಲ್ಪ ಹೊಂದಿರುವುದಾಗಿ ತಿಳಿಸಿದರು.ರಸ್ತೆ, ಕುಡಿಯುವ ನೀರು, ಶಿಕ್ಷಣ ಹಾಗೂ ಸಿಂಚನೆ ಎಂಬ ನಾಲ್ಕು ಪ್ರಮುಖ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಕ್ಷೇತ್ರದ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಶಿಕ್ಷಣ ಸಂಸ್ಥೆಗಳು ದೀರ್ಘಕಾಲದವರೆಗೆ ಸಮಾಜಕ್ಕೆ ಸೇವೆ ಸಲ್ಲಿಸುವುದರಿಂದ, ಇವುಗಳ ಅಭಿವೃದ್ಧಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ ಎಂದು ಹೇಳಿದರು.
ಮುಂದಿನ ಎರಡು–ಮೂರು ವರ್ಷಗಳಲ್ಲಿ ಈ ಭಾಗದಲ್ಲಿ ಮಾದರಿ ಶಿಕ್ಷಣ ಕ್ಯಾಂಪಸ್ ನಿರ್ಮಿಸುವ ಯೋಜನೆಯಿದ್ದು, ಎಲ್ಲ ವರ್ಗದ ಬಡ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ಒದಗಿಸುವ ಉದ್ದೇಶ ಹೊಂದಲಾಗಿದೆ ಎಂದು ತಿಳಿಸಿದರು.
ಗ್ರಾಮಸ್ಥರು ತಮ್ಮ ಸಮಸ್ಯೆಗಳನ್ನು ನೇರವಾಗಿ ಅಧಿಕಾರಿಗಳಿಗೆ ತಿಳಿಸಿದರೆ ಅವುಗಳನ್ನು ಪರಿಹರಿಸಲಾಗುವುದು ಎಂದು ಭರವಸೆ ನೀಡಿದ ಅವರು, ಮಕ್ಕಳ ಶಿಕ್ಷಣದ ಕಡೆ ಪೋಷಕರು ಹೆಚ್ಚಿನ ಗಮನ ಹರಿಸಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ಹಾಗೂ ಶಾಲಾ ಬ್ಯಾಗ್ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಸಿದ್ದು ಸುಣಗಾರ, ಜಂಗಲಿಸಾಬ್ ನಾಯಕ, ಸಿದ್ದಿಕ್ ಅಂಕಲಗಿ, ಶಿಕ್ಷಣ ಅಧಿಕಾರಿ ಪುಂಡಲಿಕ ಚೌಹಾನ, ಪ್ರಭಾವತಿ ಪಾಟೀಲ, ಪಿಡಿಒ ಸುಮಿತ್ತಾ ಮಿರ್ಚಿ, ಗುತ್ತಿಗೆದಾರರು ಭರಮಾ ಹಳ್ಳುರಿ, ಮಾರುತಿ ಗುಟಗುದ್ದಿ, ಅರಣ್ಯ ಇಲಾಖೆ ಅಧಿಕಾರಿ ಬಿ.ಎಲ್. ಸನದಿ, ಎಸ್‌ಡಿಎಂಸಿ ಅಧ್ಯಕ್ಷರು, ಸದಸ್ಯರು, ಮುಖ್ಯೋಪಾಧ್ಯಾಯರು, ಸಹ ಶಿಕ್ಷಕರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




