
ಪ್ರಗತಿವಾಹಿನಿ ಸುದ್ದಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ಬದಲಾಗಿರುವ ಕೊಲೆ ಆರೋಪಿ ಪ್ರದೋಷ್ ಹೇಳಿಕೆ ತಡೆಯುವ ನಿಟ್ಟಿನಲ್ಲಿ ಶತ ಪ್ರಯತ್ನ ಮಾಡುತ್ತಿರುವ ನಟ ದರ್ಶನ್ ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
ಮಾಫಿ ಸಾಕ್ಷಿಗೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ವಿವಿಧ ಆದೇಶಗಳನ್ನು ಪ್ರಶ್ನಿಸಿ ಆರೋಪಿ ದರ್ಶನ್ ಹಾಗೂ ಪತ್ನಿ ವಿಜಯಲಕ್ಷ್ಮೀ ಸುಪ್ರೀಂ ಕೋರ್ಟ್ ನಲ್ಲಿ ಮೂರು ಮೇಲ್ಮನವಿ ಸಲ್ಲಿಸಿದ್ದಾರೆ.
ಈ ಅರ್ಜಿಗಳ ವಿಚಾರಣೆ ಇದೇ ವಾರದಲ್ಲೇ ನಡೆಯುವ ಸಾಧ್ಯತೆಯಿದೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಮಾಫಿ ಸಾಕ್ಷಿ ನಿಯಮಾವಳಿಗಳಿಗೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ನಟ ದರ್ಶನ್ ಸುಪ್ರೀಂ ಕೋರ್ಟ್‌ಗೆ ಎರಡು ಪ್ರತ್ಯೇಕ ಮೇಲ್ಮನವಿಗಳನ್ನು ಸಲ್ಲಿಸಿದ್ದಾರೆ. ‘ಮಾಫಿ ಸಾಕ್ಷಿ ಆದೇಶ ನೀಡುವ ಮುನ್ನ ಸಹ-ಆರೋಪಿಯ ವಾದ ಆಲಿಸುವ ಅಗತ್ಯವಿಲ್ಲ’ ಎಂಬ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಲಾಗಿದೆ. ಇನ್ನು, ಮಾಫಿ ಸಾಕ್ಷಿ ನಿರ್ಧಾರವನ್ನು ಮರುಪರಿಶೀಲಿಸುವಂತೆ ಹೈಕೋರ್ಟ್ ನೀಡಿದ್ದ ಆದೇಶವನ್ನು ದರ್ಶನ್ ಪ್ರಶ್ನೆ ಮಾಡಿದ್ದಾರೆ.
ಇದೇ ವೇಳೆ ಮಾಫಿ ಸಾಕ್ಷಿ ಆದೇಶವನ್ನು ಎತ್ತಿಹಿಡಿದಿದ್ದ ಹೈಕೋರ್ಟ್‌ನ ಸೆಪ್ಟೆಂಬರ್ 23ರ ತೀರ್ಪನ್ನು ಪ್ರಶ್ನಿಸಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಸುಪ್ರೀಂ ಕೋರ್ಟ್‌ಗೆ ಮತ್ತೊಂದು ಮೇಲ್ಮನವಿ ಸಲ್ಲಿಸಿದ್ದಾರೆ. ಹೀಗಾಗಿ ಈ ಮೂರು ಅರ್ಜಿಗಳ ಬಗ್ಗೆ ಸುಪ್ರೀಂ ಕೋರ್ಟ್ ಯಾವ ಆದೇಶ ನೀಡಲಿದೆ ಎಂಬುದನ್ನು ಕಾದುನೋಡಬೇಕಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




