Belagavi NewsBelgaum NewsKannada NewsKarnataka NewsPolitics

*ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ:  ಸಿಎಂ ಅಣಕು ಶವಯಾತ್ರೆಗೆ ಪೊಲೀಸರ ತಡೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ನಗರದ ಚನ್ನಮ್ಮ ವೃತ್ತದಲ್ಲಿ ಮುಖ್ಯಮಂತ್ರಿ ಅವರ ಅಣಕು ಶವಯಾತ್ರೆ ನಡೆಸಲು ಮುಂದಾದ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ತಡೆದ ಘಟನೆ ನಡೆಯಿತು.

ಬಿಜೆಪಿ ರಾಜ್ಯ ಉಪಾಧ್ಯಕ್ಷ ಅನಿಲ್ ಬೆನಕೆ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾರ್ಯಕರ್ತರು ಖಾಲಿ ಚಂಬುಗಳು ಹಾಗೂ ವಿವಿಧ ಬಿತ್ತಪತ್ರಗಳನ್ನು ಪ್ರದರ್ಶಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಪ್ರತಿಭಟನೆಯ ಭಾಗವಾಗಿ ಸಿಎಂ ಅಣಕು ಶವಯಾತ್ರೆ ನಡೆಸಲು ಕಾರ್ಯಕರ್ತರು ಮುಂದಾದಾಗ ಪೊಲೀಸರು ಮಧ್ಯಪ್ರವೇಶಿಸಿ ತಡೆದರು. ಅಣಕು ಶವವನ್ನು ವಶಕ್ಕೆ ಪಡೆಯಲು ಪೊಲೀಸರು ಮುಂದಾದ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡರು ಹಾಗೂ ಪೊಲೀಸರ ನಡುವೆ ಕೆಲಕಾಲ ವಾಗ್ವಾದ ನಡೆಯಿತು.

ನಂತರ ಚನ್ನಮ್ಮ ವೃತ್ತದಲ್ಲೇ ಅಣಕು ಶವ ದಹನ ನಡೆಸಲು ಪ್ರತಿಭಟನಾಕಾರರು ಮುಂದಾದರೂ ಪೊಲೀಸರು ಅದಕ್ಕೂ ಅವಕಾಶ ನೀಡಲಿಲ್ಲ. ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿದೆ ಎಂದು ಆರೋಪಿಸಿದ ಬಿಜೆಪಿ ಮುಖಂಡರು, ಹಣಕಾಸಿನ ಲಭ್ಯತೆ ಇಲ್ಲದಿದ್ದರೂ ವಿವಿಧೆಡೆ ಕೋಟ್ಯಂತರ ರೂಪಾಯಿ ಅನುದಾನ ಘೋಷಿಸಲಾಗುತ್ತಿದೆ ಎಂದು ಟೀಕಿಸಿದರು. 

ಮುಖ್ಯಮಂತ್ರಿ ಅವರು ಭೇಟಿ ನೀಡಿದ ಪ್ರದೇಶಗಳಲ್ಲಿ ಭರವಸೆಗಳನ್ನು ನೀಡುತ್ತಿದ್ದರೂ, ಅವುಗಳನ್ನು ಈಡೇರಿಸಲು ಸರ್ಕಾರದ ಬಳಿ ಹಣವಿಲ್ಲ ಎಂದು ಆರೋಪಿಸಿದರು. ಗುತ್ತಿಗೆದಾರರಿಗೆ ಬಾಕಿ ಹಣ ಪಾವತಿಸಲು ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button