Belagavi NewsBelgaum NewsKannada NewsKarnataka News

*ಬೆಳಗಾವಿ ಮೇಯರ್, ಉಪಮೇಯರ್ ಬದಲಾವಣೆಗೆ ಆಗ್ರಹಿಸಿದ ಕನ್ನಡ ಸಂಘಟನೆಗಳು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕನ್ನಡಪರ ಸಂಘಟನೆಗಳ ಸತತ ಹೋರಾಟಕ್ಕೆ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಮಹತ್ವದ ಜಯ ಸಿಕ್ಕಿದೆ. ಮಹಾಜನ್ ಆಯೋಗದ ವರದಿಯೇ ಅಂತಿಮ ಎಂಬ ಕನ್ನಡಪರ ಗೊತ್ತುವಳಿಯನ್ನು ಪಾಲಿಕೆ ಸಾಮಾನ್ಯ ಸಭೆಯಲ್ಲಿ ಸೆಪ್ಟೆಂಬರ್ 30ರಂದು ಅಂಗೀಕರಿಸಲಾಗಿದೆ. ಸುಮಾರು 25ಕ್ಕೂ ಹೆಚ್ಚು ಕನ್ನಡಪರ ಸಂಘಟನೆಗಳು ಕಳೆದ ಆರು ತಿಂಗಳಿಂದ ನಡೆಸಿದ ಹೋರಾಟದ ಹಿನ್ನೆಲೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ಕನ್ನಡ ಕ್ರಿಯಾಶೀಲ ಸಮಿತಿಯ ಅಧ್ಯಕ್ಷ ಅಶೋಕ್ ಚಂದರಗಿ ತಿಳಿಸಿದ್ದಾರೆ. 

2005ರಲ್ಲಿ ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕೆಂದು ಮಹಾರಾಷ್ಟ್ರ ಏಕೀಕರಣ ಸಮಿತಿ ಪಾಲಿಕೆಯಲ್ಲಿ ಕೈಗೊಂಡಿದ್ದ ನಿರ್ಣಯಕ್ಕೆ ಈ ಗೊತ್ತುವಳಿ ಸೂಕ್ತ ಉತ್ತರವಾಗಿದೆ ಎಂದು ಅವರು ಹೇಳಿದ್ದಾರೆ.

ರಾಜ್ಯ ಸರ್ಕಾರದ ನಿರ್ದೇಶನ ಹಾಗೂ ಕನ್ನಡಪರ ಸಂಘಟನೆಗಳ ಒತ್ತಡದ ಹಿನ್ನೆಲೆಯಲ್ಲಿ ಪಾಲಿಕೆಯಲ್ಲಿ ಈ ಮಹತ್ವದ ನಿರ್ಣಯ ಅಂಗೀಕಾರಗೊಂಡಿದ್ದು, ಗಡಿಭಾಗದ ಕನ್ನಡಿಗರಲ್ಲಿ ಸಂತಸ ಮೂಡಿಸಿದೆ.

ಇದೇ ವೇಳೆ ಪಾಲಿಕೆ ಸಭೆಯಲ್ಲಿ ಮೇಯರ್ ಹಾಗೂ ಉಪಮೇಯರ್ ನಡೆದುಕೊಂಡ ರೀತಿಗೆ ಅಶೋಕ್ ಚಂದರಗಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನಾಮನಿರ್ದೇಶಿತ ಸದಸ್ಯರೊಂದಿಗೆ ವಾಗ್ವಾದ ನಡೆಸುವುದು ಹಾಗೂ ಸರ್ಕಾರದ ವಿರುದ್ಧವೇ ಧ್ವನಿ ಎತ್ತಿರುವುದು ಖಂಡನೀಯ ಎಂದು ಅವರು ಹೇಳಿದ್ದಾರೆ.

ವೀಕ್ಷಕರ ನೇಮಕದ ವಿಚಾರದಲ್ಲೂ ಮೇಯರ್ ಹಾಗೂ ಉಪಮೇಯರ್ ಸರ್ಕಾರದ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿರುವುದು ಸರಿಯಲ್ಲ. ಈ ವಿಚಾರವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿರುವ ಚಂದರಗಿ, 15 ದಿನಗಳೊಳಗೆ ಮೇಯರ್ ಹಾಗೂ ಉಪಮೇಯರ್ ಅವರನ್ನು ಬದಲಾಯಿಸದಿದ್ದರೆ ಪಾಲಿಕೆಯನ್ನು ಸೂಪರ್‌ಸೀಡ್ ಮಾಡುವಂತೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button