Kannada NewsKarnataka NewsLatestPolitics

*ದಕ್ಷಿಣ ಕನ್ನಡ ಹೆಸರು ಬದಲಾವಣೆ ಬೇಡ*: *ಸಿಎಂಗೆ ಪುರುಷೋತ್ತಮ ಬಿಳಿಮಲೆ ಮನವಿ*

ಪ್ರಗತಿವಾಹಿನಿ ಸುದ್ದಿ: ದಕ್ಷಿಣ ಕನ್ನಡ ಜಿಲ್ಲೆಯ ಹೆಸರನ್ನು ‘ಮಂಗಳೂರು’ ಎಂದು ಬದಲಾಯಿಸುವ ಪ್ರಸ್ತಾಪದಿಂದ ರಾಜ್ಯ ಸರ್ಕಾರ ಹಿಂದೆ ಸರಿಯಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಆಗ್ರಹಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಎನ್ನುವುದು ಕೇವಲ ಆಡಳಿತಾತ್ಮಕ ಹೆಸರಲ್ಲ. ಈ ಭಾಗದ ಐತಿಹಾಸಿಕ ಹಿನ್ನೆಲೆ, ಭಾಷಿಕ ಸಾಮರಸ್ಯ ಹಾಗೂ ಅಖಂಡ ಕರ್ನಾಟಕದೊಂದಿಗಿನ ಸಂಬಂಧವನ್ನು ಪ್ರತಿಬಿಂಬಿಸುವ ವಿಶಿಷ್ಟ ಗುರುತು ಎಂದು ಬಿಳಿಮಲೆ ಹೇಳಿದ್ದಾರೆ.

ದಕ್ಷಿಣ ಕನ್ನಡದಲ್ಲಿ ತುಳು ಭಾಷೆ ಮತ್ತು ಸಂಸ್ಕೃತಿಗೆ ವಿಶೇಷ ಸ್ಥಾನವಿದೆ. ಇದೇ ವೇಳೆ ಕನ್ನಡವೂ ಈ ಭಾಗದ ಜನಜೀವನದ ಅವಿಭಾಜ್ಯ ಅಂಗವಾಗಿದ್ದು, ಎರಡೂ ಭಾಷೆಗಳ ಸಹಬಾಳ್ವೆ ಜಿಲ್ಲೆಯ ಪ್ರಮುಖ ವೈಶಿಷ್ಟ್ಯವಾಗಿದೆ ಎಂದು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಜಿಲ್ಲೆಯ ಹೆಸರನ್ನು ಬದಲಾಯಿಸುವ ಅಗತ್ಯವಿಲ್ಲ ಎಂದು ಬಿಳಿಮಲೆ ಅಭಿಪ್ರಾಯಪಟ್ಟಿದ್ದಾರೆ. ಹೆಸರು ಬದಲಾವಣೆಯಿಂದ ಕನ್ನಡದೊಂದಿಗೆ ದಕ್ಷಿಣ ಕನ್ನಡ ಹೊಂದಿರುವ ಭಾವನಾತ್ಮಕ ಹಾಗೂ ಮಾನಸಿಕ ಸಂಬಂಧಕ್ಕೆ ಧಕ್ಕೆಯಾಗುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.

ರಾಜ್ಯದ ಭಾಷಿಕ ಸಾಮರಸ್ಯದ ದೃಷ್ಟಿಯಿಂದಲೂ ಪ್ರಸ್ತಾಪವನ್ನು ಮರುಪರಿಶೀಲಿಸುವ ಅಗತ್ಯವಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನು ಸೆಪ್ಟೆಂಬರ್‌ನಲ್ಲಿ ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟದ ಸಭೆ ನಡೆದಿತ್ತು. ಈ ವೇಳೆ ದಕ್ಷಿಣ ಕನ್ನಡ ಜಿಲ್ಲೆಯನ್ನು ‘ಮಂಗಳೂರು’ ಎಂದು ಮರುನಾಮಕರಣ ಮಾಡುವ ಪ್ರಸ್ತಾಪಕ್ಕೆ ಸಂಬಂಧಿಸಿದಂತೆ ಕರಡು ಅಧಿಸೂಚನೆ ಹೊರಡಿಸಲು ನಿರ್ಧರಿಸಲಾಗಿತ್ತು ಎಂದು ವರದಿಯಾಗಿದೆ. ಪ್ರಸ್ತಾಪದ ಕುರಿತು ಜನಾಭಿಪ್ರಾಯ ಸಂಗ್ರಹಿಸಲು ಒಂದು ತಿಂಗಳ ಕಾಲಾವಕಾಶ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಹೆಸರು ಬದಲಾವಣೆ ವಿಚಾರ ಮತ್ತೆ ಚರ್ಚೆಗೆ ಬಂದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button