*ಶಾಸಕ ಅಭಯ್ ಪಾಟೀಲ್ ವಿರುದ್ಧ ಕಾಂಗ್ರೆಸ್ ದೂರು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ದಕ್ಷಿಣ ಮತಕ್ಷೇತ್ರದ 2,598 ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡುವಂತೆ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಶಾಸಕ ಅಭಯ್ ಪಾಟೀಲ್ ವಿರುದ್ಧ ಕಾಂಗ್ರೆಸ್ ನಗರ ಘಟಕ ಪೊಲೀಸ್ ಠಾಣೆ ಮೆಟ್ಟಿಲೇರಿದೆ.
ಈ ಕುರಿತು ಶಾಹಾಪುರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿರುವ ಕಾಂಗ್ರೆಸ್ ಮುಖಂಡರು, ಅಭಯ್ ಪಾಟೀಲ್ ಅವರು 2,598 ಮತದಾರರನ್ನು ನಕಲಿ ಮತದಾರರೆಂದು ಗುರುತಿಸಿ, ಅವರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವಂತೆ ಮನವಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಫಾರ್ಮ್ ನಂ.7 ಅರ್ಜಿಗಳು ಹಾಗೂ ಇತರೆ ದಾಖಲೆಗಳನ್ನು ಬಳಸಿಕೊಂಡು ಮತದಾರರ ಹೆಸರುಗಳನ್ನು ಅಳಿಸಲು ಪ್ರಯತ್ನಿಸಲಾಗಿದೆ. ಅಲ್ಲದೆ, ಮತದಾರರ ಪಟ್ಟಿ ಪರಿಷ್ಕರಣೆಯ ಎಸ್ಐಆರ್ ಪ್ರಕ್ರಿಯೆಯಲ್ಲಿ ಶಾಸಕರು ಹಸ್ತಕ್ಷೇಪ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
2,598 ಮತದಾರರನ್ನು ಬಾಂಗ್ಲಾದೇಶ, ಪಾಕಿಸ್ತಾನ ಹಾಗೂ ರೋಹಿಂಗ್ಯಾ ಮೂಲದವರು ಎಂದು ಆರೋಪಿಸಿ ಹೆಸರುಗಳನ್ನು ತೆಗೆದುಹಾಕಲು ಮುಂದಾಗಿರುವುದು ಗಂಭೀರ ವಿಚಾರ ಎಂದು ಕಾಂಗ್ರೆಸ್ ನಗರ ಘಟಕ ದೂರಿನಲ್ಲಿ ತಿಳಿಸಿದೆ. ಇದರಿಂದ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಯಾಗುವುದರ ಜೊತೆಗೆ, ಅರ್ಹ ಮತದಾರರ ಹಕ್ಕಿನ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಆರೋಪಿಸಲಾಗಿದೆ.
ಹೀಗಾಗಿ, ಶಾಸಕ ಅಭಯ್ ಪಾಟೀಲ್ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಪತ್ರ, ಅದಕ್ಕೆ ಸಂಬಂಧಿಸಿದ ದಾಖಲೆಗಳು ಹಾಗೂ ಫಾರ್ಮ್ ನಂ.7 ಅರ್ಜಿಗಳನ್ನು ಪರಿಶೀಲಿಸಿ, ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಬೇಕು. ಆರೋಪಗಳು ಸಾಬೀತಾದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ನಗರ ಘಟಕ ಪೊಲೀಸರಿಗೆ ಮನವಿ ಮಾಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ



