*ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ: ಡಾ. ಸೋನಾಲಿ ಸರ್ನೋಬತ್ ಖಂಡನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಿರುವುದನ್ನು ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಕಾರ್ಯದರ್ಶಿ ಡಾ. ಸೋನಾಲಿ ಸರ್ನೋಬತ್ ಖಂಡಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು, ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಬಿಜೆಪಿ ಕಾರ್ಯಕರ್ತರ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ.
ಅನರ್ಹ ಮತದಾರರ ಹೆಸರುಗಳನ್ನು ಪರಿಶೀಲಿಸಿ, ನಿಯಮಾನುಸಾರ ಮತದಾರರ ಪಟ್ಟಿಯಿಂದ ತೆಗೆದುಹಾಕುವಂತೆ ಬಿಜೆಪಿ ಮನವಿ ಮಾಡಿದೆ. ಈ ಕುರಿತು ಚುನಾವಣಾ ಆಯೋಗ ಪರಿಶೀಲನೆ ನಡೆಸಿ, ಅಗತ್ಯ ಕ್ರಮ ಕೈಗೊಳ್ಳಲಿದೆ. ಆದರೆ ಈ ವಿಚಾರದಲ್ಲಿ ಕಾಂಗ್ರೆಸ್ ಅನಗತ್ಯವಾಗಿ ಮೂಗು ತೂರಿಸುತ್ತಿದೆ ಎಂದು ಅವರು ಟೀಕಿಸಿದ್ದಾರೆ.
ರಾಜ್ಯದಲ್ಲಿ ಸುವ್ಯವಸ್ಥಿತ ಆಡಳಿತ ನೀಡುವ ಉದ್ದೇಶದಿಂದ ಜನರು ಕಾಂಗ್ರೆಸ್ಗೆ ಅಧಿಕಾರ ನೀಡಿದ್ದಾರೆ. ಆದರೆ ಆಡಳಿತದ ಪ್ರಮುಖ ವಿಚಾರಗಳತ್ತ ಗಮನ ಹರಿಸುವ ಬದಲು ಕಾಂಗ್ರೆಸ್ ನಾಯಕರು ಅನಗತ್ಯ ವಿಷಯಗಳಿಗೆ ಸಮಯ ವ್ಯರ್ಥ ಮಾಡುತ್ತಿದ್ದಾರೆ ಎಂದು ಸೋನಾಲಿ ಸರ್ನೋಬತ್ ಆರೋಪಿಸಿದ್ದಾರೆ.
ಸರ್ಕಾರದ ಆಡಳಿತ ವೈಫಲ್ಯಗಳನ್ನು ಮುಚ್ಚಿಹಾಕಲು ಜನರ ಗಮನವನ್ನು ಬೇರೆಡೆ ಸೆಳೆಯುವ ಪ್ರಯತ್ನ ನಡೆಯುತ್ತಿದೆ. ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸುವ ಮೂಲಕ ರಾಜಕೀಯ ಒತ್ತಡ ಹೇರುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಇಂತಹ ಕ್ಷುಲ್ಲಕ ರಾಜಕಾರಣವನ್ನು ಬಿಟ್ಟು ರಾಜ್ಯದ ಆಡಳಿತದತ್ತ ಗಮನ ಹರಿಸಬೇಕು. ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಕಾರ್ಯನಿರ್ವಹಿಸಬೇಕು ಎಂದು ಡಾ. ಸೋನಾಲಿ ಸರ್ನೋಬತ್ ಆಗ್ರಹಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




