Belagavi NewsBelgaum NewsKarnataka NewsLatestPolitics

*ಬಿಜೆಪಿ ಕಾರ್ಯಕರ್ತರ ವಿರುದ್ಧದ ಪ್ರಕರಣ ಹಿಂಪಡೆಯಿರಿ: ಮುರಘೇಂದ್ರಗೌಡ ಪಾಟೀಲ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಿರುವುದನ್ನು ಬಿಜೆಪಿ ಮುಖಂಡ ಮುರಘೇಂದ್ರಗೌಡ ಎಸ್. ಪಾಟೀಲ ಖಂಡಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ಪ್ರಕರಣ ದಾಖಲಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಮತದಾರರ ಪಟ್ಟಿಯಲ್ಲಿರುವ ಅನರ್ಹ ಮತದಾರರ ಹೆಸರುಗಳನ್ನು ಪರಿಶೀಲಿಸಿ, ನಿಯಮಾನುಸಾರ ಅಗತ್ಯ ಕ್ರಮ ಕೈಗೊಳ್ಳುವಂತೆ ಬಿಜೆಪಿ ಮನವಿ ಮಾಡಿದೆ. ಮತದಾರರ ಪಟ್ಟಿಯನ್ನು ಪರಿಶೀಲಿಸಿ, ಅರ್ಹ ಹಾಗೂ ಅನರ್ಹ ಮತದಾರರ ಕುರಿತು ನಿಯಮಾನುಸಾರ ಕ್ರಮ ಕೈಗೊಳ್ಳುವುದು ಚುನಾವಣಾ ಆಯೋಗದ ಜವಾಬ್ದಾರಿಯಾಗಿದೆ. ಹೀಗಾಗಿ ಈ ವಿಚಾರಕ್ಕೆ ರಾಜಕೀಯ ಬಣ್ಣ ನೀಡುವ ಅಗತ್ಯವಿಲ್ಲ ಎಂದು ಅವರು ಹೇಳಿದ್ದಾರೆ.

ಜನರಿಗೆ ಉತ್ತಮ ಆಡಳಿತ ಮತ್ತು ಅಭಿವೃದ್ಧಿ ನೀಡುವ ಉದ್ದೇಶದಿಂದ ಕಾಂಗ್ರೆಸ್‌ಗೆ ಅಧಿಕಾರ ನೀಡಲಾಗಿದೆ. ಆದರೆ ಜನರ ಮೂಲಭೂತ ಸಮಸ್ಯೆಗಳತ್ತ ಗಮನ ಹರಿಸುವ ಬದಲು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸುವ ಮೂಲಕ ಸರ್ಕಾರದ ಆಡಳಿತ ಯಂತ್ರವನ್ನು ದುರ್ಬಳಕೆ ಮಾಡಲಾಗುತ್ತಿದೆ ಎಂದು ಮುರಘೇಂದ್ರಗೌಡ ಪಾಟೀಲ ಆರೋಪಿಸಿದ್ದಾರೆ.

ಸರ್ಕಾರದ ಆಡಳಿತ ವೈಫಲ್ಯಗಳಿಂದ ಜನರ ಗಮನವನ್ನು ಬೇರೆಡೆ ಸೆಳೆಯಲು ವಿರೋಧ ಪಕ್ಷದ ಕಾರ್ಯಕರ್ತರನ್ನು ಗುರಿಯಾಗಿಸಲಾಗುತ್ತಿದೆ. ಇಂತಹ ಒತ್ತಡಗಳಿಗೆ ಬಿಜೆಪಿ ಕಾರ್ಯಕರ್ತರು ಹೆದರುವುದಿಲ್ಲ. ಜನರ ಹಿತಾಸಕ್ತಿ ಹಾಗೂ ಮತದಾರರ ಹಕ್ಕುಗಳಿಗಾಗಿ ಪ್ರಜಾಪ್ರಭುತ್ವದ ಮಾರ್ಗದಲ್ಲಿ ಹೋರಾಟ ಮುಂದುವರಿಯಲಿದೆ ಎಂದು ಅವರು ಹೇಳಿದ್ದಾರೆ.

ರಾಜಕೀಯ ಭಿನ್ನಾಭಿಪ್ರಾಯಗಳು ಸಹಜ. ಆದರೆ ವಿರೋಧ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸುವ ಮೂಲಕ ಅವರ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನ ಮಾಡುವುದು ಸರಿಯಲ್ಲ. ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರ ವಿರುದ್ಧ ದಾಖಲಿಸಿರುವ ಪ್ರಕರಣಗಳನ್ನು ತಕ್ಷಣ ಹಿಂಪಡೆಯಬೇಕು. ರಾಜಕೀಯ ವಿಚಾರಗಳಲ್ಲಿ ಸಮಯ ವ್ಯರ್ಥ ಮಾಡದೆ ರಾಜ್ಯದ ಅಭಿವೃದ್ಧಿ ಹಾಗೂ ಜನರ ಸಮಸ್ಯೆಗಳ ಪರಿಹಾರದತ್ತ ಸರ್ಕಾರ ಗಮನ ಹರಿಸಬೇಕು ಎಂದು ಮುರಘೇಂದ್ರಗೌಡ ಪಾಟೀಲ ಆಗ್ರಹಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button