*ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು*: *ಕೈಕಾಲು ತುಂಡಾಗಿ ದಾರುಣ ಅಂತ್ಯ*

ಪ್ರಗತಿವಾಹಿನಿ ಸುದ್ದಿ: ಕಸ ವಿಂಗಡಣೆ ಮಾಡುತ್ತಿದ್ದ ವೇಳೆ ಮಹಿಳೆಯೊಬ್ಬರು ಯಂತ್ರಕ್ಕೆ ಸಿಲುಕಿ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಯಂತ್ರಕ್ಕೆ ಸಿಲುಕಿದ ಪರಿಣಾಮ ಮಹಿಳೆಯ ಕೈಕಾಲುಗಳು ತುಂಡಾಗಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಮೃತರನ್ನು ಕಾಡತಿಪ್ಪೂರು ಮೂಲದ ಅರಸಮ್ಮ (45) ಎಂದು ಗುರುತಿಸಲಾಗಿದೆ. ಕಸ ವಿಂಗಡಣೆ ಘಟಕದಲ್ಲಿ ಯಂತ್ರ ಕಾರ್ಯನಿರ್ವಹಿಸುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಬೆಂಗಳೂರಿನಿಂದ ತರಲಾಗುವ ಕಸವನ್ನು ದೊಡ್ಡಬಳ್ಳಾಪುರದ ಎಂಎಸ್‌ಜಿಪಿ ಘಟಕದಲ್ಲಿ ವಿಂಗಡಣೆ ಮಾಡಲಾಗುತ್ತಿತ್ತು. ಇಂದು ಬೆಳಗ್ಗೆ ಎಂದಿನಂತೆ ಕಸ ವಿಂಗಡಣೆ ಕಾರ್ಯ ನಡೆಯುತ್ತಿದ್ದ ವೇಳೆ ಅರಸಮ್ಮ ಯಂತ್ರಕ್ಕೆ ಸಿಲುಕಿದ್ದಾರೆ.
ಅರಸಮ್ಮ ಕಳೆದ ಮೂರು-ನಾಲ್ಕು ವರ್ಷಗಳಿಂದ ಇದೇ ಘಟಕದಲ್ಲಿ ಕೆಲಸ ಮಾಡುತ್ತಿದ್ದರು. ಕೆಲಸದ ವೇಳೆ ನಡೆದ ಈ ಅವಘಡದಿಂದ ಕುಟುಂಬಸ್ಥರು ಹಾಗೂ ಸಹೋದ್ಯೋಗಿಗಳು ಆಘಾತಕ್ಕೊಳಗಾಗಿದ್ದಾರೆ. ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ಘಟನೆಗೆ ಸಂಬಂಧಿಸಿದಂತೆ ತನಿಖೆ ಮುಂದುವರಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ



