*SIR ಫಾರ್ಮ್-7 ವಿವಾದ*: *ಡಿಕೆಶಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪೊಲೀಸ್ ಕಮಿಷನರ್‌ಗೆ ಬಿಜೆಪಿ ದೂರು*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕದಲ್ಲಿ ಎಸ್‌ಐಆರ್ ಫಾರ್ಮ್-7 ದುರುಪಯೋಗದ ಆರೋಪ-ಪ್ರತ್ಯಾರೋಪಗಳ ನಡುವೆ ರಾಜಕೀಯ ಸಂಘರ್ಷ ತೀವ್ರಗೊಂಡಿದೆ. ಫಾರ್ಮ್-7 ದುರುಪಯೋಗ ಮಾಡಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಸಚಿವರು ಚುನಾವಣಾ ಆಯೋಗದ ಕಚೇರಿ ಮುಂದೆ ಧರಣಿ ನಡೆಸಿದ್ದಕ್ಕೆ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದೆ.
ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಬಿಜೆಪಿ ನಿಯೋಗ ಬೆಂಗಳೂರು ನಗರ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ ದೂರು ಸಲ್ಲಿಸಿದೆ. ಅನುಮತಿ ಇಲ್ಲದೆ ಪ್ರತಿಭಟನೆ ನಡೆಸುವ ಮೂಲಕ ನ್ಯಾಯಾಲಯದ ಆದೇಶ ಉಲ್ಲಂಘಿಸಲಾಗಿದೆ ಎಂದು ಬಿಜೆಪಿ ಆರೋಪಿಸಿದೆ.
ಸಾಂವಿಧಾನಿಕ ಸಂಸ್ಥೆಯಾಗಿರುವ ಚುನಾವಣಾ ಆಯೋಗದ ಕಚೇರಿ ಆವರಣದಲ್ಲೇ ಸರ್ಕಾರ ಪ್ರತಿಭಟನೆ ನಡೆಸಿರುವುದು ಕಾನೂನುಬಾಹಿರ ಎಂದು ಆರೋಪಿಸಿ ಬಿಜೆಪಿ ನಾಯಕರು ಪೊಲೀಸ್ ಆಯುಕ್ತರ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಬಳಿಕ ಆಯುಕ್ತರಿಗೆ ದೂರು ಸಲ್ಲಿಸಿದರು.
ದೂರಿನಲ್ಲಿ ಕರ್ನಾಟಕ ಹೈಕೋರ್ಟ್ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದರಲ್ಲಿ ನೀಡಿರುವ ಆದೇಶವನ್ನು ಬಿಜೆಪಿ ಉಲ್ಲೇಖಿಸಿದೆ. ಫ್ರೀಡಂ ಪಾರ್ಕ್ ಹೊರತುಪಡಿಸಿ ಬೇರೆ ಸ್ಥಳಗಳಲ್ಲಿ ಧರಣಿ ಅಥವಾ ಪ್ರತಿಭಟನೆ ನಡೆಸುವುದಕ್ಕೆ ನಿರ್ಬಂಧವಿದೆ ಎಂದು ದೂರಿನಲ್ಲಿ ಹೇಳಲಾಗಿದೆ.
ಈ ಆದೇಶಕ್ಕೆ ವಿರುದ್ಧವಾಗಿ ಮುಖ್ಯಮಂತ್ರಿ ಮತ್ತು ಸಚಿವರು ಚುನಾವಣಾ ಕಚೇರಿ ಆವರಣದಲ್ಲಿ ಯಾವುದೇ ಅನುಮತಿ ಇಲ್ಲದೆ ಧರಣಿ ನಡೆಸಿದ್ದಾರೆ. ಇದು ನ್ಯಾಯಾಲಯದ ಆದೇಶದ ಉಲ್ಲಂಘನೆಯಾಗಿದೆ ಎಂದು ಬಿಜೆಪಿ ದೂರಿನಲ್ಲಿ ಆರೋಪಿಸಿದೆ.
ಚುನಾವಣಾ ಆಯೋಗ ಯಾವುದೇ ರಾಜಕೀಯ ಪಕ್ಷ ಅಥವಾ ಸರ್ಕಾರದ ಅಧೀನದಲ್ಲಿರುವ ಸಂಸ್ಥೆಯಲ್ಲ. ಸಂವಿಧಾನಾತ್ಮಕವಾಗಿ ಸ್ವತಂತ್ರವಾಗಿರುವ ಸಂಸ್ಥೆಯ ಕಚೇರಿ ಆವರಣವನ್ನು ರಾಜಕೀಯ ಪ್ರತಿಭಟನೆಗೆ ಬಳಸಿರುವುದು ಚುನಾವಣಾ ವ್ಯವಸ್ಥೆಯ ಸ್ವಾಯತ್ತತೆ ಹಾಗೂ ಸಾರ್ವಜನಿಕರ ವಿಶ್ವಾಸದ ಕುರಿತು ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಮುಖ್ಯಮಂತ್ರಿ ಮತ್ತು ಸಚಿವರ ವಿರುದ್ಧ ಎಫ್‌ಐಆರ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಆಗ್ರಹಿಸಿದೆ. ಪ್ರತಿಭಟನೆಗೆ ಅನುಮತಿ ನೀಡಿದವರು ಯಾರು ಎಂಬುದನ್ನೂ ಪೊಲೀಸ್ ಇಲಾಖೆ ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದೆ.
ಪ್ರತಿಭಟನೆಗೆ ಲಿಖಿತ ಅನುಮತಿ ನೀಡಲಾಗಿತ್ತೇ? ನೀಡಿದ್ದರೆ ಅದರ ಪ್ರತಿಯನ್ನು ಸಾರ್ವಜನಿಕಗೊಳಿಸಬೇಕು ಎಂದು ಬಿಜೆಪಿ ಕೇಳಿದೆ. ಇದೇ ರೀತಿಯಲ್ಲಿ ಸಾಮಾನ್ಯ ನಾಗರಿಕರು ಅಥವಾ ಪ್ರತಿಪಕ್ಷಗಳು ಚುನಾವಣಾ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಲು ಬಂದರೆ ಪೊಲೀಸ್ ಇಲಾಖೆ ಅವಕಾಶ ನೀಡುತ್ತದೆಯೇ ಎಂಬ ಪ್ರಶ್ನೆಯನ್ನೂ ಮುಂದಿಟ್ಟಿದೆ.
ಮುಖ್ಯಮಂತ್ರಿ ಮತ್ತು ಸಚಿವರು ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಪೊಲೀಸರು ಹಾಗೂ ಚುನಾವಣಾ ಅಧಿಕಾರಿಗಳು ಕೈಗೊಂಡ ಕ್ರಮಗಳ ಸಂಪೂರ್ಣ ವರದಿಯನ್ನು ಬಹಿರಂಗಪಡಿಸಬೇಕು ಎಂದು ಆಗ್ರಹಿಸಲಾಗಿದೆ.
ಘಟನೆಗೆ ಸಂಬಂಧಿಸಿದ ಸಂಪೂರ್ಣ ಸಿಸಿಟಿವಿ ದೃಶ್ಯಾವಳಿ, ಪೊಲೀಸ್ ಬಂದೋಬಸ್ತ್ ವಿವರ, ಅನುಮತಿ ಪತ್ರ ಹಾಗೂ ಸಂಬಂಧಿತ ದಾಖಲೆಗಳನ್ನು ಬಿಡುಗಡೆ ಮಾಡಬೇಕು ಎಂದು ಬಿಜೆಪಿ ಒತ್ತಾಯಿಸಿದೆ. ಈ ಕುರಿತು ತಕ್ಷಣ ಕ್ರಮ ಕೈಗೊಂಡು, ಕೈಗೊಂಡ ಕ್ರಮದ ವಿವರವನ್ನು ಲಿಖಿತವಾಗಿ ತಿಳಿಸಬೇಕು ಎಂದು ರಾಜ್ಯ ಬಿಜೆಪಿ ಪೊಲೀಸ್ ಇಲಾಖೆಗೆ ಮನವಿ ಮಾಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ



