*BREAKING: ಪ್ಲಾಸ್ಟಿಕ್ ಗೋದಾಮಿನಲ್ಲಿ ಬೆಂಕಿ ಅವಘಡ: ಮುಗಿಲೆತ್ತರಕ್ಕೆ ವ್ಯಾಪಿಸಿದ ಬೆಂಕಿ ಕೆನ್ನಾಲಿಗೆ*

ಪ್ರಗತಿವಾಹಿನಿ ಸುದ್ದಿ: ಕೀರ್ತಿ ವೈರ್ ಮೆಶ್ ಪ್ಲಾಸ್ಟಿಕ್ ಕಚ್ಚಾ ಸಾಮಗ್ರಿ ಸಂಗ್ರಹದ ಗೋದಾಮಿನಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದ್ದು, ಮುಗಿಲೆತ್ತರದವರೆಗೆ ಬೆಂಕಿಯ ಕೆನ್ನಾಲಿಗೆ ವ್ಯಾಪಿಸಿದೆ.
ಬೀದರ್ ಜಿಲ್ಲೆಯ ಬೆಳ್ಳೂರು ಗ್ರಾಮದ ಬಳಿ ಇರುವ ಗೋದಾಮಿನಲ್ಲಿ ಈ ಘಟನೆ ನಡೆದಿದೆ. ಈ ಘಟನೆಯಿಂದಾಗಿ ಇಡೀ ಗೋದಾಮು ಬೆಂಕಿಯ ಕೆನ್ನಾಲಿಗೆಗೆ ಆಹುತಿಯಾಗಿದ್ದು, ಅಪಾರ ಪ್ರಮಾಣದ ಪ್ಲಾಸ್ಟಿಕ್ ಕಚ್ಚಾವಸ್ತುಗಳು ಸುಟ್ಟು ಕರಕಲಾಗಿವೆ.
ಬೆಂಕಿ ಧಗಧಗನೆ ಹೊತ್ತಿ ಉರಿದ ಪರಿಣಾಮ, ದಟ್ಟ ಹೊಗೆ ಆವರಿಸಿದೆ. ಸುತ್ತಮುತ್ತಲಿನ ವಾತಾವರಣವು ಕಲುಷಿತಗೊಂಡಿತು.ಬೆಳ್ಳೂರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ತೀವ್ರ ಆತಂಕ ಮನೆ ಮಾಡಿತ್ತು.
ಬೆಂಕಿಯ ಜ್ವಾಲೆಗಳು ಮತ್ತು ಹೊಗೆಯ ಪ್ರಮಾಣ ಹೆಚ್ಚಾಗಿದ್ದರಿಂದ ಜನರಲ್ಲಿ ಭಯದ ವಾತಾವರಣ ನಿರ್ಮಾಣವಾಗಿತ್ತು. ಸ್ಥಳೀಯ ಅಗ್ನಿಶಾಮಕ ದಳದ ಸಿಬ್ಬಂದಿಗಳು ತಕ್ಷಣವೇ ಸ್ಥಳಕ್ಕೆ ದಾವಿಸಿ, ಬೆಂಕಿಯನ್ನು ನಂದಿಸಲು ಹರಸಾಹಸ ಪಟ್ಟರು. ಹಲವು ಗಂಟೆಗಳ ನಿರಂತರ ಪ್ರಯತ್ನದ ಬಳಿಕ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಅದೃಷ್ಟವಶಾತ್, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಬೆಂಕಿ ಅನಾಹುತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ



