*ಚಲಿಸುತ್ತಿದ್ದ ಕಾರಿನ ಟೈರ್ ಸ್ಫೋಟ*: *ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು, ಮೂವರು ಪಾರು*

ಪ್ರಗತಿವಾಹಿನಿ ಸುದ್ದಿ: ಚಲಿಸುತ್ತಿದ್ದ ಕಾರಿನ ಟೈರ್ ಏಕಾಏಕಿ ಸ್ಫೋಟಗೊಂಡು ನಿಯಂತ್ರಣ ತಪ್ಪಿದ ಕಾರು ಕೆರೆಗೆ ಬಿದ್ದ ಘಟನೆ ನಡೆದಿದೆ. ಕಾರಿನಲ್ಲಿದ್ದ ಮೂವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಟೈರ್ ಸ್ಫೋಟಗೊಂಡ ಬಳಿಕ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬ ಮುರಿದು ಬಿದ್ದಿದ್ದು, ಬಳಿಕ ಕೆರೆಗೆ ಅಳವಡಿಸಿದ್ದ ಕಬ್ಬಿಣದ ಬೇಲಿಯನ್ನೂ ಮುರಿದು ಕಾರು ಕೆರೆಗೆ ಬಿದ್ದಿದೆ.
ಘಟನೆ ಚಿಕ್ಕಮಗಳೂರು ನಗರದ ಕೋಟೆಕೆರೆಯಲ್ಲಿ ನಡೆದಿದೆ. ಅಪಘಾತದ ಬಳಿಕ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ಧಾವಿಸಿ ಕ್ರೇನ್ ಸಹಾಯದಿಂದ ಕೆರೆಯಲ್ಲಿದ್ದ ಕಾರನ್ನು ಮೇಲೆತ್ತಿದ್ದಾರೆ. ಕಾರಿನಲ್ಲಿದ್ದ ಮೂವರನ್ನು ರಕ್ಷಿಸಲಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಇದೇ ಮಾರ್ಗದಲ್ಲಿ ತೆರಳುತ್ತಿದ್ದ ಶಾಸಕ ಸಿ.ಟಿ.ರವಿ ಸ್ಥಳಕ್ಕೆ ಭೇಟಿ ನೀಡಿ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದ್ದಾರೆ. ಘಟನೆ ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣದ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




