*ಗ್ರಾಮೀಣ ಪೊಲೀಸರ ಕಾರ್ಯಾಚರಣೆ: ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ*

ಪ್ರಗತಿವಾಹಿನಿ ಸುದ್ದಿ: ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರು ಯುವಕರನ್ನು ನಿಪ್ಪಾಣಿ ಗ್ರಾಮೀಣ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಕೊಗನೊಳ್ಳಿ ಗ್ರಾಮದ ಪ್ರತೀಕ್ ತಾನಾಜಿ ಶಿಂದೆ (20) ಹಾಗೂ ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ಕಾಗಲ್ ತಾಲೂಕಿನ ಶಿವಾಜಿನಗರ ನಿವಾಸಿ ಸಾರ್ಥಕ್ ಧನಾಜಿ ಗಾಣೇಶಕರ್ (20) ಎಂದು ಗುರುತಿಸಲಾಗಿದೆ.
ಅಕ್ಟೋಬರ್ 3ರಂದು ಸಂಜೆ ಸುಮಾರು 6.15ರ ವೇಳೆಗೆ ಕೊಗನೊಳ್ಳಿ ಗ್ರಾಮದ ಗಡಿಯಿಂದ ಮತ್ತಿವಾಡಕ್ಕೆ ತೆರಳುವ ರಸ್ತೆಯ ಬದಿಯಲ್ಲಿ ಗಾಂಜಾ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಮಾಹಿತಿ ಆಧರಿಸಿ ಪಿಎಸ್ಐ ಶಿವರಾಜ್ ಭೀ. ನಾಯಕವಾಡಿ ನೇತೃತ್ವದ ತಂಡ ಸ್ಥಳಕ್ಕೆ ತೆರಳಿ ದಾಳಿ ನಡೆಸಿದೆ.
ಕಾರ್ಯಾಚರಣೆ ವೇಳೆ ಆರೋಪಿಗಳ ಬಳಿಯಿಂದ ಸುಮಾರು ₹10 ಸಾವಿರ ಮೌಲ್ಯದ 218 ಗ್ರಾಂ ಗಾಂಜಾ, ₹500 ನಗದು ಹಾಗೂ ಗಾಂಜಾ ಸಾಗಾಟಕ್ಕೆ ಬಳಸುತ್ತಿದ್ದ ಸ್ಪ್ಲೆಂಡರ್ ಪ್ಲಸ್ ದ್ವಿಚಕ್ರ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಸಂಬಂಧ ನಿಪ್ಪಾಣಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಬಂಧಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.
ಪೊಲೀಸ್ ಸಿಬ್ಬಂದಿಯ ಕಾರ್ಯಾಚರಣೆಗೆ ಹಿರಿಯ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




