*ಮಂತ್ರಾಲಯಕ್ಕೆ ಹೊರಟಿದ್ದ ಕಾರಿಗೆ ಭೀಕರ ಅಪಘಾತ*: *ಚಿಕಿತ್ಸೆ ಫಲಿಸದೆ ಯುವಕ ಸಾವು, ಪೊಲೀಸ್ ಕ್ರಮದ ವಿರುದ್ಧ ಆರೋಪ*

ಪ್ರಗತಿವಾಹಿನಿ ಸುದ್ದಿ: ಸ್ನೇಹಿತರೊಂದಿಗೆ ಮಂತ್ರಾಲಯಕ್ಕೆ ತೆರಳುತ್ತಿದ್ದ ಕಾರಿಗೆ ಎದುರಿನಿಂದ ಬಂದ ಮತ್ತೊಂದು ಕಾರು ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಅಪಘಾತದ ಬಳಿಕ ಪ್ರಕರಣ ದಾಖಲಿಸುವಲ್ಲಿ ವಿಳಂಬವಾಗಿದ್ದು, ಅಪಘಾತಕ್ಕೆ ಕಾರಣವಾದ ಕಾರಿನ ಚಾಲಕ ಮದ್ಯಪಾನ ಮಾಡಿದ್ದ ಆರೋಪವನ್ನು ಎಫ್ಐಆರ್ನಲ್ಲಿ ಉಲ್ಲೇಖಿಸಿಲ್ಲ ಎಂದು ಗಾಯಾಳುಗಳು ಆರೋಪಿಸಿದ್ದಾರೆ.
ಮೃತರನ್ನು ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದ ಮಂತಾಜೆ ನಿವಾಸಿ ದೀಪೇಶ್ (27) ಎಂದು ಗುರುತಿಸಲಾಗಿದೆ. ಸೆಪ್ಟೆಂಬರ್ 29ರಂದು ನಸುಕಿನ ಜಾವ ಶಿಶಿಲದಿಂದ ಸ್ನೇಹಿತರೊಂದಿಗೆ ಮಂತ್ರಾಲಯಕ್ಕೆ ತೆರಳುತ್ತಿದ್ದ ವೇಳೆ ಬೆಳ್ತಂಗಡಿ ತಾಲೂಕಿನ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಶಿಶಿಲದ ರಘು (32), ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸುಧೀನ್, ಸತೀಶ, ದೀಪೇಶ್, ದೀಪಕ್ ಅಲಿಯಾಸ್ ತಿರುಮಲೇಶ್ವರ ಹಾಗೂ ಶೋಭಿತ್ ಅಲಿಯಾಸ್ ನಾಗರಾಜ್ ಎಂಬ ಆರು ಮಂದಿ ಸ್ನೇಹಿತರು ಇನೋವಾ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಉಜಿರೆ–ಚಾರ್ಮಾಡಿ ಮಾರ್ಗವಾಗಿ ಬಣಕಲ್ ದಾಟಿ ಮೂಡಿಗೆರೆ ಕಡೆಗೆ ತೆರಳುತ್ತಿದ್ದಾಗ, ನಸುಕಿನ ಜಾವ ಸುಮಾರು 3.40ರ ವೇಳೆಗೆ ಸಬ್ಬೇನಹಳ್ಳಿ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಎದುರಿನಿಂದ ಬಂದ ಫೋರ್ಡ್ ಎಂಡೀವರ್ ಕಾರು ಇನೋವಾಗೆ ಡಿಕ್ಕಿ ಹೊಡೆದಿದೆ.
ಎಂಡೀವರ್ ಕಾರನ್ನು ಆಲ್ದೂರು ನಿವಾಸಿ ಸುಂದರೇಶ್ ಅವರ ಪುತ್ರ ಅಮೋಘ್ ಡಿ.ಎಸ್. ಚಾಲನೆ ಮಾಡುತ್ತಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಅಪಘಾತದಲ್ಲಿ ಇನೋವಾದಲ್ಲಿದ್ದ ಆರು ಮಂದಿಗೂ ಗಾಯಗಳಾಗಿದ್ದು, ದೀಪೇಶ್ ಅವರ ಕುತ್ತಿಗೆಗೆ ಹಾಗೂ ಸುಧೀನ್ ಅವರ ಎಡ ಭುಜಕ್ಕೆ ಗಂಭೀರ ಗಾಯಗಳಾಗಿದ್ದವು. ಗಾಯಾಳುಗಳನ್ನು ಬಣಕಲ್ನ ಕೃಷ್ಣ ಆಸ್ಪತ್ರೆಗೆ ದಾಖಲಿಸಿ ಬಳಿಕ ಉಜಿರೆಯ ಎಸ್ಡಿಎಂ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು.
ಸುಧೀನ್ ಅವರನ್ನು ಎಸ್ಡಿಎಂ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದ ಹಿನ್ನೆಲೆಯಲ್ಲಿ ದೀಪೇಶ್ ಅವರನ್ನು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ದೀಪೇಶ್ ಮೃತಪಟ್ಟಿದ್ದಾರೆ. ಮೃತರು ತಾಯಿ ಹಾಗೂ ಇಬ್ಬರು ಸಹೋದರರನ್ನು ಅಗಲಿದ್ದಾರೆ.
ಈ ನಡುವೆ ಅಪಘಾತಕ್ಕೆ ಕಾರಣವಾದ ಎಂಡೀವರ್ ಕಾರಿನ ಚಾಲಕ ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿದ್ದರು ಎಂದು ಗಾಯಾಳುಗಳು ಆರೋಪಿಸಿದ್ದಾರೆ. ಈ ವಿಚಾರವನ್ನು ಬಣಕಲ್ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ದಿಲೀಪ್ ಅವರ ಗಮನಕ್ಕೂ ತರಲಾಗಿತ್ತು. ಚಾಲಕನನ್ನು ವೈದ್ಯಕೀಯ ಪರೀಕ್ಷೆಗೂ ಒಳಪಡಿಸಲಾಗಿತ್ತು ಎಂದು ಗಾಯಾಳುಗಳು ತಿಳಿಸಿದ್ದಾರೆ.
ಆದರೆ ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಆರೋಪವನ್ನು ಎಫ್ಐಆರ್ನಲ್ಲಿ ದಾಖಲಿಸಿಲ್ಲ ಎಂದು ಗಾಯಾಳುಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪ್ರಶ್ನಿಸಿದಾಗ ಪೊಲೀಸ್ ಅಧಿಕಾರಿ ದುರ್ವರ್ತನೆ ತೋರಿದ್ದಾರೆ ಎಂಬ ಆರೋಪವನ್ನೂ ಮಾಡಿದ್ದಾರೆ.
ಗಾಯಾಳುಗಳ ಚಿಕಿತ್ಸೆ ಹಾಗೂ ಆಸ್ಪತ್ರೆಯಲ್ಲಿನ ಓಡಾಟದ ಕಾರಣ ಪೊಲೀಸ್ ದೂರು ನೀಡಲು ವಿಳಂಬವಾಯಿತು ಎಂದು ಇನೋವಾ ಚಾಲಕ ರಘು ದೂರಿನಲ್ಲಿ ತಿಳಿಸಿದ್ದಾರೆ. ಲಿಖಿತ ದೂರಿನ ಆಧಾರದ ಮೇಲೆ ಅಕ್ಟೋಬರ್ 1ರಂದು ಸಂಜೆ 5 ಗಂಟೆಗೆ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮದ್ಯಪಾನದ ಆರೋಪವನ್ನು ಎಫ್ಐಆರ್ನಲ್ಲಿ ಏಕೆ ಸೇರಿಸಿಲ್ಲ ಎಂಬ ವಿಚಾರವನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಎಂಎಲ್ಸಿ ಸಿ.ಟಿ. ರವಿ ಹಾಗೂ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ಗಮನಕ್ಕೂ ತರಲಾಗಿತ್ತು ಎಂದು ಗಾಯಾಳುಗಳು ತಿಳಿಸಿದ್ದಾರೆ. ಪೊಲೀಸ್ ಅಧಿಕಾರಿಗಳ ಬಳಿ ಈ ಕುರಿತು ಪ್ರಶ್ನಿಸಿದ್ದರೂ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ. ಯುವಕನೊಬ್ಬ ಮೃತಪಟ್ಟಿರುವ ಹಿನ್ನೆಲೆಯಲ್ಲಿ ಅಪಘಾತದ ತನಿಖೆಯನ್ನು ನಿಷ್ಪಕ್ಷಪಾತವಾಗಿ ನಡೆಸಬೇಕು. ಅಪಘಾತಕ್ಕೆ ಕಾರಣವಾದ ಎಲ್ಲ ಅಂಶಗಳನ್ನು ತನಿಖೆಯಲ್ಲಿ ದಾಖಲಿಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೀಪೇಶ್ ಕುಟುಂಬಸ್ಥರು ಒತ್ತಾಯಿಸಿದ್ದಾರೆ.
*ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ*: *ಕರಾವಳಿ ಮಲೆನಾಡಿಗೆ ಭಾರೀ ಮಳೆ, ಬೆಂಗಳೂರಿಗೂ ವರ್ಷಧಾರೆ* – Pragati Vahini
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




