
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಿಲ್ಲಾ ಮಟ್ಟದ ಖೋಖೋ ಪಂದ್ಯಾವಳಿಯ ಫೈನಲ್ ಪಂದ್ಯ ನಡೆಯುತ್ತಿದ್ದ ವೇಳೆ ಎರಡು ತಂಡಗಳ ಆಟಗಾರರು ಹಾಗೂ ಬೆಂಬಲಿಗರ ನಡುವೆ ಗಲಾಟೆ ನಡೆದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಅರಳಿಕಟ್ಟಿ ಗ್ರಾಮದಲ್ಲಿ ನಡೆದಿದೆ.
ರಾಯಬಾಗ ಹಾಗೂ ಅಥಣಿ ತಂಡಗಳ ನಡುವೆ ಫೈನಲ್ ಪಂದ್ಯ ನಡೆಯುತ್ತಿತ್ತು. ಈ ವೇಳೆ ಸೀಟಿ ಹೊಡೆದ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಕಡೆಯವರ ನಡುವೆ ವಾಗ್ವಾದ ಆರಂಭವಾಗಿದೆ. ಮಾತಿನ ಚಕಮಕಿ ಬಳಿಕ ಪರಿಸ್ಥಿತಿ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದ್ದು, ಗಲಾಟೆ ನಡೆದಿದೆ.
ಘಟನೆಯಲ್ಲಿ ಲಾಲಸಾಬ್ ಹಾಗೂ ಸುನೀಲ್ ಎಂಬುವರಿಗೆ ಗಾಯಗಳಾಗಿದ್ದು, ಇಬ್ಬರನ್ನೂ ಅಥಣಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಥಣಿ ಪೊಲೀಸರು ಪರಿಶೀಲನೆ ನಡೆಸಿದ್ದು, ಗಲಾಟೆಗೆ ನಿಖರ ಕಾರಣ ಹಾಗೂ ಘಟನೆಯಲ್ಲಿ ಭಾಗಿಯಾದವರ ಕುರಿತು ಮಾಹಿತಿ ಸಂಗ್ರಹಿಸುತ್ತಿದ್ದಾರೆ.
ಈ ಘಟನೆ ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




