*ಲಾಡ್ಜ್ನಲ್ಲಿ ವೇಶ್ಯಾವಾಟಿಕೆ: ಬೆಳಗಾವಿ ಪೊಲೀಸರಿಂದ ಓರ್ವನ ಬಂಧನ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಅಥಣಿ ಪಟ್ಟಣದ ರಡ್ಡರಹಟ್ಟಿ ರಸ್ತೆಯಲ್ಲಿರುವ ಶಿವಶಕ್ತಿ ಲಾಡ್ಜ್ನಲ್ಲಿ ಮಹಿಳೆಯನ್ನು ಇರಿಸಿಕೊಂಡು ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಆಧರಿಸಿ ಪೊಲೀಸರು ದಾಳಿ ನಡೆಸಿ ಓರ್ವನನ್ನು ಬಂಧಿಸಿದ್ದಾರೆ.
ಶಿವಶಕ್ತಿ ಲಾಡ್ಜ್ನಲ್ಲಿ ಮಹಿಳೆಯನ್ನು ಇರಿಸಿಕೊಂಡು ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಅಥಣಿ ಸಿಪಿಐ ಸಂತೋಷ ಹಳ್ಳೂರ ನೇತೃತ್ವದಲ್ಲಿ ಪೊಲೀಸ್ ತಂಡ ಲಾಡ್ಜ್ ಮೇಲೆ ದಾಳಿ ನಡೆಸಿತು.
ದಾಳಿ ವೇಳೆ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಆರೋಪದ ಮೇರೆಗೆ ಅಥಣಿ ತಾಲೂಕಿನ ಅರಟಾಳ ಗ್ರಾಮದ ಮಾಳಪ್ಪ ದಿಲೀಪ್ ಕಾಂಬಳೆ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಲಾಡ್ಜ್ ಮ್ಯಾನೇಜರ್ ರಾಹುಲ್ ಮಡ್ಡಿ ಹಾಗೂ ಗಣೇಶ ಸಂಕಪಾಳ ಅವರು ಮಹಿಳೆಯನ್ನು ಲಾಡ್ಜ್ನಲ್ಲಿ ಇರಿಸಿಕೊಂಡು ವೇಶ್ಯಾವಾಟಿಕೆ ನಡೆಸಲು ಸಹಕರಿಸುತ್ತಿದ್ದರು ಎಂಬ ಆರೋಪವೂ ಕೇಳಿಬಂದಿದೆ. ಈ ಸಂಬಂಧ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವೇಶ್ಯಾವಾಟಿಕೆ ಜಾಲದ ಹಿಂದೆ ಇನ್ನೂ ಯಾರಾದರೂ ಭಾಗಿಯಾಗಿದ್ದಾರೆಯೇ ಎಂಬುದರ ಕುರಿತು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ



