*ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ನೇಮಕಾತಿ ಆದೇಶ ಪತ್ರ ವಿತರಣೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳ ಅಂಗನವಾಡಿ ಕೇಂದ್ರಗಳಿಗೆ ಆಯ್ಕೆಯಾಗಿರುವ ನೂತನ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ನೇಮಕಾತಿ ಆದೇಶ ಪತ್ರಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ನೂತನವಾಗಿ ಆಯ್ಕೆಯಾಗಿರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಶುಭಾಶಯ ಕೋರಿದ ಲಕ್ಷ್ಮೀ ಹೆಬ್ಬಾಳಕರ್, ಅಂಗನವಾಡಿ ಕೇಂದ್ರಗಳು ಮಕ್ಕಳ ಆರೋಗ್ಯ, ಪೋಷಣೆ ಹಾಗೂ ಪ್ರಾಥಮಿಕ ಶಿಕ್ಷಣದಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ ಎಂದು ಹೇಳಿದರು.

ತಾಯಂದಿರು ಹಾಗೂ ಪುಟ್ಟ ಮಕ್ಕಳ ಆರೋಗ್ಯ ಮತ್ತು ಪೌಷ್ಟಿಕತೆಯ ಕಾಳಜಿ ವಹಿಸುವುದರ ಜೊತೆಗೆ, ಮಕ್ಕಳಿಗೆ ಪ್ರಾಥಮಿಕ ಹಂತದಲ್ಲೇ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವ ಜವಾಬ್ದಾರಿ ಅಂಗನವಾಡಿ ಸಿಬ್ಬಂದಿಯ ಮೇಲಿದೆ. ನೂತನವಾಗಿ ನೇಮಕಗೊಂಡಿರುವ ಎಲ್ಲರೂ ತಮ್ಮ ಕರ್ತವ್ಯವನ್ನು ಜವಾಬ್ದಾರಿ ಹಾಗೂ ಬದ್ಧತೆಯಿಂದ ನಿರ್ವಹಿಸಬೇಕು ಎಂದು ಅವರು ಸಲಹೆ ನೀಡಿದರು.

“ನಿಮ್ಮ ಸೇವೆ ನಮ್ಮ ಕ್ಷೇತ್ರದ ಪ್ರತಿಯೊಂದು ಮಗುವಿನ ಉತ್ತಮ ಆರೋಗ್ಯ, ಬೆಳವಣಿಗೆ ಹಾಗೂ ಭವಿಷ್ಯ ರೂಪಿಸಲು ನೆರವಾಗಲಿ. ಮಕ್ಕಳೊಂದಿಗೆ ಹಾಗೂ ತಾಯಂದಿರೊಂದಿಗೆ ಆತ್ಮೀಯವಾಗಿ ಕಾರ್ಯನಿರ್ವಹಿಸಿ, ಸರ್ಕಾರದ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಶ್ರಮಿಸಿ,” ಎಂದು ಲಕ್ಷ್ಮೀ ಹೆಬ್ಬಾಳಕರ್ ಆಶಿಸಿದರು.
ಈ ಸಂದರ್ಭದಲ್ಲಿ ವಿವಿಧ ಗ್ರಾಮಗಳ ಮುಖಂಡರು, ಗ್ರಾಮಸ್ಥರು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




