Belagavi NewsBelgaum NewsKannada NewsKarnataka NewsPolitics

*ರಾಹುಲ್ ಗಾಂಧಿ ವಶ ಖಂಡಿಸಿ ಬೆಳಗಾವಿಯಲ್ಲಿ ಯುವ ಕಾಂಗ್ರೆಸ್ ಆಕ್ರೋಶ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ದೆಹಲಿಯಲ್ಲಿ ಪೊಲೀಸರು ವಶಕ್ಕೆ ಪಡೆದಿರುವುದನ್ನು ಖಂಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಬೆಳಗಾವಿಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.

ನಗರದ ಕಾಂಗ್ರೆಸ್ ಕಚೇರಿಯಿಂದ ಚನ್ನಮ್ಮ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು, ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ‘ಮೋದಿ ಹಟಾವೋ, ದೇಶ ಬಚಾವೋ’ ಸೇರಿದಂತೆ ಹಲವು ಘೋಷಣೆಗಳು ಪ್ರತಿಭಟನೆಯಲ್ಲಿ ಮೊಳಗಿದವು.

ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಜಾರಕಿಹೊಳಿ ಮಾತನಾಡಿ, ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಒತ್ತಡದಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ಆರೋಪಿಸಿದರು. ಕಾಂಗ್ರೆಸ್ ಪ್ರಬಲವಾಗಿರುವ ಕ್ಷೇತ್ರಗಳಲ್ಲಿ ಮತದಾರರ ಪಟ್ಟಿಯ ಪರಿಶೀಲನೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಮತದಾನದ ಹಕ್ಕನ್ನು ಕಸಿದುಕೊಳ್ಳುವ ಹಾಗೂ ಪ್ರಜಾಪ್ರಭುತ್ವದ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನ ನಡೆಯುತ್ತಿದೆ ಎಂದು ದೂರಿದರು.

ಮತದಾರರ ಪಟ್ಟಿಗೆ ಸಂಬಂಧಿಸಿದ ಅಕ್ರಮಗಳ ಕುರಿತು ಪ್ರಶ್ನೆಗಳು ಎದುರಾಗಿರುವ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ರಾಜೀನಾಮೆ ನೀಡಬೇಕು. ರಾಜೀನಾಮೆ ನೀಡುವವರೆಗೂ ಹೋರಾಟ ಮುಂದುವರಿಸಲಾಗುವುದು ಎಂದು ಎಚ್ಚರಿಸಿದರು.

ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕಾರ್ತಿಕ್ ಪಾಟೀಲ್ ಮಾತನಾಡಿ, ಚುನಾವಣಾ ವ್ಯವಸ್ಥೆಯ ಮೇಲಿನ ಜನರ ವಿಶ್ವಾಸ ಉಳಿಯಬೇಕಾದರೆ ಚುನಾವಣಾ ಪ್ರಕ್ರಿಯೆಯಲ್ಲಿ ಸಂಪೂರ್ಣ ಪಾರದರ್ಶಕತೆ ಇರಬೇಕು. ರಾಹುಲ್ ಗಾಂಧಿ ಎತ್ತಿರುವ ಪ್ರಶ್ನೆಗಳಿಗೆ ಉತ್ತರ ನೀಡುವ ಬದಲು ಅವರನ್ನು ವಶಕ್ಕೆ ಪಡೆದಿರುವುದು ಖಂಡನೀಯ ಎಂದರು.

ಪ್ರಜಾಪ್ರಭುತ್ವ ಮತ್ತು ಸಂವಿಧಾನಾತ್ಮಕ ಮೌಲ್ಯಗಳ ರಕ್ಷಣೆಗೆ ಕಾಂಗ್ರೆಸ್ ಹೋರಾಟ ಮುಂದುವರಿಸಲಿದೆ ಎಂದು ಅವರು ಹೇಳಿದರು.

ಇದೇ ವೇಳೆ, ಬರುವ 26ರಂದು ಮತದಾರರ ಕರಡು ಪಟ್ಟಿ ಪ್ರಕಟವಾಗಲಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮನೆಮನೆಗೆ ತೆರಳಿ ಅರ್ಹ ಮತದಾರರ ಹೆಸರು ಪಟ್ಟಿಯಲ್ಲಿ ಇರುವುದನ್ನು ಪರಿಶೀಲಿಸುವಂತೆ ಕರೆ ನೀಡಿದರು.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಗ್ರಾಮೀಣ ಜಿಲ್ಲಾಧ್ಯಕ್ಷ ಬಸವರಾಜ ಶೇಗಾವಿ, ಮಲ್ಲೇಶ ಚೌಗಲಾ, ಯಲ್ಲಪ್ಪ ಶಿಗೆ, ಉದಯ ಗೌಡ, ಮಂಜುನಾಥ ಗಂಗನವರ, ಐಶ್ವರ್ಯ ಸಾದನ್ನವರ, ಶಿವಾ ಹಂಪನವರ, ಪ್ರವೀಣ್ ತುಕ್ಕಾನಟ್ಟಿ, ಪ್ರಕಾಶ ಪಾಟೀಲ್, ಮಡಿವಾಳಪ್ಪ ಅಕ್ಕಿ ಸಾಗರ, ಶಿವು ಪಾಟೀಲ್ ಸೇರಿದಂತೆ ಯುವ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button