*ಪ್ರಜ್ವಲ್ ರೇವಣ್ಣಗೆ ಸದ್ಯಕ್ಕೆ ಹಿಂಡಲಗಾ ಜೈಲಿಗೆ ಶಿಫ್ಟ್ ಇಲ್ಲ*: *ವರ್ಗಾವಣೆ ಆದೇಶಕ್ಕೆ ತಾತ್ಕಾಲಿಕ ತಡೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬೆಳಗಾವಿಯ ಹಿಂಡಲಗಾ ಜೈಲಿಗೆ ಸ್ಥಳಾಂತರಿಸುವ ಪ್ರಕ್ರಿಯೆಗೆ ಸದ್ಯ ತಾತ್ಕಾಲಿಕ ಬ್ರೇಕ್ ಬಿದ್ದಿದೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿ ನಡೆದ ತಪಾಸಣೆ ವೇಳೆ ಪ್ರಜ್ವಲ್ ರೇವಣ್ಣ ಅವರ ವಾಸಸ್ಥಳದಲ್ಲಿ ಮೊಬೈಲ್ ಫೋನ್ ಪತ್ತೆಯಾಗಿತ್ತು. ಜೈಲು ಆವರಣದಲ್ಲಿ ನಿಷೇಧಿತ ಮೊಬೈಲ್ ಬಳಕೆಯ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕಾರಾಗೃಹ ಇಲಾಖೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿತ್ತು.
ಈ ಹಿನ್ನೆಲೆಯಲ್ಲಿ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆಯ ಡಿಜಿಪಿ ಅಲೋಕ್ ಕುಮಾರ್ ಅವರು ಪ್ರಜ್ವಲ್ ರೇವಣ್ಣ ಸೇರಿದಂತೆ ಒಟ್ಟು ಒಂಬತ್ತು ಕೈದಿಗಳನ್ನು ಬೇರೆ ಜೈಲುಗಳಿಗೆ ಸ್ಥಳಾಂತರಿಸಲು ಆದೇಶಿಸಿದ್ದರು. ಅದರಂತೆ ಪ್ರಜ್ವಲ್ ರೇವಣ್ಣ ಅವರನ್ನು ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲು ಸಿದ್ಧತೆ ನಡೆಸಲಾಗಿತ್ತು.
ಆದರೆ, ವರ್ಗಾವಣೆ ಪ್ರಕ್ರಿಯೆ ಕೈಗೊಳ್ಳುವ ವೇಳೆ ಕೆಲವು ಆಡಳಿತಾತ್ಮಕ ಹಾಗೂ ತಾಂತ್ರಿಕ ಸಮಸ್ಯೆಗಳು ಎದುರಾಗಿರುವ ಹಿನ್ನೆಲೆಯಲ್ಲಿ ಆದೇಶವನ್ನು ಸದ್ಯಕ್ಕೆ ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ ಎಂದು ಕಾರಾಗೃಹ ಇಲಾಖೆ ಮೂಲಗಳು ತಿಳಿಸಿವೆ.
ಇದೇ ವೇಳೆ ಜೈಲಿನಲ್ಲಿ ಮೊಬೈಲ್ ಫೋನ್ ಪತ್ತೆಯಾದ ಪ್ರಕರಣದ ತನಿಖೆ ಮುಂದುವರಿದಿದ್ದು, ನಿಷೇಧಿತ ವಸ್ತು ಜೈಲಿನೊಳಗೆ ಹೇಗೆ ಪ್ರವೇಶಿಸಿತು ಎಂಬ ಬಗ್ಗೆಯೂ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಮುಂದಿನ ದಿನಗಳಲ್ಲಿ ಹಿರಿಯ ಅಧಿಕಾರಿಗಳ ನಿರ್ದೇಶನ ಹಾಗೂ ಕಾನೂನು ಪ್ರಕ್ರಿಯೆಗಳ ಆಧಾರದ ಮೇಲೆ ಪ್ರಜ್ವಲ್ ರೇವಣ್ಣ ಅವರ ಸ್ಥಳಾಂತರ ಕುರಿತು ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




