*ಅಕ್ಟೋಬರ್ 15ರಿಂದ ಮಳೆ ಚುರುಕು*: ಬೆಳಗಾವಿ ಸೇರಿ ಉತ್ತರ ಕರ್ನಾಟಕದಲ್ಲೂ ವರ್ಷಧಾರೆ ಸಾಧ್ಯತೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯಾದ್ಯಂತ ಅಕ್ಟೋಬರ್ 14ರವರೆಗೆ ಬಹುತೇಕ ಒಣಹವೆ ಮುಂದುವರಿಯಲಿದ್ದು, ಅಕ್ಟೋಬರ್ 15ರಿಂದ ಹವಾಮಾನದಲ್ಲಿ ಬದಲಾವಣೆ ಕಂಡುಬರುವ ಸಾಧ್ಯತೆಯಿದೆ.
ಕರಾವಳಿ, ಮಲೆನಾಡು ಹಾಗೂ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಅಕ್ಟೋಬರ್ 15ರಿಂದ 17ರವರೆಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಅಕ್ಟೋಬರ್ 14ರವರೆಗೆ ಒಣಹವೆ ಮುಂದುವರಿಯಲಿದೆ. ಅಕ್ಟೋಬರ್ 15ರಿಂದ ಬೆಂಗಳೂರು ನಗರ ಮತ್ತು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಗುಡುಗು-ಸಿಡಿಲು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ. ಅಕ್ಟೋಬರ್ 16 ಮತ್ತು 17ರಂದು ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಿಗೆ ಮಳೆ ವಿಸ್ತರಿಸುವ ನಿರೀಕ್ಷೆಯಿದೆ.
ಉತ್ತರ ಒಳನಾಡಿನ ಜಿಲ್ಲೆಗಳ ಪೈಕಿ ಅಕ್ಟೋಬರ್ 15ರಂದು ಗದಗ, ಕೊಪ್ಪಳ ಹಾಗೂ ರಾಯಚೂರಿನ ಕೆಲವೆಡೆ ಲಘು ಮಳೆಯಾಗಬಹುದು.
ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಆದರೆ ಅಕ್ಟೋಬರ್ 16 ಮತ್ತು 17ರಂದು ಬಾಗಲಕೋಟೆ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ



