*ಸ್ಟಿಂಗ್ ಆಪರೇಷನ್ ಯಾರು ಮಾಡುತ್ತಿದ್ದಾರೆ ಎಂಬ ಸತ್ಯ ಗೊತ್ತಾಗಬೇಕು*: ಮಾಜಿ ಸಿಎಂ ಸಿದ್ದರಾಮಯ್ಯ

ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಕಾರಣದಲ್ಲಿ ಸ್ಟಿಂಗ್ ಆಪರೇಷನ್ ವಿಚಾರ ಹೊಸ ಚರ್ಚೆಗೆ ಕಾರಣವಾಗಿದೆ. ತಮ್ಮನ್ನೂ ಸೇರಿಸಿ ಕೆಲವು ಸಚಿವರನ್ನು ಖಾಸಗಿ ತಂಡವೊಂದು ಸ್ಟಿಂಗ್ ಆಪರೇಷನ್ ಮೂಲಕ ಸಿಲುಕಿಸಲು ಯತ್ನಿಸಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿಕೆ ನೀಡಿದ ಬೆನ್ನಲ್ಲೇ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ. ಸ್ಟಿಂಗ್ ಆಪರೇಷನ್ ನಡೆಯುತ್ತಿದೆ ಎಂಬುದು ಗೊತ್ತಿದೆ, ಆದರೆ ಅದನ್ನು ಯಾರು ಮಾಡುತ್ತಿದ್ದಾರೆ ಎಂಬ ಸತ್ಯ ಹೊರಬರಬೇಕು ಎಂದು ಹೇಳಿದ್ದಾರೆ.
ಲೋಕನಾಯಕ ಜಯಪ್ರಕಾಶ್ ನಾರಾಯಣ್ ಅವರ ಜನ್ಮದಿನದ ಹಿನ್ನೆಲೆಯಲ್ಲಿ ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಿದ್ದರಾಮಯ್ಯ, ಸ್ಟಿಂಗ್ ಆಪರೇಷನ್ ಕುರಿತು ಮಾತನಾಡಿದರು. ಸ್ಟಿಂಗ್ ಮಾಡುತ್ತಿದ್ದಾರೆ ಎಂಬ ಮಾಹಿತಿ ಇದೆ. ಆದರೆ, ಅದರ ಹಿಂದೆ ಯಾರಿದ್ದಾರೆ ಎಂಬುದು ಸ್ಪಷ್ಟವಾಗಬೇಕು ಎಂದು ಹೇಳಿದ್ದಾರೆ.
ಇದೇ ವೇಳೆ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳ ಬಗ್ಗೆಯೂ ಮಾತನಾಡಿದ ಸಿದ್ದರಾಮಯ್ಯ, ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿಯ ವಾತಾವರಣವಿದೆ. ಸರ್ವಾಧಿಕಾರ ಮತ್ತು ಭ್ರಷ್ಟಾಚಾರ ಹೆಚ್ಚುತ್ತಿವೆ ಹಾಗೂ ಸಂವಿಧಾನಿಕ ಸಂಸ್ಥೆಗಳನ್ನು ವಶಕ್ಕೆ ಪಡೆಯುವ ಪ್ರಯತ್ನ ನಡೆಯುತ್ತಿದೆ ಎಂದು ತಿಳಿಸಿದರ.
ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕಲಾಗುತ್ತಿದೆ ಎಂಬ ಆರೋಪಗಳ ವಿರುದ್ಧ ಹೋರಾಟ ನಡೆಸಬೇಕಿದೆ ಎಂದು ಹೇಳಿದ ಸಿದ್ದರಾಮಯ್ಯ, ಯುವಕರು ಮತ್ತು ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಗಳು ಬದಲಾವಣೆಗೆ ಕಾರಣವಾಗಬೇಕು ಎಂದರು. ಕಾಕ್ರೋಚ್ ಜನತಾ ಪಾರ್ಟಿಯ ಯುವಕರು ಹಾಗೂ ರಾಹುಲ್ ಗಾಂಧಿ ಹೋರಾಟ ನಡೆಸುತ್ತಿದ್ದಾರೆ. ಈ ಹೋರಾಟಗಳು ಮುಂದಿನ ದಿನಗಳಲ್ಲಿ ಯಾವ ರೂಪ ಪಡೆಯುತ್ತವೆ ಎಂಬುದನ್ನು ಕಾದು ನೋಡಬೇಕು ಎಂದರು.
ಜಯಪ್ರಕಾಶ್ ನಾರಾಯಣ್ ಅವರ ಹೋರಾಟಗಳು ಇಂದಿಗೂ ಮಾರ್ಗದರ್ಶನ ನೀಡುತ್ತವೆ ಎಂದು ಸ್ಮರಿಸಿದ ಅವರು, ದೇಶದಲ್ಲಿ ಬದಲಾವಣೆ ಅಗತ್ಯವಿದೆ ಎಂಬ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.
ಇನ್ನು, ದೆಹಲಿಯಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಕಾಂಗ್ರೆಸ್ ನಡೆಸಲಿರುವ ಪ್ರತಿಭಟನೆಯಲ್ಲಿ ಭಾಗವಹಿಸುವ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ತನಗೆ ಅಧಿಕೃತವಾಗಿ ಯಾರೂ ಫೋನ್ ಮಾಡಿಲ್ಲ. ಕಾರ್ಯಕ್ರಮದ ಮಾಹಿತಿ ಬಂದಿದೆ. ಪ್ರಯಾಣಕ್ಕೆ ಟಿಕೆಟ್ ಸಿಗುತ್ತದೆಯೇ ಎಂದು ನೋಡುತ್ತೇನೆ; ಸಿಕ್ಕರೆ ಹೋಗುತ್ತೇನೆ ಎಂದು ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




