
ಪ್ರಗತಿವಾಹಿನಿ ಸುದ್ದಿ: ಬೆಳಗಿನ ಜಾವ ಜಮೀನಿನಲ್ಲಿ ಹೂವು ಬಿಡಿಸಲು ತೆರಳಿದ್ದ ಅರ್ಚಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಅರ್ಚಕನ ಮೇಲೆ ಚಿರತೆ ಏಕಾಏಕಿ ದಾಳಿ ಮಾಡಿದ್ದು, ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
62 ವರ್ಷದ ಶಿವಸ್ವಾಮಿ ಮೃತ ದುರ್ದೈವಿ. ಕೃಷಿಯ ಜೊತೆಗೆ ಅರ್ಚಕರಾಗಿಯೂ ಕೆಲಸ ಮಾಡುತ್ತಿದ್ದ ಶಿವಸ್ವಾಮಿ ಇಂದು ಬೆಳ್ಳಂಬೆಳಗ್ಗೆ ತಮ್ಮ ಜಮೀನಿನಲ್ಲಿ ಕಾಕಾಡ ಹೂವು ಬಿಡಸಲು ಹೋಗಿದ್ದಾರೆ. ಈ ವೇಳೆ ಜಮೀನಿನಲ್ಲಿ ಅವಿತು ಕುಳಿತಿದ್ದ ಚಿರತೆ ಏಕಾಏಕಿ ಶಿವಸ್ವಾಮಿ ಮೇಲೆ ದಾಳಿ ಮಾಡಿದೆ. ಚಿರತೆ ದಾಳಿಯಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗದೆ ತೀವ್ರ ರಕ್ತಸ್ರಾವದಿಂದ ಜಮೀನಿನಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲೂಕಿನ ಕಲ್ಲದೇವನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕಲ್ಲದೇವನಹಳ್ಳಿ ಗ್ರಾಮದಲ್ಲಿ ಕಳೆದ ಹಲವು ದಿನಗಳಿಂದ ಚಿರತೆ ಹಾವಳಿ ಹೆಚ್ಚಾಗಿತ್ತು. ಜಾನುವಾರುಗಳ ಮೇಲೆಯೂ ಪದೇಪದೇ ದಾಳಿಗಳು ನಡೆದಿದ್ದವು. ಚಿರತೆಯನ್ನು ಸೆರೆಹಿಡಿಯುವಂತೆ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಸೂಕ್ತ ಕ್ರಮ ಕೈಗೊಂಡಿಲ್ಲ ಎಂಬುದು ಗ್ರಾಮಸ್ಥರ ಆರೋಪವಾಗಿದೆ.
ರೈತ ಮೃತಪಟ್ಟ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಚಿರತೆಯನ್ನು ಸೆರೆಹಿಡಿಯುವವರೆಗೆ ಮೃತದೇಹವನ್ನು ಸ್ಥಳದಿಂದ ಕೊಂಡೊಯ್ಯಲು ಬಿಡುವುದಿಲ್ಲ ಎಂದು ಪ್ರತಿಭಟನೆ ನಡೆಸಿದರು. ಬಳಿಕ ಅಧಿಕಾರಿಗಳು ಚಿರತೆ ಸೆರೆಗೆ ಕಾರ್ಯಾಚರಣೆ ನಡೆಸುವ ಭರವಸೆ ನೀಡಿದ ನಂತರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಯಿತು.
ಈ ಕುರಿತು ಮಾತನಾಡಿದ ಡಿಎಫ್‌ಒ ರಾಮಕೃಷ್ಣಪ್ಪ, ಸೋಮವಾರ ಸಂಜೆ ಡ್ರೋನ್‌ಗಳ ನೆರವಿನಿಂದ ಚಿರತೆಯನ್ನು ಪತ್ತೆಹಚ್ಚಿ ಸೆರೆಹಿಡಿಯುವ ಕಾರ್ಯಾಚರಣೆ ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ.
ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಕಳೆದ ಕೆಲವು ತಿಂಗಳುಗಳಿಂದ ಚಿರತೆ ಹಾವಳಿ ಹೆಚ್ಚುತ್ತಿರುವುದು ಜನರಲ್ಲಿ ಆತಂಕ ಮೂಡಿಸಿದೆ. ಜಾನುವಾರುಗಳ ಮೇಲಿನ ದಾಳಿಯ ಬಳಿಕ ಇದೀಗ ರೈತನೊಬ್ಬರು ಪ್ರಾಣ ಕಳೆದುಕೊಂಡಿರುವುದು ಗ್ರಾಮಸ್ಥರ ಭಯವನ್ನು ಮತ್ತಷ್ಟು ಹೆಚ್ಚಿಸಿದೆ. ಅರಣ್ಯ ಇಲಾಖೆ ತಕ್ಷಣ ಕಾರ್ಯಾಚರಣೆ ನಡೆಸಿ ಚಿರತೆಯನ್ನು ಸೆರೆಹಿಡಿಯಬೇಕು ಹಾಗೂ ಜನರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ಕೇಳಿಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




