*ವಿಧಾನಸೌಧದಿಂದ ಕಿತ್ತೂರು ರಾಣಿ ಚೆನ್ನಮ್ಮ ವಿಜಯ ಜ್ಯೋತಿ ಯಾತ್ರೆಗೆ ಚಾಲನೆ*

ಪ್ರಗತಿವಾಹಿನಿ ಸುದ್ದಿ,ಬೆಳಗಾವಿ: ವೀರರಾಣಿ ಕಿತ್ತೂರು ಚೆನ್ನಮ್ಮ ಅವರ ಶೌರ್ಯ, ಸಾಹಸ ಹಾಗೂ ದೇಶಪ್ರೇಮದ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಉದ್ದೇಶದಿಂದ ಹಮ್ಮಿಕೊಂಡಿರುವ ‘ವಿಜಯ ಜ್ಯೋತಿ ಯಾತ್ರೆ’ಗೆ ವಿಧಾನಸೌಧದಲ್ಲಿ ಸೋಮವಾರ ಚಾಲನೆ ನೀಡಲಾಯಿತು.
ವಿಧಾನಸೌಧದ ಪೂರ್ವ ದ್ವಾರದ ಮೆಟ್ಟಿಲುಗಳ ಮುಂಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ವಿಜಯ ಜ್ಯೋತಿಗೆ ಚಾಲನೆ ನೀಡಿದರು.
ಕಿತ್ತೂರಿನಲ್ಲಿ ಅಕ್ಟೋಬರ್ 23ರಿಂದ 25ರವರೆಗೆ ನಡೆಯಲಿರುವ ಕಿತ್ತೂರು ರಾಣಿ ಚೆನ್ನಮ್ಮ ಉತ್ಸವದ ಅಂಗವಾಗಿ ಈ ಯಾತ್ರೆಯನ್ನು ಆಯೋಜಿಸಲಾಗಿದೆ. ಬ್ರಿಟಿಷರ ವಿರುದ್ಧ ರಾಣಿ ಚೆನ್ನಮ್ಮ ನಡೆಸಿದ ಐತಿಹಾಸಿಕ ಹೋರಾಟ, ಸ್ವಾತಂತ್ರ್ಯ ಮತ್ತು ಸ್ವಾಭಿಮಾನದ ಸಂದೇಶವನ್ನು ಜನರಿಗೆ ತಲುಪಿಸುವುದು ಯಾತ್ರೆಯ ಪ್ರಮುಖ ಉದ್ದೇಶವಾಗಿದೆ.
ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ, ಬೆಳಗಾವಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಯಾತ್ರೆ ನಡೆಯುತ್ತಿದೆ.
ಕಾರ್ಯಕ್ರಮದಲ್ಲಿ ಶಾಸಕ ಬಾಬಾಸಾಹೇಬ್ ಪಾಟೀಲ್, ಕಲಮಠದ ಮಡಿವಾಳ ರಾಜೇಂದ್ರ ಸ್ವಾಮೀಜಿ, ಪಂಚಾಕ್ಷರಿ ಮಹಾಸ್ವಾಮೀಜಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು. ಬಿಜ್ಜರಗಿಯ ಸಾಂಸ್ಕೃತಿಕ ಹಾಗೂ ಜಾನಪದ ಕಲಾ ತಂಡಗಳ ಪ್ರದರ್ಶನ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿತು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




