*ಕೇಂದ್ರ ಸಚಿವರೊಂದಿಗಿನ ಸಭೆ ವಿಫಲ*: *ನಾಳೆ ರಾಷ್ಟ್ರೀಯ ಹೆದ್ದಾರಿ ಬಂದ್ ಗೆ ರೈತ ಸಂಘಟನೆ ಕರೆ*

ಕೇಂದ್ರ ಸಚಿವ ಜೋಶಿಯಿಂದ ರೈತರಿಗೆ ಅವಮಾನ
ಪ್ರಗತಿವಾಹಿನಿ ಸುದ್ದಿ: ಕೇಂದ್ರ ಸರಕಾರ ರೈತರ ಪ್ರಮುಖ ಬೇಡಿಕೆಯಾಗಿದ್ದ ಕಬ್ಬಿಗೆ ಎಂಎಸ್ ಪಿ ದರ ನಿಗದಿ ಹಾಗೂ ಸಂಪೂರ್ಣ ಎಥನಾಲ್ ಖರೀದಿಗೆ ಹಿಂದೇಟು ಹಾಕುತ್ತಿರುವುದನ್ನು ಖಂಡಿಸಿ ಮಂಗಳವಾರ ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಚುನ್ನಪ್ಪ ಪೂಜಾರಿ ಕರೆ ನೀಡಿದ್ದಾರೆ.
ಸೋಮವಾರ ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಎರಡು ತಿಂಗಳಿಂದ ಕಬ್ಬಿನ ಎಂಎಸ್‌ಪಿ ಏರಿಕೆಗೆ ಒತ್ತಾಯಿಸುತ್ತಿದ್ದೇವೆ. ಬೆಲೆ ಏರಿಕೆ ನಿರ್ಧಾರಕ್ಕೆ ಇನ್ನೂ ಒಂದು ತಿಂಗಳು ಬೇಕು ಎಂದು ಹೇಳಲಾಗುತ್ತಿದೆ. ಆದರೆ, ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆ ಮಾಡುವಾಗ ಯಾರ ಅಭಿಪ್ರಾಯ ಪಡೆಯಲಾಗಿತ್ತು? ಬೆಳೆ ಬೆಳೆಯುವ ವೆಚ್ಚ ಮೂರು ಪಟ್ಟು ಹೆಚ್ಚಾಗಿದ್ದು, ಕಬ್ಬು ಬೆಳೆಗಾರರು ತೀವ್ರ ಆತಂಕದಲ್ಲಿದ್ದಾರೆ ಎಂದರು.
ರೈತ ಕುಟುಂಬಗಳು ಸಂಕಷ್ಟ ಅನುಭವಿಸಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರೇ ಕಾರಣ ಎಂದು ಹರಿಹಾಯ್ದರು.
ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಎಂಎಸ್‌ಪಿ ಘೋಷಣೆ ಮಾಡಿಸಲು ಸಾಧ್ಯವಿಲ್ಲ ಎಂದಿದ್ದಾರೆ. ರೈತರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಬದಲು ನಾಟಕ ಮಾಡುತ್ತಿದ್ದಾರೆ. ಸಭೆಗೆ ನೂರು ಜನ ರೈತರನ್ನು ಕರೆಸಿ ಅವಮಾನಿಸಲಾಗಿದೆ. ರೈತರನ್ನು ಗೌರವದಿಂದ ನಡೆಸಿಕೊಳ್ಳಬೇಕು ಎಂದು ಆಗ್ರಹಿಸಿದರು.
ಸಭೆಯಲ್ಲಿ ರೈತರ ಬೇಡಿಕೆಗಳಿಗೆ ಸೂಕ್ತ ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ ತಾವು ಸಭೆಗೆ ಹೋಗಿಲ್ಲ. ರೈತರ ಹಿತಾಸಕ್ತಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿರುವ ಜೋಶಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ರಾಜ್ಯದಲ್ಲಿ ಕಬ್ಬು ಅರೆಯುವ ಹಂಗಾಮು ಆರಂಭವಾಗಬೇಕಿದ್ದು, ಇನ್ನೂ ನಾಲ್ಕು ದಿನಗಳೊಳಗೆ ಸಕ್ಕರೆ ಕಾರ್ಖಾನೆಗಳನ್ನು ಆರಂಭಿಸಬೇಕು. ರೈತರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸದಿದ್ದರೆ ಕರ್ನಾಟಕ ಮತ್ತು ಮಹಾರಾಷ್ಟ್ರದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಧರಣಿ ನಡೆಸುವುದರ ಜತೆಗೆ ವಿಮಾನ ನಿಲ್ದಾಣಗಳ ಬಂದ್‌ಗೂ ಕರೆ ನೀಡುವ ಎಚ್ಚರಿಕೆ ನೀಡಿದರು.
ದೇಶದಲ್ಲಿ ಸಕ್ಕರೆಗೆ ಕೊರತೆ ಇರುವ ಹಿನ್ನೆಲೆಯಲ್ಲಿ ಗೃಹ ಬಳಕೆಯ ಸಕ್ಕರೆ ಮತ್ತು ವಾಣಿಜ್ಯ ಉದ್ದೇಶದ ಸಕ್ಕರೆಯನ್ನು ಪ್ರತ್ಯೇಕವಾಗಿ ಮಾರಾಟ ಮಾಡುವ ವ್ಯವಸ್ಥೆ ಜಾರಿಗೆ ತರಬೇಕು ಎಂದು ರೈತ ಮುಖಂಡರು ಸಲಹೆ ನೀಡಿದ್ದಾರೆ. ಎಥನಾಲ್ ಉತ್ಪಾದನೆಯಿಂದ ದೊರೆಯುವ ಸಂಪೂರ್ಣ ಪ್ರಮಾಣವನ್ನು ಸರ್ಕಾರ ಖರೀದಿಸಿದರೆ ಕಬ್ಬು ಬೆಳೆಗಾರರ ಜತೆಗೆ ಭತ್ತ ಮತ್ತು ಮೆಕ್ಕೆಜೋಳ ಬೆಳೆಗಾರರಿಗೂ ಅನುಕೂಲವಾಗಲಿದೆ ಎಂದರು.
ಕಬ್ಬಿನ ಎಂಎಸ್‌ಪಿ ಏರಿಕೆ, ಸಕ್ಕರೆ ಕಾರ್ಖಾನೆಗಳ ಆರಂಭ ಹಾಗೂ ರೈತರ ಇತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಾಳೆ ಬೆಳಗ್ಗೆ 11 ಗಂಟೆಯಿಂದ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುವುದು ಎಂದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




