*ಭೀಕರ ಅಪಘಾತದಲ್ಲಿ ಬಿಜೆಪಿ ಮುಖಂಡ ಸಾವು*: *ಲಾರಿಗೆ ಕಾರು ಡಿಕ್ಕಿ ಹೊಡೆದು ಭೀಕರ ದುರಂತ!*

ಪ್ರಗತಿವಾಹಿನಿ ಸುದ್ದಿ: ಭೀಕರ ರಸ್ತೆ ಅಪಘಾತದಲ್ಲಿ ಮಾಲೂರಿನ ಬಿಜೆಪಿ ಮುಖಂಡ ಶಿವಕುಮಾರ್ ಮೃತಪಟ್ಟಿದ್ದಾರೆ. ಮುಂಬರುವ ಚುನಾವಣೆಯಲ್ಲಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಪಡೆಯುವ ಆಕಾಂಕ್ಷೆ ಹೊಂದಿದ್ದ 50 ವರ್ಷದ ಶಿವಕುಮಾರ್, ರೇಂಜ್ ರೋವರ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಈ ದುರಂತ ಸಂಭವಿಸಿದೆ. ಕಾರಿನಲ್ಲಿದ್ದ ಇತರ ಮೂವರು ಪ್ರಯಾಣಿಕರೂ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಶಿವಕುಮಾರ್ ಚಿತ್ರದುರ್ಗದಿಂದ ಮಾಲೂರಿಗೆ ರೇಂಜ್ ರೋವರ್ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಹೊಸಕೋಟೆ–ದಾಬಸ್ಪೇಟೆ ರಿಂಗ್ ರಸ್ತೆಯಲ್ಲಿ ಮುಂದೆ ಸಾಗುತ್ತಿದ್ದ ಗ್ಯಾಸ್ ಸಾಗಣೆ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ. ಓವರ್ಟೇಕ್ ಮಾಡಲು ಪ್ರಯತ್ನಿಸಿದ ಸಂದರ್ಭದಲ್ಲಿ ಅತಿವೇಗದಿಂದ ಅಪಘಾತ ಸಂಭವಿಸಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಸಮೀಪ ಸಂಭವಿಸಿದೆ.
ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಶಿವಕುಮಾರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಉಳಿದ ಮೂವರು ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ದೇವನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಪಘಾತಕ್ಕೆ ನಿಖರವಾದ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




