Kannada NewsKarnataka NewsLatest

*ಕಬ್ಬು ಬೆಲೆ ಹೋರಾಟ ತೀವ್ರ*: *ಹತ್ತರಗಿಯಿಂದ ‘ಹುಬ್ಬಳ್ಳಿ ಚಲೋ’ ಪಾದಯಾತ್ರೆ ಆರಂಭ!*

ಪ್ರಗತಿವಾಹಿನಿ ಸುದ್ದಿ: ಕಬ್ಬಿಗೆ ಸೂಕ್ತ ಬೆಲೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಡೆಯುತ್ತಿರುವ ರೈತರ ಹೋರಾಟ ಮತ್ತಷ್ಟು ತೀವ್ರಗೊಂಡಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹತ್ತರಗಿ ಟೋಲ್‌ನಿಂದ ರೈತರು ‘ಹುಬ್ಬಳ್ಳಿ ಚಲೋ’ ಪಾದಯಾತ್ರೆ ಆರಂಭಿಸಿದ್ದಾರೆ. ರೈತ ಮುಖಂಡ ಚೂನಪ್ಪ ಪೂಜಾರಿ ಅವರ ನೇತೃತ್ವದಲ್ಲಿ ಆರಂಭವಾಗಿರುವ ಈ ಪಾದಯಾತ್ರೆಯಲ್ಲಿ ಕಬ್ಬು ಬೆಳೆಗಾರರು ರೈತರ ಪರವಾಗಿ ಘೋಷಣೆಗಳನ್ನು ಕೂಗುತ್ತಾ ಮುನ್ನಡೆಯುತ್ತಿದ್ದಾರೆ.

ಪುಣೆ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರ ಒಂದು ಬದಿಯಲ್ಲಿ ರೈತರು ಪಾದಯಾತ್ರೆ ನಡೆಸುತ್ತಿದ್ದಾರೆ. ಇಂದು ರಾತ್ರಿ ಬೆಳಗಾವಿ ತಾಲೂಕಿನ ಕಾಕತಿ ಗ್ರಾಮದವರೆಗೆ ತೆರಳಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ. ಕಬ್ಬಿಗೆ ನ್ಯಾಯಯುತ ಬೆಲೆ ದೊರೆಯಬೇಕು ಹಾಗೂ ರೈತರ ವಿವಿಧ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು ಎಂಬುದು ಹೋರಾಟಗಾರರ ಪ್ರಮುಖ ಒತ್ತಾಯವಾಗಿದೆ.

ಇದುವರೆಗೆ ಪ್ರತಿಭಟನೆ ಮತ್ತು ಧರಣಿಗಳ ಮೂಲಕ ಬೇಡಿಕೆಗಳನ್ನು ಮುಂದಿಟ್ಟಿದ್ದ ರೈತರು, ಇದೀಗ ಪಾದಯಾತ್ರೆಯ ಮೂಲಕ ಹೋರಾಟವನ್ನು ಮುಂದುವರಿಸಿದ್ದಾರೆ. ರೈತ ಮುಖಂಡ ಚೂನಪ್ಪ ಪೂಜಾರಿ ನೇತೃತ್ವದಲ್ಲಿ ನಡೆಯುತ್ತಿರುವ ಈ ಪಾದಯಾತ್ರೆಯ ಮುಂದಿನ ಹಂತದ ಕುರಿತು ಕುತೂಹಲ ಮೂಡಿದೆ.

ಕಬ್ಬಿನ ಬೆಲೆ ನಿಗದಿ ಸೇರಿದಂತೆ ರೈತರ ಬೇಡಿಕೆಗಳಿಗೆ ಸರ್ಕಾರ ಯಾವ ರೀತಿಯಲ್ಲಿ ಸ್ಪಂದಿಸಲಿದೆ ಎಂಬುದರ ಮೇಲೆ ಮುಂದಿನ ಬೆಳವಣಿಗೆಗಳು ಅವಲಂಬಿತವಾಗಿವೆ. ರೈತರ ಹೋರಾಟಕ್ಕೆ ಪರಿಹಾರ ಕಂಡುಕೊಳ್ಳಲು ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ಕೇಳಿಬರುತ್ತಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button