
ಪ್ರಗತಿವಾಹಿನಿ ಸುದ್ದಿ: ಕರ್ನಾಟಕದ ನೂತನ ರಾಜ್ಯಪಾಲೆಯಾಗಿ ಬಿಜೆಪಿಯ ಹಿರಿಯ ನಾಯಕಿ ಡಾ. ಸುಧಾ ಯಾದವ್ ನೇಮಕಗೊಂಡಿದ್ದಾರೆ. ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧನ ಪತ್ನಿಯಾಗಿರುವ ಸುಧಾ ಯಾದವ್ ರಸಾಯನಶಾಸ್ತ್ರದಲ್ಲಿ ಪಿಎಚ್ಡಿ ಪಡೆದಿದ್ದು, ಮಾಜಿ ಲೋಕಸಭಾ ಸಂಸದೆಯೂ ಹೌದು. ಬಿಜೆಪಿ ಸಂಸದೀಯ ಮಂಡಳಿಯ ಸದಸ್ಯೆಯಾಗಿರುವ ಸುಧಾ ಯಾದವ್, ಥಾವರ್ ಚಂದ್ ಗೆಹ್ಲೋಟ್ ಬದಲಿಗೆ ರಾಜ್ಯಪಾಲರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಇಂದು ಅಕ್ಟೋಬರ್ 15ರ ಸಂಜೆ ಬೆಂಗಳೂರಿಗೆ ಆಗಮಿಸಲಿದ್ದು, ನಾಳೆ ಅಕ್ಟೋಬರ್ 16ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಡಾ. ಸುಧಾ ಯಾದವ್ ಇಂದು ಸಂಜೆ 6.45ಕ್ಕೆ ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಡಿಜಿ ಮತ್ತು ಐಜಿಪಿ ಡಾ. ಎಂ.ಎ. ಸಲೀಂ ಹಾಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತ ಮಹೇಶ್ವರ ರಾವ್ ಸ್ವಾಗತಿಸಲಿದ್ದಾರೆ. ನಾಳೆ ಸಂಜೆ 7.30ಕ್ಕೆ ಲೋಕಭವನದಲ್ಲಿ ವಿಶೇಷಾಧಿಕಾರಿಗಳಿಂದ ಸ್ವಾಗತ ಕಾರ್ಯಕ್ರಮ ನಡೆಯಲಿದೆ.
ಅಕ್ಟೋಬರ್ 16ರಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಲೋಕಭವನದ ಗಾಜಿನ ಮನೆಯಲ್ಲಿ ಪ್ರಮಾಣವಚನ ಸಮಾರಂಭ ನಡೆಯಲಿದೆ. ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಗಳು ಸುಧಾ ಯಾದವ್ಗೆ ಪ್ರಮಾಣವಚನ ಬೋಧಿಸಲಿದ್ದಾರೆ. ಕಾರ್ಯಕ್ರಮಕ್ಕೆ ಲೋಕಭವನದಲ್ಲಿ ಸಿದ್ಧತೆಗಳು ನಡೆಯುತ್ತಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರು, ಬಿಜೆಪಿ ನಾಯಕರು ಹಾಗೂ ಹಲವು ಗಣ್ಯರು ಭಾಗವಹಿಸುವ ನಿರೀಕ್ಷೆಯಿದೆ.
ಇನ್ನೊಂದೆಡೆ, ಐದು ವರ್ಷಗಳ ಕಾಲ ಕರ್ನಾಟಕದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ ಥಾವರ್ ಚಂದ್ ಗೆಹ್ಲೋಟ್ ಅವರ ಅಧಿಕಾರಾವಧಿ ಪೂರ್ಣಗೊಂಡಿದೆ. ಈ ಹಿನ್ನೆಲೆಯಲ್ಲಿ ಅಕ್ಟೋಬರ್ 14ರಂದು ಬೆಂಗಳೂರಿನ ಲೋಕಭವನದ ಬ್ಯಾಂಕ್ವೆಟ್ ಹಾಲ್ನಲ್ಲಿ ಬೀಳ್ಕೊಡುಗೆ ಸಮಾರಂಭ ಆಯೋಜಿಸಲಾಗಿತ್ತು. ಲೋಕಭವನದ ಅಧಿಕಾರಿಗಳು ಮತ್ತು ಸಿಬ್ಬಂದಿ ಗೆಹ್ಲೋಟ್ಗೆ ಆತ್ಮೀಯವಾಗಿ ಬೀಳ್ಕೊಟ್ಟು ಮುಂದಿನ ಜೀವನಕ್ಕೆ ಶುಭ ಹಾರೈಸಿದರು.
ಸಮಾರಂಭದಲ್ಲಿ ಮಾತನಾಡಿದ ಗೆಹ್ಲೋಟ್, ಕರ್ನಾಟಕದ ಸೇವೆ ಸಲ್ಲಿಸಲು ಅವಕಾಶ ದೊರೆತಿದ್ದು ಭಾಗ್ಯ ಎಂದು ಹೇಳಿದರು. ಕರ್ನಾಟಕದ ನೆಲ ಮತ್ತು ಇಲ್ಲಿನ ಜನರಿಂದ ಸಾಕಷ್ಟು ಕಲಿತಿದ್ದೇನೆ. ರಾಜ್ಯದ ಜನರಿಗಾಗಿ ನಿಷ್ಠೆ ಹಾಗೂ ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಿದ್ದೇನೆ ಎಂದು ತಿಳಿಸಿದರು. ತಮ್ಮ ಕಾರ್ಯಾವಧಿಯಲ್ಲಿ ಸಹಕಾರ ನೀಡಿದ ಲೋಕಭವನದ ಅಧಿಕಾರಿಗಳು, ಸಿಬ್ಬಂದಿ ಮತ್ತು ಸಹೋದ್ಯೋಗಿಗಳಿಗೆ ಕೃತಜ್ಞತೆ ಸಲ್ಲಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ



