
ಪ್ರಗತಿವಾಹಿನಿ ಸುದ್ದಿ: ಕರ್ನಾಟಕದ ನೂತನ ರಾಜ್ಯಪಾಲರಾಗಿ ಹಿರಿಯ ರಾಜಕಾರಣಿ ಡಾ. ಸುಧಾ ಯಾದವ್ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.
ಬೆಂಗಳೂರಿನ ಲೋಕಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ಅವರು ರಾಜ್ಯದ ರಾಜ್ಯಪಾಲೆಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ರಾಜ್ಯಪಾಲರಾಗಿ ಕಾರ್ಯನಿರ್ವಹಿಸುತ್ತಿದ್ದ ಥಾವರ್ ಚಂದ್ ಗೆಹೋಟ್ ಅವರ ಸ್ಥಾನಕ್ಕೆ ಸುಧಾ ಯಾದವ್ ಅವರನ್ನು ನೇಮಕ ಮಾಡಲಾಗಿದೆ ಎಂಬ ಮಾಹಿತಿ ಪ್ರಕಟವಾಗಿದೆ. ಈ ನೇಮಕಾತಿಯೊಂದಿಗೆ ಕರ್ನಾಟಕದಲ್ಲಿ ರಾಜ್ಯಪಾಲರ ಉನ್ನತ ಹುದ್ದೆ ಅಲಂಕರಿಸಿದ ಎರಡನೇ ಮಹಿಳೆ ಎಂಬ ಹೆಗ್ಗಳಿಕೆ ಅವರಿಗೆ ಲಭಿಸಿದೆ.
ಹರಿಯಾಣ ಮೂಲದ ಸುಧಾ ಯಾದವ್ ಅವರು ರಾಜಕೀಯ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿದ್ದಾರೆ. 1999ರ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಭಾರತೀಯ ಸೇನೆಯ ಯೋಧ ಸುಖ್ಬೀರ್ ಸಿಂಗ್ ಅವರ ಪತ್ನಿಯಾಗಿರುವ ಅವರು, ವೈಯಕ್ತಿಕ ಜೀವನದ ಸವಾಲುಗಳ ನಡುವೆಯೂ ಸಾರ್ವಜನಿಕ ಜೀವನದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡವರು.
ಶೈಕ್ಷಣಿಕವಾಗಿಯೂ ಉನ್ನತ ಸಾಧನೆ ಮಾಡಿರುವ ಅವರು, ಐಐಟಿ ರೂರ್ಕಿಯಿಂದ ರಸಾಯನಶಾಸ್ತ್ರದಲ್ಲಿ ಪಿಎಚ್ಡಿ ಪದವಿ ಪಡೆದಿದ್ದಾರೆ. ರಾಜಕೀಯ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಸುಧಾ ಯಾದವ್, ಹರಿಯಾಣದ ಮಹೇಂದ್ರಗಢ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದರು. ಬಿಜೆಪಿಯ ಸಂಸದೀಯ ಮಂಡಳಿಯಲ್ಲಿಯೂ ಸದಸ್ಯೆಯಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ.
ರಾಜಕೀಯ ಸಂಘಟನೆಯಲ್ಲಿ ಹಲವು ಜವಾಬ್ದಾರಿಗಳನ್ನು ನಿರ್ವಹಿಸಿರುವ ಸುಧಾ ಯಾದವ್ ಅವರಿಗೆ ಇದೀಗ ರಾಜ್ಯದ ಸಾಂವಿಧಾನಿಕ ಮುಖ್ಯಸ್ಥೆಯ ಜವಾಬ್ದಾರಿ ವಹಿಸಲಾಗಿದೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಗಮನ ಸೆಳೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




