*ಮೈಸೂರಲ್ಲಿ ಬಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರ ಕೊಲೆ ಪ್ರಕರಣ*: *ಕಾರ್ತಿಕ್ಗೆ ಗಲ್ಲು ಶಿಕ್ಷೆ!*

ಪ್ರಗತಿವಾಹಿನಿ ಸುದ್ದಿ: ಮೈಸೂರು ದಸರಾ ಮಹೋತ್ಸವದ ವೇಳೆ ಬಲೂನ್ ಮಾರಾಟಕ್ಕೆ ಬಂದಿದ್ದ ಒಂಬತ್ತು ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿ ಕೊಲೆ ಮಾಡಿದ ಪ್ರಕರಣದಲ್ಲಿ ಆರೋಪಿ ಕಾರ್ತಿಕ್ಗೆ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿದೆ. ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಮೈಸೂರು ಶೀಘ್ರಗತಿ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಅನಿಲ್ ಪಿ. ವಘಾಢೆ ಶಿಕ್ಷೆ ಪ್ರಕಟಿಸಿ ತೀರ್ಪು ನೀಡಿದ್ದಾರೆ. ಕಳೆದ ವರ್ಷ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣದಲ್ಲಿ ಇದೀಗ ಮಹತ್ವದ ಬೆಳವಣಿಗೆ ನಡೆದಿದೆ.
ಕಲಬುರಗಿಯಿಂದ ಕುಟುಂಬದೊಂದಿಗೆ ಮೈಸೂರಿಗೆ ಬಲೂನ್ ಮಾರಾಟ ಮಾಡಲು ಬಂದಿದ್ದ ಬಾಲಕಿ, ದಸರಾ ವಸ್ತುಪ್ರದರ್ಶನದ ಸಮೀಪ ತಾತ್ಕಾಲಿಕ ಟೆಂಟ್ನಲ್ಲಿ ವಾಸವಾಗಿದ್ದಳು. ಕುಟುಂಬದ ಸದಸ್ಯರು ನಿದ್ರಿಸುತ್ತಿದ್ದಾಗ ಬಾಲಕಿಯನ್ನು ಎಳೆದೊಯ್ದು ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿತ್ತು. ಈ ಘೋರ ಘಟನೆ ರಾಜ್ಯಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು.
ಘಟನೆಗೆ ಸಂಬಂಧಿಸಿದಂತೆ ಮೈಸೂರಿನ ನಜರಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳ ಆಧಾರದಲ್ಲಿ ತನಿಖೆ ನಡೆಸಿ, ಘಟನೆ ನಡೆದ 24 ಗಂಟೆಯೊಳಗೆ ಕಾರ್ತಿಕ್ನನ್ನು ಬಂಧಿಸಿದ್ದರು. ಮೈಸೂರಿನ ಸಿದ್ದಲಿಂಗಪುರದ ನಿವಾಸಿಯಾಗಿರುವ ಕಾರ್ತಿಕ್, ಮೈಸೂರು–ಕೊಳ್ಳೇಗಾಲ ಮಾರ್ಗದ ಬಸ್ನಲ್ಲಿ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ದ.
ಪ್ರಕರಣದ ವಿಚಾರಣೆ ನಡೆಸಿದ ಶೀಘ್ರಗತಿ ವಿಶೇಷ ನ್ಯಾಯಾಲಯ, ಸಾಕ್ಷ್ಯಾಧಾರಗಳ ಆಧಾರದಲ್ಲಿ ಕಾರ್ತಿಕ್ ಅಪರಾಧ ಎಸಗಿರುವುದು ಸಾಬೀತಾಗಿದೆ ಎಂದು ತೀರ್ಪು ನೀಡಿದೆ. ಇದೀಗ ಗಲ್ಲು ಶಿಕ್ಷೆ ಪ್ರಕಟವಾಗಿದ್ದು, ದಸರಾ ವೇಳೆ ನಡೆದಿದ್ದ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಬೆಳವಣಿಗೆ ಮತ್ತೆ ಸಾರ್ವಜನಿಕರ ಗಮನ ಸೆಳೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




