*ರಾಜ್ಯೋತ್ಸವಕ್ಕೆ ₹1 ಕೋಟಿ ಅನುದಾನ ಬಿಡುಗಡೆ ಮಾಡಿ: ಬೆಳಗಾವಿಯಲ್ಲಿ ಸಿಎಂಗೆ ಕರವೇ ಆಗ್ರಹ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯಲ್ಲಿ ಅದ್ಧೂರಿಯಾಗಿ ನಡೆಯುವ ಕನ್ನಡ ರಾಜ್ಯೋತ್ಸವ ಆಚರಣೆಗೆ ಸರ್ಕಾರದಿಂದ ₹1 ಕೋಟಿ ವಿಶೇಷ ಅನುದಾನ ಬಿಡುಗಡೆ ಮಾಡಬೇಕು. ಉತ್ತರ ಕರ್ನಾಟಕದ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಕಳಸಾ-ಬಂಡೂರಿ ಹಾಗೂ ಮಹದಾಯಿ ಯೋಜನೆಗಳ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಬೇಕು. ಕಬ್ಬು ಬೆಳೆಗಾರರ ಬೇಡಿಕೆಗಳಿಗೆ ರಾಜ್ಯ ಸರ್ಕಾರ ಸ್ಪಂದಿಸಿ ಕೇಂದ್ರದ ಗಮನ ಸೆಳೆಯಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಬೆಳಗಾವಿ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ಆಗ್ರಹಿಸಿದ್ದಾರೆ.
ಈ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿರುವ ಕರವೇ ಮುಖಂಡರು, ಬೆಳಗಾವಿಯಲ್ಲಿ ಪ್ರತಿವರ್ಷ ಲಕ್ಷಾಂತರ ಜನರ ಸಮ್ಮುಖದಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಹೀಗಾಗಿ ದಸರಾ ಮಾದರಿಯಲ್ಲಿ ರಾಜ್ಯೋತ್ಸವ ಆಚರಣೆಗೆ ಪ್ರತಿವರ್ಷ ಅನುದಾನ ಬಿಡುಗಡೆ ಮಾಡುವಂತೆ ಸರ್ಕಾರ ಆದೇಶ ಹೊರಡಿಸಬೇಕು. ಅಲ್ಲದೆ, ಅನುದಾನ ಪ್ರತಿ ವರ್ಷವೂ ಬೆಳಗಾವಿ ಜಿಲ್ಲಾಡಳಿತಕ್ಕೆ ಲಭ್ಯವಾಗುವಂತೆ ಅಧಿಕೃತ ಗೆಜೆಟ್ ಅಧಿಸೂಚನೆ ಹೊರಡಿಸಬೇಕು ಎಂದು ಒತ್ತಾಯಿಸಿದ್ದಾರೆ.
ಮಹದಾಯಿ ಯೋಜನೆ ಜಾರಿಗೆ ಸರ್ವಪಕ್ಷ ನಿಯೋಗ ಕೊಂಡೊಯ್ಯಲಿ
ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕದ ಜೀವನಾಡಿಯಾಗಿರುವ ಕಳಸಾ-ಬಂಡೂರಿ ಹಾಗೂ ಮಹದಾಯಿ ಯೋಜನೆಗಳ ಅನುಷ್ಠಾನಕ್ಕೆ ಅಗತ್ಯ ಅನುಮತಿಗಳನ್ನು ಪಡೆಯಲು ರಾಜ್ಯ ಸರ್ಕಾರ ತಕ್ಷಣ ಸರ್ವಪಕ್ಷಗಳ ನಿಯೋಗವನ್ನು ಕೇಂದ್ರ ಸರ್ಕಾರದ ಬಳಿಗೆ ಕೊಂಡೊಯ್ಯಬೇಕು. ಕೇಂದ್ರದ ಮೇಲೆ ಒತ್ತಡ ಹೇರಿ ಯೋಜನೆಗಳ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಕಬ್ಬು ಬೆಳೆಯುತ್ತಿದ್ದು, ಸೂಕ್ತ ಬೆಲೆ ಸಿಗದೆ ಸಂಕಷ್ಟ ಎದುರಿಸುತ್ತಿದ್ದಾರೆ. ಕಬ್ಬಿಗೆ ಯೋಗ್ಯ ಬೆಲೆ ದೊರಕಿಸಲು ಸಕ್ಕರೆಯ ಕನಿಷ್ಠ ಮಾರಾಟ ಬೆಲೆ (ಎಂಎಸ್ಪಿ) ಹೆಚ್ಚಿಸುವಂತೆ ಆಗ್ರಹಿಸಿ ರೈತರು ನಿರಂತರ ಹೋರಾಟ ನಡೆಸುತ್ತಿದ್ದಾರೆ. ಸದ್ಯ ರೈತರು ಎಂಎಸ್ಪಿ ಹೆಚ್ಚಳಕ್ಕೆ ಆಗ್ರಹಿಸಿ ಪಾದಯಾತ್ರೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ವಿಚಾರವನ್ನು ಕೇಂದ್ರದ ಗಮನಕ್ಕೆ ತಂದು ರೈತರ ಬೇಡಿಕೆ ಈಡೇರಿಸಲು ಸಹಕರಿಸಬೇಕು ಎಂದು ಕರವೇ ಒತ್ತಾಯಿಸಿದೆ.
ಈ ಸಂದರ್ಭದಲ್ಲಿ ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ, ಸುರೇಶ ಗವನ್ನವರ, ಸತೀಶ ಗುಡದವರ, ಹೊಳ್ಳೆಪ್ಪ ಸುಲದಾಳ, ಅಡಿವೆಪ್ಪ ತಲ್ಲೂರಿ, ರಮೇಶ ಯರಗಣ್ಣವರ, ವಿನಯ ಭೋವಿ, ನಾಗರಾಜ ಲಕ್ಕಪ್ಪಗೋಳ, ಶ್ರೀಧರ ಕುರಬರ ಹಾಗೂ ಕರಣ ಚವ್ಹಾಣ ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ



