*ರಾಜ್ಯದಲ್ಲಿ ಹಿಂಗಾರು ಮಳೆ ಅಬ್ಬರ: ಮುಂದಿನ 7 ದಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಹಿಂಗಾರು ಮಳೆಯ ಪ್ರಭಾವ ಹೆಚ್ಚಾಗುವ ಸಾಧ್ಯತೆಯಿದ್ದು, ಮುಂದಿನ ಏಳು ದಿನಗಳ ಕಾಲ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅಕ್ಟೋಬರ್ 24ರವರೆಗೆ ಕರಾವಳಿ ಮತ್ತು ದಕ್ಷಿಣ ಒಳನಾಡಿನ ವಿವಿಧ ಪ್ರದೇಶಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗುವ ನಿರೀಕ್ಷೆಯಿದೆ. ಅಕ್ಟೋಬರ್ 22ರಿಂದ 24ರವರೆಗೆ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿಯೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಅದರಲ್ಲೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಅಕ್ಟೋಬರ್ 21ರಿಂದ 24ರವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ?
ಅಕ್ಟೋಬರ್ 21ರಂದು ಕೊಡಗು, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿಯೂ ಗುಡುಗು ಸಹಿತ ಮಳೆಯಾಗಬಹುದು.
ಅಕ್ಟೋಬರ್ 22 ಮತ್ತು 23ರಂದು ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಮೈಸೂರು ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗುವ ನಿರೀಕ್ಷೆಯಿದೆ. ಕರಾವಳಿ ಜಿಲ್ಲೆಗಳಲ್ಲಿಯೂ ಮಳೆ ಮುಂದುವರಿಯಲಿದ್ದು, ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಮಳೆಯಾಗಬಹುದು. ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.
ಅಕ್ಟೋಬರ್ 24ರಂದು ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. ಇತರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಇನ್ನು ಅಕ್ಟೋಬರ್ 25 ಮತ್ತು 26ರಂದು ಮಳೆಯ ತೀವ್ರತೆ ಕ್ರಮೇಣ ಇಳಿಕೆಯಾಗುವ ಸಾಧ್ಯತೆಯಿದ್ದು, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಮಾತ್ರ ಹಗುರ ಮಳೆಯಾಗಬಹುದು. ಉಳಿದ ಜಿಲ್ಲೆಗಳಲ್ಲಿ ಬಹುತೇಕ ಒಣಹವೆ ಮುಂದುವರಿಯುವ ನಿರೀಕ್ಷೆಯಿದೆ.
ರಾಜಧಾನಿ ಬೆಂಗಳೂರು ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಮೋಡಕವಿದ ವಾತಾವರಣ ಇರಲಿದೆ. ಸಂಜೆ ಹಾಗೂ ರಾತ್ರಿ ವೇಳೆ ನಗರದ ವಿವಿಧೆಡೆ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಗರಿಷ್ಠ ತಾಪಮಾನ ಸುಮಾರು 30 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿ ಇರಲಿದೆ ಎಂದು ಅಂದಾಜಿಸಲಾಗಿದೆ.
ಸಾರ್ವಜನಿಕರಿಗೆ ಎಚ್ಚರಿಕೆ
ಗುಡುಗು, ಸಿಡಿಲು ಮತ್ತು ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಮಳೆಯ ಸಂದರ್ಭದಲ್ಲಿ ಮರಗಳ ಕೆಳಗೆ ಆಶ್ರಯ ಪಡೆಯುವುದನ್ನು ತಪ್ಪಿಸಬೇಕು.
ರೈತರು ಹಾಗೂ ಹೊರಾಂಗಣದಲ್ಲಿ ಕೆಲಸ ಮಾಡುವವರು ಸಿಡಿಲಿನ ಅಪಾಯದ ಬಗ್ಗೆ ಜಾಗರೂಕರಾಗಿದ್ದು, ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ಸಲಹೆ ನೀಡಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




