Kannada NewsKarnataka NewsLatestPolitics

*ಸ್ಟಿಂಗ್ ಆಪರೇಷನ್ ವಿವಾದ*: *ಪ್ರಕರಣ ನಿಭಾಯಿಸಿದ ರೀತಿಗೆ ಕಾಂಗ್ರೆಸ್ ಹೈಕಮಾಂಡ್ ಅಸಮಾಧಾನ!*

ಪ್ರಗತಿವಾಹಿನಿ ಸುದ್ದಿ: ಸಿದ್ದರಾಮಯ್ಯ ಕುರಿತ ಸ್ಟಿಂಗ್ ಆಪರೇಷನ್ ವಿವಾದ ರಾಜ್ಯ ರಾಜಕಾರಣದಲ್ಲಿ ತೀವ್ರ ಸ್ವರೂಪ ಪಡೆದುಕೊಂಡ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ಮಧ್ಯಪ್ರವೇಶಿಸಿದೆ. ದೆಹಲಿಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಜೊತೆ ಚರ್ಚೆ ನಡೆಸಿ, ಪ್ರಕರಣದ ಸಂಪೂರ್ಣ ಮಾಹಿತಿ ಪಡೆದುಕೊಂಡಿದೆ.

ಸ್ಟಿಂಗ್ ಆಪರೇಷನ್ ಪ್ರಕರಣವನ್ನು ರಾಜ್ಯದಲ್ಲಿ ನಿಭಾಯಿಸಿದ ರೀತಿಯ ಬಗ್ಗೆ ಹೈಕಮಾಂಡ್ ಅಸಮಾಧಾನ ವ್ಯಕ್ತಪಡಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಂಬಂಧಿಸಿದ ವಿಡಿಯೋ ವಿವಾದ ರಾಜಕೀಯ ಕೋಲಾಹಲ ಸೃಷ್ಟಿಸಿತ್ತು. ಈ ವಿಡಿಯೋ ಪ್ರಸಾರಕ್ಕೆ ತಡೆಯಾಜ್ಞೆ ಪಡೆದಿದ್ದ ಸಿದ್ದರಾಮಯ್ಯ, ತಮ್ಮ ವರ್ಚಸ್ಸಿಗೆ ಧಕ್ಕೆ ತರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದರು.

ಈ ಪ್ರಕರಣವನ್ನು ಮುಂದಿಟ್ಟುಕೊಂಡು ವಿರೋಧ ಪಕ್ಷಗಳು ಕಾಂಗ್ರೆಸ್ ಸರ್ಕಾರದ ವಿರುದ್ಧ ನಿರಂತರ ವಾಗ್ದಾಳಿ ನಡೆಸುತ್ತಿವೆ. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಸ್ಟಿಂಗ್ ಆಪರೇಷನ್ ಹಿಂದೆ ಡಿ.ಕೆ. ಶಿವಕುಮಾರ್ ಕೈವಾಡವಿದೆ ಎಂದು ಆರೋಪಿಸಿದ್ದಾರೆ. ಆದರೆ, ಕಾಂಗ್ರೆಸ್ ನಾಯಕರು ಈ ಆರೋಪವನ್ನು ನಿರಾಕರಿಸಿದ್ದಾರೆ. ಮತ್ತೊಂದೆಡೆ, ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಇದೆ ಎಂದು ಬಿಂಬಿಸುವ ಪ್ರಯತ್ನಗಳೂ ನಡೆಯುತ್ತಿವೆ.

ಈ ಬೆಳವಣಿಗೆಗಳು ರಾಜ್ಯ ಕಾಂಗ್ರೆಸ್ ಮತ್ತು ಸರ್ಕಾರಕ್ಕೆ ರಾಷ್ಟ್ರಮಟ್ಟದಲ್ಲಿ ಮುಜುಗರ ಉಂಟುಮಾಡಿವೆ ಎಂಬ ಚರ್ಚೆ ನಡೆಯುತ್ತಿದೆ. ಇದೇ ಹಿನ್ನೆಲೆಯಲ್ಲಿ ಗುರುವಾರ ದೆಹಲಿಯಲ್ಲಿ ಡಿ.ಕೆ. ಶಿವಕುಮಾರ್ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಪ್ರಕರಣದ ಬೆಳವಣಿಗೆಗಳು, ತನಿಖೆಯ ಸ್ಥಿತಿ ಮತ್ತು ರಾಜಕೀಯ ಪರಿಣಾಮಗಳ ಕುರಿತು ನಾಯಕರು ಸುದೀರ್ಘವಾಗಿ ಮಾಹಿತಿ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಸ್ಟಿಂಗ್ ಆಪರೇಷನ್ ಪ್ರಕರಣವನ್ನು ನಿಭಾಯಿಸಿದ ರೀತಿಯ ಬಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರಕರಣದಿಂದ ಪಕ್ಷಕ್ಕೆ ರಾಷ್ಟ್ರಮಟ್ಟದಲ್ಲಿ ಮುಜುಗರ ಉಂಟಾಗಿರುವುದರಿಂದ, ಇದನ್ನು ಇನ್ನಷ್ಟು ಸಮರ್ಥವಾಗಿ ನಿಭಾಯಿಸಬೇಕಿತ್ತು ಎಂಬ ಅಭಿಪ್ರಾಯವನ್ನು ಹೈಕಮಾಂಡ್ ನಾಯಕರು ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ.

ಇನ್ನೊಂದೆಡೆ, ಎಚ್.ಡಿ. ಕುಮಾರಸ್ವಾಮಿ ಈ ವಿವಾದವನ್ನು ಮುಂದುವರಿಸುವ ಸಾಧ್ಯತೆ ಇರುವುದರಿಂದ ಪ್ರಕರಣದ ರಾಜಕೀಯ ಕಾವು ಸದ್ಯಕ್ಕೆ ಕಡಿಮೆಯಾಗುವ ಲಕ್ಷಣಗಳು ಕಾಣಿಸುತ್ತಿಲ್ಲ. ಹೈಕಮಾಂಡ್ ಅಸಮಾಧಾನದ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕತ್ವ ಮುಂದಿನ ದಿನಗಳಲ್ಲಿ ಯಾವ ರೀತಿಯ ಕ್ರಮ ಕೈಗೊಳ್ಳಲಿದೆ ಎಂಬ ಕುತೂಹಲ ಹೆಚ್ಚಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button