Kannada NewsKarnataka NewsLatest

*ಕರ್ನಾಟಕದಲ್ಲಿ ಹಿಂಗಾರು ಮಳೆ*: *ಇಂದು ಹಲವು ಜಿಲ್ಲೆಗಳಲ್ಲಿ ವರುಣನ ಅಬ್ಬರ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಹಿಂಗಾರು ಮಳೆ ಚುರುಕುಗೊಂಡಿದ್ದು, ಸಿಡಿಲು ಬಡಿದು ಕುರಿಗಾಹಿಯೊಬ್ಬರು ಮೃತಪಟ್ಟಿದ್ದಾರೆ. ಮತ್ತೊಂದೆಡೆ, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದ್ದು, ರಸ್ತೆಗಳು ಜಲಾವೃತಗೊಂಡು ವಾಹನ ಸಂಚಾರಕ್ಕೂ ಅಡಚಣೆ ಉಂಟಾಗಿದೆ. ಮುಂದಿನ ದಿನಗಳಲ್ಲಿಯೂ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಗದಗ ತಾಲೂಕಿನ ಚಿಕ್ಕಹಂದಿಗೋಳ ಗ್ರಾಮದ ಹೊರವಲಯದಲ್ಲಿ ಸಿಡಿಲು ಬಡಿದು 44 ವರ್ಷದ ಕುರಿಗಾಹಿ ಮಾಬುಸಾಬ್ ಮುಲ್ಲಾನವರ್ ಮೃತಪಟ್ಟಿದ್ದಾರೆ. ಈ ಘಟನೆಯಲ್ಲಿ ಐದು ಕುರಿಗಳೂ ಸಾವನ್ನಪ್ಪಿವೆ. ಇನ್ನು ಮೂಲ್ಕಿ ಸಮೀಪದ ಅತ್ತೂರು ಬಳಿ ಮನೆಗೆ ಸಿಡಿಲು ಬಡಿದು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಹಲವು ಭಾಗಗಳಲ್ಲಿ ಶುಕ್ರವಾರ ಅಪರಾಹ್ನ ಧಾರಾಕಾರ ಮಳೆಯಾಗಿದೆ. ಉಪ್ಪಿನಂಗಡಿ ಸಮೀಪ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬೆದ್ರೋಡಿಯಿಂದ ಕಾಂಚನ ಕ್ರಾಸ್‌ವರೆಗಿನ ಪ್ರದೇಶ ಜಲಾವೃತಗೊಂಡು ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪುತ್ತೂರು ತಾಲೂಕಿನ ಕೌಡಿಚ್ಚಾರ್ ಬಳಿ ಬೃಹತ್ ಮರವೊಂದು ರಸ್ತೆಗೆ ಉರುಳಿಬಿದ್ದ ಪರಿಣಾಮ ಸುಮಾರು ಎರಡು ಗಂಟೆಗಳ ಕಾಲ ಸಂಚಾರ ಸ್ಥಗಿತಗೊಂಡಿತ್ತು.

ಶಿವಮೊಗ್ಗ, ಧಾರವಾಡ, ಹಾವೇರಿ, ಗದಗ, ಬಳ್ಳಾರಿ, ಉತ್ತರ ಕನ್ನಡ, ವಿಜಯನಗರ ಮತ್ತು ಕೊಪ್ಪಳ ಸೇರಿದಂತೆ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿಯೂ ಭಾರಿ ಮಳೆಯಾಗಿದೆ. ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿಯ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಿದ್ದು, ಶನಿವಾರವೂ ಕೆಲವು ಪ್ರದೇಶಗಳಲ್ಲಿ ಮಳೆ ಮುಂದುವರಿಯುವ ಮುನ್ಸೂಚನೆ ಇದೆ.

ಇಂದು ರಾಮನಗರ ಮತ್ತು ಚಾಮರಾಜನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಮಂಡ್ಯ, ಮೈಸೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಶಿವಮೊಗ್ಗ, ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡು, ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಅಕ್ಟೋಬರ್ 29ರವರೆಗೂ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಅಕ್ಟೋಬರ್ 23ರ ಬೆಳಗ್ಗೆ 8.30ಕ್ಕೆ ಮುಕ್ತಾಯಗೊಂಡ 24 ಗಂಟೆಗಳ ಅವಧಿಯಲ್ಲಿ ಕುಂದಾಪುರದಲ್ಲಿ ಅತಿ ಹೆಚ್ಚು 6 ಸೆಂ.ಮೀ ಮಳೆಯಾಗಿದೆ. ತರೀಕೆರೆಯಲ್ಲಿ 5 ಸೆಂ.ಮೀ, ಕೊಣನೂರು, ಚಿಂತಾಮಣಿ, ಹೊನಕೆರೆ, ಚಿಕ್ಕಬಳ್ಳಾಪುರ, ಪೊನ್ನಂಪೇಟೆ, ಧರ್ಮಸ್ಥಳ, ಸುಬ್ರಹ್ಮಣ್ಯ ಮತ್ತು ಬ್ರಹ್ಮಾವರದಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ. ಬಂಟ್ವಾಳ, ಸಿದ್ದಾಪುರ, ಕೊಲ್ಲೂರು, ಮಂಗಳೂರು, ಮಂಕಿ, ಬೆಂಗಳೂರು ನಗರ, ತಿಪಟೂರು, ಎನ್.ಆರ್.ಪುರ, ಕಳಸ ಮತ್ತು ಮಧುಗಿರಿಯಲ್ಲಿ ತಲಾ 2 ಸೆಂ.ಮೀ ಮಳೆ ದಾಖಲಾಗಿದೆ.

ಇತ್ತ ರಾಜಧಾನಿ ಬೆಂಗಳೂರಿನಲ್ಲೂ ಬೆಳಗ್ಗೆಯಿಂದಲೇ ಜಿಟಿಜಿಟಿ ಮಳೆ ಸುರಿಯುತ್ತಿದೆ. ಮೆಜೆಸ್ಟಿಕ್, ಮಲ್ಲೇಶ್ವರಂ, ಹೆಬ್ಬಾಳ, ಯಶವಂತಪುರ, ವಿಧಾನಸೌಧ, ಆರ್.ಟಿ.ನಗರ, ಶಿವಾಜಿನಗರ ಮತ್ತು ಬಸವನಗುಡಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮಳೆಯಾಗಿದೆ. ಮುಂದಿನ ಕೆಲವು ದಿನಗಳ ಕಾಲ ಮೋಡ ಕವಿದ ವಾತಾವರಣದೊಂದಿಗೆ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಕರಾವಳಿ ಭಾಗದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button