CrimeKannada NewsKarnataka NewsLatest

*ಉದ್ಯಮಿಗಳಿಗೆ ಕೊಲೆ ಬೆದರಿಕೆ ಪ್ರಕರಣ*: *ಭೂಗತ ಪಾತಕಿಗೆ ಮಾಹಿತಿ ನೀಡುತ್ತಿದ್ದ ಆರೋಪಿ ಬಂಧನ*

ಪ್ರಗತಿವಾಹಿನಿ ಸುದ್ದಿ: ಉದ್ಯಮಿಗಳು ಮತ್ತು ಗಣ್ಯ ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡು ಕೋಟ್ಯಂತರ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟು, ಹಣ ನೀಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಎರ್ಮಾಳು ಬಡಾ ಗ್ರಾಮದ ಬಟ್ರತೋಟ ಹೌಸ್‌ನ ಸುರೇಶ್ ಅಮೀನ್ (38) ಬಂಧಿತ ಆರೋಪಿ.

ಭೂಗತ ಪಾತಕಿ ಹೇಮಂತ್ ಪೂಜಾರಿಗೆ ಬೆದರಿಕೆಗೆ ಒಳಗಾದ ಉದ್ಯಮಿಗಳು ಮತ್ತು ಗಣ್ಯ ವ್ಯಕ್ತಿಗಳ ಮೊಬೈಲ್ ಸಂಖ್ಯೆಗಳು ಹಾಗೂ ಇತರ ಮಾಹಿತಿಗಳನ್ನು ಸುರೇಶ್ ಅಮೀನ್ ಒದಗಿಸುತ್ತಿದ್ದ ಎಂಬ ಆರೋಪ ಕೇಳಿಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಐದು, ಶಿರ್ವ ಠಾಣೆಯಲ್ಲಿ ಒಂದು, ಕಾಪು ಠಾಣೆಯಲ್ಲಿ ಒಂದು ಮತ್ತು ಮಣಿಪಾಲ ಠಾಣೆಯಲ್ಲಿ ಒಂದು ಪ್ರಕರಣ ಸೇರಿದಂತೆ ಒಟ್ಟು ಎಂಟು ಪ್ರಕರಣಗಳು ದಾಖಲಾಗಿವೆ.

ದಾಖಲಾಗಿರುವ ಪ್ರಕರಣಗಳ ಪೈಕಿ ಒಂದರಲ್ಲಿ ಉದ್ಯಮಿಯೊಬ್ಬರು ಬೇಡಿಕೆಯಿಟ್ಟ ಹಣ ನೀಡಿರಲಿಲ್ಲ. ದೂರವಾಣಿ ಕರೆಗಳಿಗೂ ಪ್ರತಿಕ್ರಿಯಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಉದ್ಯಮಿಯನ್ನು ಕೊಲೆ ಮಾಡಲು ಹೇಮಂತ್ ಪೂಜಾರಿ ಮತ್ತು ಸುರೇಶ್ ಅಮೀನ್ ಸಂಚು ರೂಪಿಸಿದ್ದರು ಎಂಬುದು ತಾಂತ್ರಿಕ ಸಾಕ್ಷ್ಯಗಳ ಮೂಲಕ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕೃತ್ಯಕ್ಕೆ ಸಂಬಂಧಿಸಿದಂತೆ ಹೇಮಂತ್ ಪೂಜಾರಿ, ಸುರೇಶ್ ಅಮೀನ್‌ಗೆ ಐದು ಲಕ್ಷ ರೂಪಾಯಿ ಕಳುಹಿಸಿದ್ದ ಎನ್ನಲಾಗಿದೆ. ಈ ಪೈಕಿ ಖರ್ಚು ಮಾಡಿದ ಹಣವನ್ನು ಹೊರತುಪಡಿಸಿ ಉಳಿದ 4.13 ಲಕ್ಷ ರೂಪಾಯಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಆರೋಪಿಯನ್ನು ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ನಂತರ ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ಮುಂದುವರಿಸಲಾಗಿದೆ. ಪ್ರಕರಣದಲ್ಲಿ ಇನ್ನಷ್ಟು ವ್ಯಕ್ತಿಗಳು ಭಾಗಿಯಾಗಿರುವ ಸಾಧ್ಯತೆಯಿರುವುದರಿಂದ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button