
ಪ್ರಗತಿವಾಹಿನಿ ಸುದ್ದಿ: ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮುನಿರಾಜು (40) ಮತ್ತು ರೇಣುಕಾ (35) ಮೃತ ದಂಪತಿ. ಬೈಕ್ಗೆ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ನಲ್ಲಿದ್ದ ರೇಣುಕಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಮುನಿರಾಜು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದಾಬಸ್ಪೇಟೆ-ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ದಂಪತಿ ದೇವನಹಳ್ಳಿಯಲ್ಲಿ ವಾಸವಾಗಿದ್ದರು. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹುಲುಕುಂಟೆ ಸಮೀಪದ ಅಂಬಲಗೆರೆ ಗ್ರಾಮದ ರೇಣುಕಾ ಅವರ ತವರು ಮನೆಗೆ ತೆರಳಿ, ಅಲ್ಲಿಂದ ದಂಪತಿ ದ್ವಿಚಕ್ರ ವಾಹನದಲ್ಲಿ ದೇವನಹಳ್ಳಿಗೆ ಮರಳುತ್ತಿದ್ದಾಗ ಈ ದುರಂತ ಸಂಭವಿಸಿದೆ.
ಮೃತ ದಂಪತಿಗೆ ಇಬ್ಬರು ಮಕ್ಕಳಿದ್ದು, ತಂದೆ-ತಾಯಿಯನ್ನು ಕಳೆದುಕೊಂಡ ಮಕ್ಕಳ ಆಕ್ರಂದನ ಮುಗಿಲು ಮುಟ್ಟಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




