*ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವರಿಂದ ಮುಖ್ಯ ಮಾಹಿತಿ*: *ಎಲ್ಲಾ ಗೊಂದಲಗಳಿಗೆ ತೆರೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳ ಕುರಿತು ಉಂಟಾಗಿದ್ದ ಎಲ್ಲಾ ಗೊಂದಲಗಳಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತೆರೆ ಎಳೆದಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಸಚಿವರು, ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮುಂದೂಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಈಗಾಗಲೇ ಪ್ರಕಟಿಸಿರುವ ತಾತ್ಕಾಲಿಕ ವೇಳಾಪಟ್ಟಿಯ ಪ್ರಕಾರವೇ ಪರೀಕ್ಷೆಗಳನ್ನು ನಡೆಸಲಾಗುವುದು. ಶೀಘ್ರದಲ್ಲೇ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಜನಗಣತಿ ಕಾರ್ಯಾಚರಣೆ ನಿರ್ದೇಶನಾಲಯವು ಪರೀಕ್ಷೆಗಳ ವೇಳಾಪಟ್ಟಿಗೆ ಸಂಬಂಧಿಸಿದಂತೆ ಬರೆದಿರುವ ಪತ್ರದ ಹಿನ್ನೆಲೆಯಲ್ಲಿ ಪರೀಕ್ಷೆಗಳನ್ನು ಮುಂದೂಡಲಾಗುತ್ತದೆ ಎಂಬ ಚರ್ಚೆಗಳು ನಡೆಯುತ್ತಿರುವ ಸಂದರ್ಭದಲ್ಲಿ ಸಚಿವರು ಈ ಸ್ಪಷ್ಟನೆ ನೀಡಿದ್ದಾರೆ.
ವಿದ್ಯಾರ್ಥಿಗಳ ಭವಿಷ್ಯ, ಶೈಕ್ಷಣಿಕ ವೇಳಾಪಟ್ಟಿ ಹಾಗೂ ಉನ್ನತ ಶಿಕ್ಷಣ ಪ್ರವೇಶ ಪ್ರಕ್ರಿಯೆಗಳನ್ನು ಗಮನದಲ್ಲಿಟ್ಟುಕೊಂಡು ನಿಗದಿತ ಸಮಯದಲ್ಲೇ ಪರೀಕ್ಷೆ ನಡೆಸಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.
ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿಯನ್ನು ಈಗಾಗಲೇ ಪ್ರಕಟಿಸಲಾಗಿದೆ. ವೇಳಾಪಟ್ಟಿಗೆ ಸಂಬಂಧಿಸಿದಂತೆ ಸಲಹೆ ಹಾಗೂ ಆಕ್ಷೇಪಣೆಗಳನ್ನು ಸಲ್ಲಿಸಲು ನೀಡಿದ್ದ ಕಾಲಾವಕಾಶವೂ ಮುಗಿದಿದೆ.
ಈ ಹಿನ್ನೆಲೆಯಲ್ಲಿ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಮುಂದಿನ ಕ್ರಮಗಳನ್ನು ಕೈಗೊಂಡಿದ್ದು, ಶೀಘ್ರದಲ್ಲೇ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಿದೆ ಎಂದು ಸಚಿವರು ತಿಳಿಸಿದ್ದಾರೆ.
ಅಂತಿಮ ವೇಳಾಪಟ್ಟಿ ಪ್ರಕಟವಾದ ಬಳಿಕ ವಿದ್ಯಾರ್ಥಿಗಳು ಪರೀಕ್ಷಾ ದಿನಾಂಕಗಳು, ವಿಷಯವಾರು ಪರೀಕ್ಷೆಯ ಸಮಯ ಹಾಗೂ ಇತರ ಸೂಚನೆಗಳನ್ನು ಪರಿಶೀಲಿಸಿಕೊಳ್ಳಬೇಕು. ವಿದ್ಯಾರ್ಥಿಗಳು ಮತ್ತು ಪೋಷಕರು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ದೃಢೀಕರಿಸದ ಮಾಹಿತಿಯನ್ನು ನಂಬದೆ, ಶಿಕ್ಷಣ ಇಲಾಖೆಯ ಅಧಿಕೃತ ಪ್ರಕಟಣೆಗಳನ್ನು ಗಮನಿಸಬೇಕು ಎಂದು ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




