
ಪ್ರಗತಿವಾಹಿನಿ ಸುದ್ದಿ: ಸಂಸತ್ ಭವನದ ನಾರ್ತ್ ಬ್ಲಾಕ್ನಲ್ಲಿ ಭೀಕರ ಬೆಂಕಿ ಅವಘಡ ಸಂಭವಿಸಿದೆ. ಇದರಿಂದಾಗಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಕಟ್ಟಡದಲ್ಲಿ ನವೀಕರಣ ಕಾಮಗಾರಿ ನಡೆಯುತ್ತಿದ್ದ ಸಂದರ್ಭದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಪ್ರಾಥಮಿಕ ವರದಿಗಳ ಪ್ರಕಾರ, ವೆಲ್ಡಿಂಗ್ ಕಾರ್ಯದ ವೇಳೆ ಉಂಟಾದ ಶಾರ್ಟ್ ಸರ್ಕ್ಯೂಟ್ನಿಂದ ಕಿಡಿ ಹಾರಿ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ದಟ್ಟವಾದ ಹೊಗೆ ಆವರಿಸಿಕೊಂಡಿದ್ದು, ಇದು ಕೆಲಕಾಲ ಅಲ್ಲಿದ್ದವರಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿತ್ತು.
ಆಕಾಶದಲ್ಲಿ ಕಾಣಿಸಿಕೊಂಡ ದಟ್ಟ ಹೊಗೆಯಿಂದಾಗಿ ಪರಿಸ್ಥಿತಿ ಗಂಭೀರವಾಗಿತ್ತು. ತಕ್ಷಣವೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದ್ದು, ಘಟನಾ ಸ್ಥಳಕ್ಕೆ ಆರು ಅಗ್ನಿಶಾಮಕ ವಾಹನಗಳು ಧಾವಿಸಿವೆ. ಅಗ್ನಿಶಾಮಕ ದಳದ ಸಿಬ್ಬಂದಿಗಳು ಕೂಡಲೇ ಬೆಂಕಿ ನಂದಿಸುವ ಕಾರ್ಯಾಚರಣೆಯನ್ನು ಆರಂಭಿಸಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಶ್ರಮಿಸುತ್ತಿದ್ದಾರೆ.
ನವೀಕರಣ ಕಾರ್ಯದ ವೇಳೆ ಉಂಟಾದ ಈ ಅಗ್ನಿ ಅವಘಡದಿಂದ ಯಾವುದೇ ದೊಡ್ಡ ಪ್ರಮಾಣದ ಹಾನಿ ಅಥವಾ ಪ್ರಾಣಾಪಾಯ ಸಂಭವಿಸಿದ ಬಗ್ಗೆ ಇದುವರೆಗೆ ವರದಿಯಾಗಿಲ್ಲ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




