EducationKarnataka NewsLatest

*ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಹಾಗೂ ಶಾಲಾ ಮುಖ್ಯಸ್ಥರಿಗೆ KSEAB ಮಹತ್ವದ ಸೂಚನೆ*

ಪ್ರಗತಿವಾಹಿನಿ ಸುದ್ದಿ: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಹಾಗೂ ಶಾಲಾ ಮುಖ್ಯಸ್ಥರಿಗೆ KSEAB ಮಹತ್ವದ ಸೂಚನೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) ಮಹತ್ವದ ಸೂಚನೆ ನೀಡಿದೆ.

2026-27ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ಕ್ಕೆ ಸಿದ್ಧತೆ ನಡೆಸುತ್ತಿರುವ ವಿದ್ಯಾರ್ಥಿಗಳು ಹಾಗೂ ಶಾಲಾ ಮುಖ್ಯಸ್ಥರಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಪರೀಕ್ಷಾ ನೋಂಡಣಿ ವಿಚಾಅರವಾಗಿ ಸೂಚನೆ ನೀಡಿದೆ.

2027ರ ಮಾರ್ಚ್‌/ಏಪ್ರಿಲ್‌ನಲ್ಲಿ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ಕ್ಕೆ ಶಾಲಾ ವಿದ್ಯಾರ್ಥಿಗಳ ನೋಂದಣಿ, ಪರೀಕ್ಷಾ ಶುಲ್ಕ ಪಾವತಿ, ಅಗತ್ಯ ದಾಖಲೆಗಳು ಹಾಗೂ ವಿಶೇಷ ಚೇತನ ವಿದ್ಯಾರ್ಥಿಗಳಿಗೆ ನೀಡಲಾಗುವ ಸೌಲಭ್ಯಗಳ ಕುರಿತು ಮಂಡಳಿಯು ಮಾರ್ಗಸೂಚಿ ಪ್ರಕಟಿಸಿದೆ.

ಅಕ್ಟೋಬರ್ 9, 2026ರಿಂದ ವಿದ್ಯಾರ್ಥಿಗಳ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು, ನವೆಂಬರ್ 11, 2026 ನೋಂದಣಿಗೆ ಕೊನೆಯ ದಿನವಾಗಿದೆ. ಶಾಲಾ ಮುಖ್ಯಸ್ಥರು ನಿಗದಿತ ಅವಧಿಯೊಳಗೆ ವಿದ್ಯಾರ್ಥಿಗಳ ವಿವರಗಳನ್ನು ಮಂಡಳಿಯ ಅಧಿಕೃತ ಜಾಲತಾಣದಲ್ಲಿ ಅಪ್‌ಲೋಡ್ ಮಾಡಬೇಕು.

ಪ್ರಥಮ ಬಾರಿಗೆ ಪರೀಕ್ಷೆ ಬರೆಯುವ ಸಾಮಾನ್ಯ ಶಾಲಾ ಅಭ್ಯರ್ಥಿಗಳಿಗೆ ಪ್ರತಿ ವಿದ್ಯಾರ್ಥಿಗೆ ₹746 ಪರೀಕ್ಷಾ ಶುಲ್ಕ ನಿಗದಿಪಡಿಸಲಾಗಿದೆ. ಎಸ್‌ಸಿ, ಎಸ್‌ಟಿ ಸೇರಿದಂತೆ ನಿಯಮಾನುಸಾರ ಅರ್ಹ ವಿದ್ಯಾರ್ಥಿಗಳಿಗೆ ಶುಲ್ಕ ವಿನಾಯಿತಿಯೂ ಇರಲಿದೆ.

2026-27ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಹಾಗೂ ಸರ್ಕಾರದಿಂದ ಮಾನ್ಯತೆ ಪಡೆದ ಅನುದಾನಿತ ಮತ್ತು ಅನುದಾನರಹಿತ ಪ್ರೌಢಶಾಲೆಗಳಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳನ್ನು ಶಾಲಾ ಅಭ್ಯರ್ಥಿಗಳು ಎಂದು ಪರಿಗಣಿಸಲಾಗುತ್ತದೆ.

ಈ ಅಭ್ಯರ್ಥಿಗಳ ವರ್ಗವನ್ನು CCERF (Continuous and Comprehensive Evaluation Regular Fresher) ಎಂದು ಗುರುತಿಸಲಾಗಿದೆ.

ವಿದ್ಯಾರ್ಥಿಗಳ ನೋಂದಣಿಯನ್ನು ಶಾಲಾ ಮುಖ್ಯಸ್ಥರು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಅಧಿಕೃತ ಜಾಲತಾಣದ ಮೂಲಕವೇ ಮಾಡಬೇಕು.

ಅಧಿಕೃತ ಜಾಲತಾಣ: kseab.karnataka.gov.in

ಖಾಸಗಿ ಅಭ್ಯರ್ಥಿಗಳು (CCEPF), ಖಾಸಗಿ ಪುನರಾವರ್ತಿತ ಅಭ್ಯರ್ಥಿಗಳು (CCEPR) ಹಾಗೂ ಶಾಲಾ ಪುನರಾವರ್ತಿತ ಅಭ್ಯರ್ಥಿಗಳು (CCERR) ನೇರವಾಗಿ ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಲು ಅವಕಾಶವಿದೆ. ಇವರಿಗಾಗಿ ಪ್ರತ್ಯೇಕ ಮಾರ್ಗಸೂಚಿ ಪ್ರಕಟಿಸಲಾಗಿದೆ.

2027ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ಕ್ಕೆ ಪ್ರಥಮ ಬಾರಿಗೆ ಪರೀಕ್ಷೆ ಬರೆಯುವ ಶಾಲಾ ಅಭ್ಯರ್ಥಿಗಳಿಗೆ ಪ್ರತಿ ವಿದ್ಯಾರ್ಥಿಗೆ ₹746 ಶುಲ್ಕ ನಿಗದಿಪಡಿಸಲಾಗಿದೆ.

ಶಾಲಾ ಲಾಗಿನ್ ಮೂಲಕ ನೋಂದಣಿ ಪ್ರಕ್ರಿಯೆ ಪೂರ್ಣಗೊಂಡ ನಂತರ ಪರೀಕ್ಷಾ ಶುಲ್ಕ ಪಾವತಿಸಲು ಆನ್‌ಲೈನ್ ಚಲನ್ ಸೃಜಿಸಲಾಗುತ್ತದೆ. ಈ ಚಲನ್ ಡೌನ್‌ಲೋಡ್ ಮಾಡಿಕೊಂಡು ಅದರಲ್ಲಿ ನಮೂದಿಸಿರುವ ಮೊತ್ತವನ್ನು ಬ್ಯಾಂಕ್‌ನಲ್ಲಿ ಪಾವತಿಸಬೇಕು.

ಗಮನಿಸಿ: ಮಂಡಳಿ ಸೂಚಿಸಿರುವ ಚಲನ್ ಹೊರತುಪಡಿಸಿ ಕೈಯಾರೆ ಭರ್ತಿ ಮಾಡಿದ (Manual) ಚಲನ್ ಮೂಲಕ ಪರೀಕ್ಷಾ ಶುಲ್ಕ ಪಾವತಿಸಬಾರದು.

ಮಂಡಳಿಯ ಮಾರ್ಗಸೂಚಿಯ ಪ್ರಕಾರ, ಅರ್ಹತಾ ನಿಯಮಗಳನ್ನು ಪೂರೈಸುವ ವಿದ್ಯಾರ್ಥಿಗಳಿಗೆ ಪರೀಕ್ಷಾ ಶುಲ್ಕ ವಿನಾಯಿತಿ ನೀಡಲಾಗಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ: ನಿಯಮಾನುಸಾರ ಪರೀಕ್ಷಾ ಶುಲ್ಕ ವಿನಾಯಿತಿ ಅನ್ವಯಿಸುತ್ತದೆ. ಪುನರಾವರ್ತಿತ ಅಭ್ಯರ್ಥಿಗಳಿಗೂ ಈ ವಿನಾಯಿತಿ ನೀಡಲಾಗಿದೆ.

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು: ಮೊದಲ ಬಾರಿಗೆ ಪರೀಕ್ಷೆ ಬರೆಯುವ ಅರ್ಹ ವಿದ್ಯಾರ್ಥಿಗಳಿಗೆ ನಿಗದಿತ ವಾರ್ಷಿಕ ಆದಾಯ ಮಿತಿಯೊಳಗೆ ಶುಲ್ಕ ವಿನಾಯಿತಿ ಸಿಗಬಹುದು.

ಸರ್ಕಾರಿ ಶಾಲೆಗಳ ಬಾಲಕಿಯರು: ಸರ್ಕಾರಿ ಪ್ರೌಢಶಾಲೆ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಪ್ರೌಢಶಾಲಾ ವಿಭಾಗದಲ್ಲಿ ಮೊದಲ ಬಾರಿಗೆ ಪರೀಕ್ಷೆ ಬರೆಯುವ ಎಲ್ಲಾ ವರ್ಗಗಳ ಬಾಲಕಿಯರಿಗೆ ನಿಯಮಾನುಸಾರ ಶುಲ್ಕ ವಿನಾಯಿತಿ ಇದೆ.

ವಿಶೇಷ ಚೇತನ ವಿದ್ಯಾರ್ಥಿಗಳು: ಅರ್ಹ ವಿಭಿನ್ನ ಸಾಮರ್ಥ್ಯವುಳ್ಳ ಶಾಲಾ ಹಾಗೂ ಖಾಸಗಿ ಅಭ್ಯರ್ಥಿಗಳಿಗೆ ಪರೀಕ್ಷೆ-1ರ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ಹಿಂದುಳಿದ ವರ್ಗಗಳ ಶುಲ್ಕ ವಿನಾಯಿತಿ ಪಡೆಯಲು ಸಂಬಂಧಿಸಿದ ಜಾತಿ ಮತ್ತು ಆದಾಯ ಪ್ರಮಾಣಪತ್ರಗಳ ಮಾನ್ಯವಾದ ಆರ್‌ಡಿ (RD) ಸಂಖ್ಯೆಯನ್ನು ಶಾಲಾ ಲಾಗಿನ್‌ನಲ್ಲಿ ದಾಖಲಿಸಬೇಕು. ಅಗತ್ಯ ದಾಖಲೆಗಳನ್ನು ಶಾಲೆಯಲ್ಲಿ ಸಂರಕ್ಷಿಸಿಡುವುದು ಮುಖ್ಯ. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಅಧಿಕೃತ ವೆಬ್ ಸೈಟ್ ಸಂಪರ್ಕಿಸಿ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button