*ಬೆಳಗಾವಿಯಲ್ಲಿ ಕಣ್ಣೆದುರೇ ಸುಟ್ಟು ಬೂದಿಯಾದ 15ಕ್ಕೂ ಹೆಚ್ಚು ಎಕರೆ ಕಬ್ಬು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಒಂದೆಡೆ ಕಬ್ಬಿಗೆ ಸೂಕ್ತ ಬೆಲೆ ಹಾಗೂ ಬೆಂಬಲ ಬೆಲೆಗಾಗಿ ರೈತರು ಹೋರಾಟ ನಡೆಸುತ್ತಿದ್ದರೆ, ಮತ್ತೊಂದೆಡೆ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದ ಬೆಂಕಿ ಅವಘಡಕ್ಕೆ 15ಕ್ಕೂ ಹೆಚ್ಚು ಎಕರೆ ಕಬ್ಬಿನ ಬೆಳೆ ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ.
ಶಾರ್ಟ್ ಸರ್ಕ್ಯೂಟ್ನಿಂದ ಕಬ್ಬಿನ ಜಮೀನಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಒಣ ಹವೆಯ ಹಿನ್ನೆಲೆಯಲ್ಲಿ ಬೆಂಕಿ ಕ್ಷಣಾರ್ಧದಲ್ಲಿ ಅಕ್ಕಪಕ್ಕದ ಜಮೀನುಗಳಿಗೂ ವ್ಯಾಪಿಸಿದೆ. ಇದರಿಂದ ಜಮೀನುಗಳಲ್ಲಿ ಬೆಳೆದು ನಿಂತಿದ್ದ ಕಬ್ಬು ಸಂಪೂರ್ಣವಾಗಿ ಸುಟ್ಟು ಹೋಗಿದೆ.
ಸ್ಥಳೀಯ ರೈತರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟರೂ, ಅಷ್ಟರಲ್ಲಾಗಲೇ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಬರಗಾಲದ ನಡುವೆಯೂ ನೀರಿಗಾಗಿ ಪರದಾಡಿ, ಅಪಾರ ಶ್ರಮ ವಹಿಸಿ ಬೆಳೆಸಿದ್ದ ಕಬ್ಬು ಕಣ್ಣೆದುರೇ ಬೆಂಕಿಗಾಹುತಿಯಾಗಿರುವುದು ರೈತರನ್ನು ತೀವ್ರ ಸಂಕಷ್ಟಕ್ಕೆ ದೂಡಿದೆ. ಈಗಾಗಲೇ ಕಬ್ಬಿಗೆ ಸೂಕ್ತ ಬೆಲೆ ಸಿಗದೆ ಹೋರಾಟ ನಡೆಸುತ್ತಿರುವ ರೈತರಿಗೆ ಈ ಘಟನೆ ಮತ್ತೊಂದು ದೊಡ್ಡ ಆಘಾತ ನೀಡಿದೆ.
ವಿದ್ಯುತ್ ಇಲಾಖೆಯ ನಿರ್ಲಕ್ಷ್ಯವೇ ಬೆಂಕಿ ಅವಘಡಕ್ಕೆ ಕಾರಣ ಎಂದು ಆರೋಪಿಸಿರುವ ನೊಂದ ರೈತರು, ಬೆಳೆ ನಷ್ಟದಿಂದ ಕಂಗಾಲಾಗಿದ್ದಾರೆ. ಬೆಂಕಿ ಅವಘಡದಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಕಬ್ಬು ನಾಶವಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಸ್ಥಳ ಪರಿಶೀಲನೆ ನಡೆಸಿ ನಷ್ಟದ ಅಂದಾಜು ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಅಂಕಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಸ್ಕಾಂ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಘಟನೆಗೆ ಕಾರಣವೇನು ಎಂಬುದನ್ನು ಪರಿಶೀಲಿಸುವುದರ ಜತೆಗೆ, ಹಾನಿಗೊಳಗಾದ ರೈತರಿಗೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ರೈತರು ಒತ್ತಾಯಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




