CrimeKannada NewsKarnataka NewsLatest

*ಹಣಕಾಸಿನ ಗಲಾಟೆ ಕೊಲೆಯಲ್ಲಿ ಅಂತ್ಯ*: *ಕಬ್ಬಿಣದ ರಾಡ್‌ನಿಂದ ಹೊಡೆದು ರೌಡಿಶೀಟರ್ ಬರ್ಬರ ಹತ್ಯೆ!*

ಪ್ರಗತಿವಾಹಿನಿ ಸುದ್ದಿ: ಹಣಕಾಸಿನ ವಿಚಾರಕ್ಕೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡಿದೆ. ರೌಡಿಶೀಟರ್ ಸುಜಿತ್ ಪಿಂಟೊ ಎಂಬಾತನನ್ನು ದುಷ್ಕರ್ಮಿಗಳು ಕಬ್ಬಿಣದ ರಾಡ್‌ನಿಂದ ತಲೆಗೆ ಹೊಡೆದು ಹತ್ಯೆ ಮಾಡಿದ್ದಾರೆ. ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ರಿಕ್ಷಾ ಚಾಲಕ ಪ್ರಮೋದ್‌ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಸುಜಿತ್ ಪಿಂಟೊ ಮತ್ತು ರಿಕ್ಷಾ ಚಾಲಕ ಪ್ರಮೋದ್ ನಡುವೆ ಹಣಕಾಸಿನ ವಿಚಾರವಾಗಿ ಗಲಾಟೆ ನಡೆದಿತ್ತು ಎನ್ನಲಾಗಿದೆ. ಸುಜಿತ್ ಪಿಂಟೊ, ಪ್ರಮೋದ್‌ಗೆ ಹಣ ಪಾವತಿಸುವುದು ಬಾಕಿ ಇದ್ದುದೇ ಸಂಘರ್ಷಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಇಬ್ಬರೂ ಮದ್ಯದ ಅಮಲಿನಲ್ಲಿದ್ದಾಗ ಮಾತಿಗೆ ಮಾತು ಬೆಳೆದು ಜಗಳ ತೀವ್ರಗೊಂಡಿದೆ. ಈ ವೇಳೆ ಸಿಟ್ಟಿಗೆದ್ದ ಪ್ರಮೋದ್, ಕಬ್ಬಿಣದ ರಾಡ್‌ನಿಂದ ಸುಜಿತ್ ಪಿಂಟೊ ತಲೆಗೆ ಹೊಡೆದ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ನಡೆದಿದೆ.

ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡ ಸುಜಿತ್ ಪಿಂಟೊ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಘಟನೆ ಕುರಿತು ಮಾಹಿತಿ ಪಡೆದ ಬ್ರಹ್ಮಾವರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಪ್ರಮೋದ್‌ನನ್ನು ವಶಕ್ಕೆ ಪಡೆದು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಕೊಲೆಯಾದ ಸುಜಿತ್ ಪಿಂಟೊ ಹಲವು ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿದ್ದನು. 2018ರಲ್ಲಿ ನಡೆದ ಗುರುಪ್ರಸಾದ್ ಭಟ್ ಕೊಲೆ ಪ್ರಕರಣ ಹಾಗೂ 2020ರಲ್ಲಿ ನಡೆದ ಯೋಗೀಶ್ ಪೂಜಾರಿ ಕೊಲೆ ಪ್ರಕರಣಗಳಲ್ಲಿಯೂ ಸುಜಿತ್ ಪಿಂಟೊ ಹೆಸರು ಕೇಳಿಬಂದಿತ್ತು.

ಹಣಕಾಸಿನ ವಿವಾದದಿಂದ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿರುವುದು ಬ್ರಹ್ಮಾವರದಲ್ಲಿ ಆತಂಕ ಮೂಡಿಸಿದೆ. ಘಟನೆಯ ಸಂಪೂರ್ಣ ಹಿನ್ನೆಲೆ ಮತ್ತು ಕೊಲೆಗೆ ಕಾರಣವಾದ ಪರಿಸ್ಥಿತಿಗಳ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button