*ನವೆಂಬರ್ ಪೂರ್ತಿ ಕನ್ನಡ ಸಿನಿಮಾಗಳೇ ಪ್ರದರ್ಶನವಾಗಲಿ*: *ಕರವೇ ಆಗ್ರಹ, ಸರ್ಕಾರಕ್ಕೆ ಎಚ್ಚರಿಕೆ!*

ಪ್ರಗತಿವಾಹಿನಿ ಸುದ್ದಿ: ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ನವೆಂಬರ್ ತಿಂಗಳಿಡೀ ರಾಜ್ಯದ ಎಲ್ಲ ಚಿತ್ರಮಂದಿರಗಳಲ್ಲಿ ಕನ್ನಡ ಸಿನಿಮಾಗಳನ್ನೇ ಪ್ರದರ್ಶಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹಿಸಿದೆ. ಈ ಕುರಿತು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಬೇಕು ಎಂದು ಕರವೇ ಅಧ್ಯಕ್ಷ ಪ್ರವೀಣ್ ಶೆಟ್ಟಿ ಒತ್ತಾಯಿಸಿದ್ದಾರೆ. ನವೆಂಬರ್ನಲ್ಲಿ ಪರಭಾಷಾ ಸಿನಿಮಾಗಳನ್ನು ಪ್ರದರ್ಶಿಸಿದರೆ ಮುಂದೆ ಸಂಭವಿಸುವ ಅನಾಹುತಗಳಿಗೆ ಸರ್ಕಾರವೇ ಹೊಣೆ ಎಂದು ಎಚ್ಚರಿಕೆ ನೀಡಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡಿರುವ ಪ್ರವೀಣ್ ಶೆಟ್ಟಿ, ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲ ಚಿತ್ರಮಂದಿರಗಳಲ್ಲಿ ತಿಂಗಳ ಪೂರ್ತಿ ಕನ್ನಡ ಸಿನಿಮಾಗಳಿಗೆ ಮಾತ್ರ ಅವಕಾಶ ನೀಡಬೇಕು ಎಂದು ಹೇಳಿದ್ದಾರೆ. ನವೆಂಬರ್ 1ರಂದೇ ಬೆಂಗಳೂರಿನ ಕೆಲವು ಚಿತ್ರಮಂದಿರಗಳಲ್ಲಿ ಅನ್ಯಭಾಷೆಯ ಸಿನಿಮಾಗಳನ್ನು ಪ್ರದರ್ಶಿಸುವ ಮೂಲಕ ಕನ್ನಡ ರಾಜ್ಯೋತ್ಸವಕ್ಕೆ ಅಗೌರವ ತೋರಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಇಂತಹ ಕ್ರಮಗಳನ್ನು ಸಹಿಸುವುದಿಲ್ಲ ಎಂದೂ ಎಚ್ಚರಿಸಿದ್ದಾರೆ.
ಈ ವಿಚಾರದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ರಾಜ್ಯ ಸರ್ಕಾರ ಕೂಡಲೇ ನಿರ್ಧಾರ ಕೈಗೊಳ್ಳಬೇಕು ಎಂದು ಪ್ರವೀಣ್ ಶೆಟ್ಟಿ ಆಗ್ರಹಿಸಿದ್ದಾರೆ. ನವೆಂಬರ್ ತಿಂಗಳಲ್ಲಿ ಪರಭಾಷಾ ಸಿನಿಮಾಗಳ ಪ್ರದರ್ಶನಕ್ಕೆ ವಿರೋಧ ವ್ಯಕ್ತಪಡಿಸುತ್ತಾ ಬಂದಿರುವ ಕರವೇ, ಇದೀಗ ಮತ್ತೊಮ್ಮೆ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ. ಸರ್ಕಾರ ಮತ್ತು ಚಲನಚಿತ್ರ ವಾಣಿಜ್ಯ ಮಂಡಳಿ ಯಾವ ನಿರ್ಧಾರ ಕೈಗೊಳ್ಳಲಿವೆ ಎಂಬುದು ಕುತೂಹಲ ಮೂಡಿಸಿದೆ.
ಪ್ರಸ್ತುತ ರಾಜ್ಯದಲ್ಲಿ ಕನ್ನಡದ ‘ಪ್ರೇಮದ ಊರಲಿ’ ಸಿನಿಮಾ ಉತ್ತಮ ಪ್ರದರ್ಶನ ಕಾಣುತ್ತಿದೆ. ಇದರ ಜತೆಗೆ ಪರಭಾಷೆಯ ‘ಜೈಲರ್ 2’ ಸಿನಿಮಾ ಕೂಡ ಚಿತ್ರಮಂದಿರಗಳಲ್ಲಿ ಪ್ರದರ್ಶನವಾಗುತ್ತಿದೆ. ಅಕ್ಟೋಬರ್ 30ರಂದು ತೆಲುಗಿನ ‘ಆದರ್ಶ ಕುಟುಂಬಂ 47’ ಸಿನಿಮಾ ಬಿಡುಗಡೆಯಾಗಲಿದೆ. ಇನ್ನು ‘ರಣಬಾಲಿ’, ‘ಡೋರ್ತಿ’, ‘ಬತ್ತ’ ಮತ್ತು ‘ಹೈಕು’ ಸೇರಿದಂತೆ ಹಲವು ಸಿನಿಮಾಗಳು ಪ್ರದರ್ಶನ ಕಾಣುತ್ತಿವೆ.
ನವೆಂಬರ್ ತಿಂಗಳಿಡೀ ಕನ್ನಡ ಸಿನಿಮಾಗಳ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಬೇಕೆಂಬ ಕರವೇ ಬೇಡಿಕೆಗೆ ಸರ್ಕಾರ ಸ್ಪಂದಿಸುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




