Karnataka NewsLatestPolitics

*ಸಿದ್ದರಾಮಯ್ಯ ವಿರುದ್ಧದ ಗಣಿಗಾರಿಕೆ ಪ್ರಕರಣ*: *ಪಿಐಎಲ್ ಮರುಸ್ಥಾಪನೆ ಕೋರಿದ್ದ ಅರ್ಜಿ ವಜಾ*

ಪ್ರಗತಿವಾಹಿನಿ ಸುದ್ದಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಕ್ರಮ ಗಣಿಗಾರಿಕೆ ಪರವಾನಗಿ ಮಂಜೂರು ಮತ್ತು ನವೀಕರಣ ಆರೋಪದಡಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ಕೋರಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ ಸಲ್ಲಿಸಲಾಗಿದ್ದ ಮಧ್ಯಂತರ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಈ ಹಿಂದೆ ವಜಾಗೊಂಡಿದ್ದ ಪಿಐಎಲ್‌ ಆದೇಶವನ್ನು ಹಿಂಪಡೆಯುವಂತೆ ಉದ್ಯಮಿ ಎಂ.ಪಿ. ವೇಣುಗೋಪಾಲ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಅನು ಶಿವರಾಮನ್ ನೇತೃತ್ವದ ದ್ವಿಸದಸ್ಯ ಪೀಠ ಮಂಗಳವಾರ ವಿಚಾರಣೆ ನಡೆಸಿ ಈ ತೀರ್ಮಾನ ಕೈಗೊಂಡಿದೆ.

ವಿಚಾರಣೆ ವೇಳೆ ಸರ್ಕಾರದ ಪರ ವಾದ ಮಂಡಿಸಿದ ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ, ಇದೇ ವಿಷಯಕ್ಕೆ ಸಂಬಂಧಿಸಿದಂತೆ ಅರ್ಜಿದಾರರು ಈ ಹಿಂದೆ ಸಲ್ಲಿಸಿದ್ದ ಖಾಸಗಿ ದೂರನ್ನು ವಿಚಾರಣಾ ನ್ಯಾಯಾಲಯ ವಜಾಗೊಳಿಸಿತ್ತು ಎಂದು ತಿಳಿಸಿದರು. ಆದರೂ ಅದೇ ಅಂಶಗಳನ್ನು ಮುಂದಿಟ್ಟುಕೊಂಡು 2025ರ ಏಪ್ರಿಲ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು. ವಿಚಾರಣೆಗೆ ಸತತವಾಗಿ ಗೈರಾಗಿದ್ದ ಕಾರಣ 2025ರ ಸೆಪ್ಟೆಂಬರ್ 19ರಂದು ಹೈಕೋರ್ಟ್ ಪಿಐಎಲ್‌ ವಜಾಗೊಳಿಸಿತ್ತು. ಇದೀಗ ಆ ಆದೇಶವನ್ನು ಹಿಂಪಡೆಯುವಂತೆ ಸಲ್ಲಿಸಿರುವ ಮಧ್ಯಂತರ ಅರ್ಜಿಯನ್ನೂ ವಜಾಗೊಳಿಸಬೇಕು ಎಂದು ಕೋರಿದರು.

ಇನ್ನೊಂದೆಡೆ, ಅರ್ಜಿದಾರರ ಪರ ವಕೀಲರು ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜಿದಾರರಿಂದ ಸೂಕ್ತ ಸ್ಪಂದನೆ ದೊರೆಯುತ್ತಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಹೀಗಾಗಿ ಅರ್ಜಿಯಿಂದ ಹಿಂದೆ ಸರಿಯುವುದಾಗಿ ಮೆಮೊ ಸಲ್ಲಿಸಿದರು. ಇದನ್ನು ಪರಿಗಣಿಸಿದ ನ್ಯಾಯಪೀಠ, ಮಧ್ಯಂತರ ಅರ್ಜಿಯನ್ನು ವಜಾಗೊಳಿಸಿತು.

2015ರಲ್ಲಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಗಣಿ ಮತ್ತು ಖನಿಜ (ಅಭಿವೃದ್ಧಿ ಮತ್ತು ನಿಯಂತ್ರಣ) ಕಾಯ್ದೆಯ ನಿಯಮಗಳನ್ನು ಉಲ್ಲಂಘಿಸಿ ಹಲವು ಕಂಪನಿಗಳಿಗೆ ಅಕ್ರಮವಾಗಿ ಗಣಿಗಾರಿಕೆ ಪರವಾನಗಿ ನೀಡಿದ್ದಾರೆ ಹಾಗೂ ಕೆಲವು ಪರವಾನಗಿಗಳನ್ನು ನವೀಕರಿಸಿದ್ದಾರೆ ಎಂಬುದು ಅರ್ಜಿದಾರರ ಆರೋಪವಾಗಿತ್ತು. ಈ ಆರೋಪಗಳ ಕುರಿತು ತನಿಖೆ ನಡೆಸುವಂತೆ ಅರ್ಜಿಯಲ್ಲಿ ಕೋರಲಾಗಿತ್ತು.

ಭ್ರಷ್ಟಾಚಾರ ತಡೆ ಕಾಯ್ದೆಯಡಿ ಲೋಕಾಯುಕ್ತ ಪೊಲೀಸರಿಂದ ತನಿಖೆ ನಡೆಸಿ ವರದಿ ಪಡೆಯಬೇಕು, ಅಕ್ರಮ ಪರವಾನಗಿಗಳಿಂದ ಸರ್ಕಾರದ ಬೊಕ್ಕಸಕ್ಕೆ ಉಂಟಾಗಿರುವ ನಷ್ಟವನ್ನು ವಸೂಲಿ ಮಾಡಬೇಕು ಹಾಗೂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರಿಗೆ ನಿರ್ದೇಶಿಸಬೇಕು ಎಂದು ಎಂ.ಪಿ. ವೇಣುಗೋಪಾಲ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button