*ನನ್ನ ಹೇಳಿಕೆ ತಪ್ಪಾಗಿ ಅರ್ಥೈಸಲಾಗಿದೆ*: *ಸ್ಪಷ್ಟನೆ ನೀಡಿದ ಸಚಿವ ಸತೀಶ್ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕದಲ್ಲಿ ನಡೆಸಲಾದ ಮತದಾರರ ಪಟ್ಟಿಯ SIR ಪ್ರಕ್ರಿಯೆ ಅತ್ಯಂತ ಸರಿಯಾಗಿ ಮತ್ತು ಪಾರದರ್ಶಕವಾಗಿ ನಡೆದಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸಮರ್ಥಿಸಿಕೊಂಡಿದ್ದಾರೆ ಎಂಬ ಸುದ್ದಿಯಾಗಿತ್ತು. ಸಚಿವರ ಹೇಳಿಕೆ ಭಾರಿ ಚರ್ಚೆಗೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಇದೀಗ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ.
ತಮ್ಮ ಹೇಳಿಕೆ ಬಗ್ಗೆ ವಿವಾದ ಸೃಷ್ಟಿಯಾಗುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಅಲ್ಲದೇ ವಿಡಿಯೋ ಹೇಳಿಕೆ ನೀಡುವ ಮೂಲಕ ತಮ್ಮ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ತಿಳಿಸಿದ್ದಾರೆ.
SIR ಕುರಿತು ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ! SIR ಕುರಿತು ಮಾಧ್ಯಮಗಳ ಮುಂದೆ ನಾನು ನೀಡಿದ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಫಾರಂ–7 ಮೂಲಕ ಕಾಂಗ್ರೆಸ್ ಬೆಂಬಲಿಗ ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ಅಳಿಸುವ ಬಿಜೆಪಿಯ ಷಡ್ಯಂತ್ರವನ್ನು ನಮ್ಮ ರಾಷ್ಟ್ರ ನಾಯಕರಾದ ರಾಹುಲ್ ಗಾಂಧಿ ಅವರ ಹೋರಾಟ ಹಾಗೂ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರ ಮಾರ್ಗದರ್ಶನದಲ್ಲಿ ವಿಫಲಗೊಳಿಸಲಾಗಿದೆ ಎಂಬುದು ನನ್ನ ಹೇಳಿಕೆಯ ಉದ್ದೇಶವಾಗಿತ್ತು. ಆದರೆ, SIR ಪ್ರಕ್ರಿಯೆ ಸರಿಯಾಗಿದೆ ಎಂಬ ಅರ್ಥದಲ್ಲಿ ನಾನು ಹೇಳಿಕೆ ನೀಡಿಲ್ಲ ಎಂದಿದ್ದಾರೆ.
ಕರ್ನಾಟಕದಲ್ಲಿ ಫಾರಂ–7 ಮೂಲಕ ಅರ್ಹ ಮತದಾರರ ಹೆಸರುಗಳನ್ನು ಅಳಿಸುವ ಪ್ರಯತ್ನವನ್ನು ನಾವು ವಿಫಲಗೊಳಿಸಿದ್ದು, ಈ ಹೋರಾಟಕ್ಕೆ ನಮ್ಮ ಬೆಳಗಾವಿ ಜಿಲ್ಲೆಯಿಂದಲೇ ಚಾಲನೆ ನೀಡಿ ಯಶಸ್ವಿಯಾಗಿ ಎದುರಿಸಿದ್ದೇವೆ.
ಅರ್ಹ ಮತದಾರರ ಹಕ್ಕುಗಳನ್ನು ಕಸಿದುಕೊಳ್ಳುವ ಯಾವುದೇ ಪ್ರಯತ್ನದ ವಿರುದ್ಧ ನನ್ನ ನಿಲುವು ಮೊದಲಿನಿಂದಲೂ ದೃಢವಾಗಿದೆ. ಮತದಾರರ ಪಟ್ಟಿಯಿಂದ ಅರ್ಹ ಮತದಾರರ ಹೆಸರುಗಳನ್ನು ಅಕ್ರಮವಾಗಿ ತೆಗೆದುಹಾಕುವ ಪ್ರಯತ್ನಗಳನ್ನು ನಾನು ಬಲವಾಗಿ ವಿರೋಧಿಸುತ್ತೇನೆ. ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಮತದಾನದ ಹಕ್ಕಿನ ರಕ್ಷಣೆಗಾಗಿ ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರೊಂದಿಗೆ ದೃಢವಾಗಿ ನಿಲ್ಲುತ್ತೇನೆ.
ನನ್ನ ಹೇಳಿಕೆಯ ಉದ್ದೇಶವನ್ನು ತಪ್ಪಾಗಿ ಅರ್ಥೈಸದೆ, ಅದರ ನೈಜ ಆಶಯವನ್ನು ಗ್ರಹಿಸಬೇಕೆಂದು ಸ್ಪಷ್ಟಪಡಿಸುತ್ತೇನೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ



