Film & EntertainmentKannada NewsKarnataka NewsLatest

*ಜೈಲಿನಿಂದಲೇ ಹೆಂಡತಿ ರಕ್ಷಣೆಗೆ ನಿಂತ ದರ್ಶನ್*: *ಧನ್ವೀರ್ ವಿರುದ್ಧ ಕೋರ್ಟ್ ಮೆಟ್ಟಲೇರಿದ ಚಾಲೆಂಜಿಂಗ್‌ ಸ್ಟಾರ್*

ಪ್ರಗತಿವಾಹಿನಿ ಸುದ್ದಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್ ಕುಟುಂಬ ಹಾಗೂ ನಟ ಧನ್ವೀರ್ ನಡುವಿನ ವಿವಾದ ಇದೀಗ ನ್ಯಾಯಾಲಯದ ಮೆಟ್ಟಿಲೇರಿದೆ. ತಮ್ಮ ಮತ್ತು ಪತ್ನಿ ವಿಜಯಲಕ್ಷ್ಮಿ ಅವರ ತೇಜೋವಧೆ ಮಾಡಲಾಗುತ್ತಿದೆ ಎಂದು ಆರೋಪಿಸಿರುವ ದರ್ಶನ್, ತಮ್ಮ ಪತ್ನಿ ಹಾಗೂ ಕುಟುಂಬದ ವಿರುದ್ಧ ಯಾವುದೇ ಹೇಳಿಕೆ ನೀಡದಂತೆ ಧನ್ವೀರ್‌ಗೆ ನಿರ್ಬಂಧ ವಿಧಿಸಬೇಕೆಂದು ಕೋರಿ ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.

ತಮ್ಮ ಪರ ವಕೀಲ ರಂಗನಾಥ ರೆಡ್ಡಿ ಅವರ ಮೂಲಕ ಅರ್ಜಿ ಸಲ್ಲಿಸಿರುವ ದರ್ಶನ್, ಧನ್ವೀರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಅಲ್ಲದೆ, ತಮ್ಮ ಕುಟುಂಬದ ಕುರಿತು ಮಾಧ್ಯಮಗಳಲ್ಲಿ ಅಥವಾ ಸಾರ್ವಜನಿಕವಾಗಿ ಯಾವುದೇ ಹೇಳಿಕೆ ನೀಡದಂತೆ ತಡೆಯಾಜ್ಞೆ ವಿಧಿಸಬೇಕು ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.

ಅರ್ಜಿಯಲ್ಲಿ ಧನ್ವೀರ್ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ದರ್ಶನ್, ತಮ್ಮ ಅಭಿಮಾನಿಗಳ ಬೆಂಬಲದಿಂದ ಧನ್ವೀರ್ ಬೆಳೆದಿದ್ದಾನೆ. ಆದರೆ ಇದೀಗ ತಮ್ಮ ಮತ್ತು ಪತ್ನಿಯ ಗೌರವಕ್ಕೆ ಧಕ್ಕೆ ತರುತ್ತಿದ್ದಾನೆ ಎಂದು ಆರೋಪಿಸಿದ್ದಾರೆ. ತಮ್ಮ ಹೆಸರನ್ನು ಬಳಸಿಕೊಂಡು ಬೆಳೆದು, ಕೊನೆಗೆ ತಮ್ಮ ಕುಟುಂಬದ ಬೆನ್ನಿಗೇ ಚೂರಿ ಹಾಕುವ ಕೆಲಸ ಮಾಡಿದ್ದಾನೆ ಎಂದು ದೂರಿದ್ದಾರೆ.

ಪ್ರದೋಷ್ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮ ಪತ್ನಿ ವಿಜಯಲಕ್ಷ್ಮಿ ವಿರುದ್ಧ ಧನ್ವೀರ್ ಮಾಡಿರುವ ಆರೋಪಗಳು ಸಂಪೂರ್ಣ ಆಧಾರರಹಿತ ಮತ್ತು ಸುಳ್ಳು ಎಂದು ದರ್ಶನ್ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ಧನ್ವೀರ್ ನೀಡುತ್ತಿರುವ ಹೇಳಿಕೆಗಳಿಂದ ಪತ್ನಿಯ ಚಾರಿತ್ರ್ಯಕ್ಕೆ ಧಕ್ಕೆ ಉಂಟಾಗುತ್ತಿದ್ದು, ಕುಟುಂಬಕ್ಕೆ ಮಾನಸಿಕ ನೆಮ್ಮದಿ ಇಲ್ಲದಂತಾಗಿದೆ ಎಂದು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ.

ಧನ್ವೀರ್ ಅವರು ದರ್ಶನ್, ಅವರ ಪತ್ನಿ ಅಥವಾ ಕುಟುಂಬದ ವಿರುದ್ಧ ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಹೇಳಿಕೆ ನೀಡದಂತೆ ತಡೆಯಾಜ್ಞೆ ವಿಧಿಸಬೇಕು ಎಂಬುದು ಅರ್ಜಿಯ ಪ್ರಮುಖ ಮನವಿಯಾಗಿದೆ. ಪ್ರದೋಷ್ ಹಾಗೂ ಕುಟುಂಬಕ್ಕೆ ಸಂಬಂಧಿಸಿದ ವಿಚಾರಗಳಲ್ಲಿ ಸುಳ್ಳು ಆರೋಪಗಳನ್ನು ಮಾಡಿ ತೇಜೋವಧೆ ಮಾಡುವುದನ್ನು ತಡೆಯಬೇಕು ಎಂದೂ ಕೋರಲಾಗಿದೆ.

ಅಲ್ಲದೆ, ನಂಬಿಕೆದ್ರೋಹ ಎಸಗಿ ಕುಟುಂಬದ ಗೌರವಕ್ಕೆ ಧಕ್ಕೆ ತಂದಿರುವ ಆರೋಪದ ಹಿನ್ನೆಲೆಯಲ್ಲಿ ಮಾನನಷ್ಟ ಮೊಕದ್ದಮೆಯಡಿ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ.

ವಕೀಲ ರಂಗನಾಥ ರೆಡ್ಡಿ ಅವರ ಮೂಲಕ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ಶೀಘ್ರದಲ್ಲೇ ಕೈಗೆತ್ತಿಕೊಳ್ಳುವ ನಿರೀಕ್ಷೆಯಿದೆ. ಕಳೆದ ಕೆಲವು ದಿನಗಳಿಂದ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮತ್ತು ಧನ್ವೀರ್ ನಡುವೆ ನಡೆಯುತ್ತಿರುವ ಆರೋಪ-ಪ್ರತ್ಯಾರೋಪಗಳು ಇದೀಗ ಕಾನೂನು ಹೋರಾಟದ ಹಂತ ತಲುಪಿದ್ದು, ಮುಂದಿನ ಬೆಳವಣಿಗೆ ಕುತೂಹಲ ಮೂಡಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button